ದೌರ್ಜನ್ಯ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯ

| Published : Jun 25 2025, 01:17 AM IST

ಸಾರಾಂಶ

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಜಿಲ್ಲೆಯಲ್ಲಿ ದಾಖಲಾದ ಪ್ರಕರಣಗಳ ತ್ವರಿತ ವಿಚಾರಣೆ ಹಾಗೂ ವಿಲೇವಾರಿಗೆ ಅನುಕೂಲವಾಗುವಂತೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ತ್ರೈಮಾಸಿಕ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ದೌರ್ಜನ್ಯ ಪ್ರಕರಣಗಳಲ್ಲಿ ಪ್ರತಿದೂರು ದಾಖಲು, ಮೇಲ್ಮನವಿ ಹಾಗೂ ವಿಚಾರಣೆ ವಿಳಂಬವಾಗುವುದರಿಂದ ವಿಲೇವಾರಿ ಪ್ರಮಾಣ ಕಡಿಮೆಯಿದೆ. ಸಂತ್ರಸ್ತರಿಗೆ ಕಾಲಮಿತಿಯಲ್ಲಿ ನ್ಯಾಯ ಒದಗಿಸುವ ದೃಷ್ಠಿಯಿಂದ ಜಿಲ್ಲಾ ಹಂತದಲ್ಲಿ ವಿಶೇಷ ನ್ಯಾಯಾಲಯ ಸ್ಥಾಪನೆ ಅಗತ್ಯವಿದೆ. ಬೇರೆ ಜಿಲ್ಲೆಗಳಲ್ಲಿ ಪೋಕ್ಸೋ ಹಾಗೂ ದೌರ್ಜನ್ಯ ಪ್ರಕರಣಗಳ ವಿಚಾರಣೆ ಈಗಾಗಲೇ ಜಿಲ್ಲಾ ಹಂತದಲ್ಲಿ ಪ್ರತ್ಯೇಕ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗಿದೆ. ಇದೇ ಮಾದರಿಯಲ್ಲಿ ಜಿಲ್ಲೆಯಲ್ಲೂ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲು ವರದಿ ಸಿದ್ಧಪಡಿಸುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದರು.

ಜಿಲ್ಲೆಯಲ್ಲಿ ಮೇ ಅಂತ್ಯಕ್ಕೆ 129 ದೌರ್ಜನ್ಯ ಪ್ರಕರಣಗಳು ಬಾಕಿಯಿವೆ. ಏಪ್ರಿಲ್‌ನಲ್ಲಿ 128 ಪ್ರಕರಣಗಳು ಬಾಕಿಯಿದ್ದು, 2 ಹೊಸ ಪ್ರಕರಣಗಳು ಸೇರಿ ಒಟ್ಟು 130 ಪ್ರಕರಣಗಳು ವಿಚಾರಣೆ ಹಂತದಲ್ಲಿದ್ದವು. ಈ ಪೈಕಿ 1 ಪ್ರಕರಣದಲ್ಲಿ ಶಿಕ್ಷೆಯಾದರೆ, 2 ಪ್ರಕರಣಗಳಲ್ಲಿ ಆರೋಪಿತರು ಬಿಡುಗಡೆಯಾಗಿದ್ದಾರೆ. ಮೇ ನಲ್ಲಿ 2 ದೌರ್ಜನ್ಯ ಪ್ರಕರಣಗಳು ಹೊಸದಾಗಿ ದಾಖಲಾಗಿವೆ ಎಂದು ಸರ್ಕಾರಿ ಅಭಿಯೋಜಕಿ ಸಭೆಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ದಾಖಲಾಗುತ್ತಿರುವ ದೌರ್ಜನ್ಯ ಪ್ರಕರಣಗಳನ್ನು ಶೀಘ್ರವಾಗಿ ವಿಲೇ ಮಾಡಲು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದಿಂದ ಪ್ರತ್ಯೇಕವಾಗಿ ವಿಶೇಷ ಪೊಲೀಸ್ ಠಾಣೆ ತರೆಯಲಾಗುತ್ತಿದೆ. ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಂತ್ರಸ್ತರು ನೇರವಾಗಿ ಈ ವಿಶೇಷ ಪೊಲೀಸ್ ಠಾಣೆಗೆ ಆಗಮಿಸಿ ದೂರು ಸಲ್ಲಿಸಬಹುದು. ಇಲ್ಲವಾದರೆ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದರೂ ಕೂಡ ವಿಶೇಷ ಪೊಲೀಸ್ ಠಾಣೆಗೆ ಪ್ರಕರಣವನ್ನು ವರ್ಗಾಯಿಸಲಾಗುವುದು. ಪ್ರಕರಣ ದಾಖಲಾದ ಕೂಡಲೇ ಸ್ಥಳ ಪರಿಶೀಲಿಸಿ, ಕೃತ್ಯದ ಕರುಹುಗಳನ್ನು ಕಲೆ ಹಾಕಿ, ಪಿರ‍್ಯಾದಿ, ನೊಂದವರು ಹಾಗೂ ಪ್ರತ್ಯಕ್ಷ ದರ್ಶಿಗಳ ಹೇಳಿ ಪಡೆದು ಆರೋಪಿತರನ್ನು ಪತ್ತೆಮಾಡಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುಲು ವಿಶೇಷ ಪೊಲೀಸ್ ಠಾಣೆ ಅಧಿಕಾರಿಗಳು ಕ್ರಮ ವಹಿಸಲಿದ್ದಾರೆ ಎಂದು ಪೊಲೀಸ್ ಉಪಾಧೀಕ್ಷಕ ದಿನಕರ್ ತಿಳಿಸಿದರು.

ದೌರ್ಜನ್ಯ ಪ್ರತಿ ಬಂಧಕ ಕಾಯ್ದೆಯಡಿ ದಾಖಲಾದ ಪ್ರಕರಣಗಳ ಪೈಕಿ 2 ಪ್ರಕರಣಗಳಲ್ಲಿ ಬಿ ರಿಪೋರ್ಟ್ ದಾಖಲಿಸಲಾಗಿದೆ. 2 ಪ್ರಕರಣಗಳನ್ನು ಬೇರೆ ಜಿಲ್ಲೆಗೆ ವರ್ಗಾಯಿಸಲಾಗಿದೆ.

8 ಪ್ರಕರಣಗಳು ತನಿಖೆ ಹಂತದ್ಲಲಿವೆ. 15 ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದೆ ಎಂದು ಪೊಲೀಸ್ ಉಪಾಧೀಕ್ಷಕ ದಿನಕರ್ ಮಾಹಿತಿ ನೀಡಿದರು.

ಜನವರಿ 2025ರಿಂದ ಜೂನ್ ವರೆಗೆ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಒಟ್ಟು 24 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 21 ಪರಿಶಿಷ್ಟ ಜಾತಿ ಹಾಗೂ 3 ಪರಿಶಿಷ್ಟ ವರ್ಗಕ್ಕೆ ಸೇರಿದವರ ಮೇಲಿನ ಪ್ರಕರಣಗಳಾಗಿವೆ. ಒಟ್ಟು 17,27,336 ರು. ಪರಿಹಾರ ಧನವನ್ನು ನೊಂದವರಿಗೆ ನೀಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ಸಭೆಗೆ ತಿಳಿಸಿದರು.

ಹಿರಿಯೂರು, ಮೊಳಕಾಲ್ಮೂರು, ಹೊಳಲ್ಕೆರೆ ತಾಲೂಕಿನ ಗ್ರಾಮೀಣ ಭಾಗದಲ್ಲಿ ಕಿರಾಣಿ ಹಾಗೂ ಗೂಡು ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದಾಗಿ ಕಚೇರಿ ಮನವಿ ಪತ್ರಗಳು ಬಂದಿವೆ. ಅಬಕಾರಿ ಇಲಾಖೆಗಳು ಶಿಸ್ತು ಕ್ರಮ ಕೈಗೊಳ್ಳದಿದ್ದರೆ, ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಎಚ್ಚರಿಸಿದರು.

ಉಪ ವಿಭಾಗಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿ, ತಾಲೂಕು ಮಟ್ಟದಲ್ಲಿ ಕುಂದು ಕೊರತೆ ಸಭೆಗಳನ್ನು ನಡೆಸಲು ಆದೇಶಿಸುವುದಾಗಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದರು. ದೌರ್ಜನ್ಯ ಪ್ರತಿಬಂಧಕ ಕಾಯ್ದೆಯ ಸಭೆಯ ನಂತರ, ಪರಿಶಿಷ್ಟ ಜಾತಿ ಹಾಗೂ ಪಂಗಡ, ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯಗಳ ಜನರೊಂದಿಗೆ ಕುಂದುಕೊರತೆ ಸಭೆ ನಡೆಸಿ ಅವರು ಮಾತನಾಡಿದರು.

ಸರ್ಕಾರ ಕುಂದು ಕೊರತೆ ಸಭೆ ನಡೆಸಲು ನಿದೇರ್ಶಿಸಿದೆ. ಮುಂದಿನ ತಿಂಗಳಿನಿಂದ ಪ್ರತಿ ತಾಲೂಕಿನಲ್ಲಿಯೂ ಸಭೆಗಳನ್ನು ಆಯೋಜಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವುದಾಗಿ ಅವರು ತಿಳಿಸಿದರು.

ಜಿಪಂ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಗುಜ್ಜಾರಪ್ಪ, ಎಂ.ಡಿ.ನವಕೋಟಿ, ಡಿ.ಒ.ಮೊರಾರ್ಜಿ, ಬೋರಸ್ವಾಮಿ, ಹೇಮೇಗೌಡ, ಜಿಪಂ ಸಿಪಿಒ ಗಾಯಿತ್ರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ವಿಜಯಕುಮಾರ್, ಡಿಡಿಪಿಐ ಮಂಜುನಾಥ್, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.