ಸಾರಾಂಶ
ಕನ್ನಡಪ್ರಭ ವಾರ್ತೆ ಕೆ.ಆರ್. ನಗರತಾಲೂಕಿನಾದ್ಯಂತ ಬುಧವಾರ ಮಹಾಶಿವರಾತ್ರಿ ಹಬ್ಬವನ್ನು ಅತ್ಯಂತ ಶ್ರದ್ದಾ ಭಕ್ತಿಯಿಂದ ಆಚರಿಸಲಾಯಿತು.ತಾಲೂಕಿನ ವಿವಿಧ ದೇವಾಲಯಗಳಲ್ಲಿ ಬೆಳಗ್ಗೆಯಿಂದಲೇ ವಿಶೇಷ ಪೂಜೆ ಮತ್ತು ಪುನಸ್ಕಾರಗಳನ್ನು ಮಾಡಿ ಮಹಾ ಮಂಗಳಾರತಿ ನೆರವೇರಿತು.ಸಾಲಿಗ್ರಾಮ ತಾಲೂಕಿನ ಹೊಸೂರು ಗ್ರಾಮದ ಬಳಿ ಇರುವ ರಾಮಲಿಂಗೇಶ್ವರ ದೇವಾಲಯದಲ್ಲಿ ದೇವರಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಜತೆಗೆ ಚುಂಚನಕಟ್ಟೆ ಹೋಬಳಿ ಸೇರಿದಂತೆ ಜಿಲ್ಲೆಯ ಹಲವು ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.ದೇವಾಲಯಕ್ಕೆ ಬಂದಿದ್ದ ಭಕ್ತರಿಗೆ ಬುಧವಾರ ಬೆಳಗ್ಗೆಯಿಂದ ನಿರಂತರವಾಗಿ ಅನ್ನ ದಾಸೋಹ ನಡೆಯಿತು, ಇದರೊಂದಿಗೆ ಚುಂಚನಕಟ್ಟೆ ಶ್ರೀರಾಮ ದೇವಾಲಯ, ಸಾಲಿಗ್ರಾಮ ಯೋಗಾನರಸಿಂಹ ಸ್ವಾಮಿ ದೇವಾಲಯ, ರಾಂಪುರದ ಮಹದೇಶ್ವರ ದೇವಾಲಯಗಳಲ್ಲಿ ದೇವರಿಗೆ ವಿಶೇಷ ಪೂಜೆ ಮಾಡಿ ಭಕ್ತರಿಗೆ ಪ್ರಸಾದ ನೀಡಲಾಯಿತು.ತಾಲೂಕಿನ ಇತಿಹಾಸ ಪ್ರಸಿದ್ದ ಕಪ್ಪಡಿ ಕ್ಷೇತ್ರದಲ್ಲಿ ವಾರ್ಷಿಕ ಮಹಾ ಜಾತ್ರೆ ಆರಂಭವಾಗಿದ್ದು, ಒಂದು ತಿಂಗಳು ನಿರಂತರ ಮಹಾ ಜಾತ್ರೆ ನಡೆಯಲಿರುವುದರಿಂದ ಧರೆಗೆ ದೊಡ್ಡವರು ಎಂದೇ ಹೆಸರುವಾಸಿಯಾದ ರಾಚಪ್ಪಾಜಿ, ಸಿದ್ದಪ್ಪಾಜಿ ಮತ್ತು ಚನ್ನಾಜಮ್ಮನವರ ಗದ್ದುಗೆಗೆ ವಿಶೇಷ ಪೂಜೆ ಮಾಡಲಾಯಿತು.ಪಟ್ಟಣದ ಬಸವೇಶ್ವರ ಬಡಾವಣೆಯ ಮಲೆ ಮಹದೇಶ್ವರ ದೇವಾಲಯದಲ್ಲಿ ದೇವರಿಗೆ ವಿವಿದ ಬಗೆಯ ಅಲಂಕಾರಗಳನ್ನು ಮಾಡಿ ಮಹಾ ಮಂಗಳಾರತಿ ನೆರವೇರಿಸಲಾಯಿತಲ್ಲದೆ ಭಕ್ತರಿಗೆ ಲಾಡು ಪ್ರಸಾದ ವಿತರಿಸಿ ರಾತ್ರಿಯಿಡೀ ವಿಶೇಷ ಕಾರ್ಯಕ್ರಮ ನಡೆಸಲಾಯಿತು.ಪಟ್ಟಣದ ಪುರಸಭೆ ಬಯಲು ರಂಗ ಮಂದಿರದ ಆವರಣದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿದ್ಯಾಲಯದ ವತಿಯಿಂದ 8 ಸಾವಿರ ತೆಂಗಿನಕಾಯಿಗಳಿಂದ ಪ್ರತಿಷ್ಠಾಪಿಸಿರುವ 21 ಅಡಿ ಎತ್ತರದ ಶಿವಲಿಂದ ಜನಾಕರ್ಷಣೆಯ ಕೇಂದ್ರ ಬಿಂದುವಾಗಿದ್ದು, ಕಳೆದ ಒಂದು ವಾರದಿಂದ ಸಹಸ್ರಾರು ಮಂದಿ ಭಕ್ತರು ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ.