ಉತ್ತಮ ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ವಿಶೇಷ ಗಮನ: ಜಿಲ್ಲಾಧಿಕಾರಿ ಡಾ.ಸುಶೀಲಾ

| Published : Feb 10 2025, 01:48 AM IST

ಉತ್ತಮ ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ವಿಶೇಷ ಗಮನ: ಜಿಲ್ಲಾಧಿಕಾರಿ ಡಾ.ಸುಶೀಲಾ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸುವ ವಿನೂತನ ಕಾರ್ಯಕ್ರಮಗಳ ಮೂಲಕ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರಿಯಾಗಿಟ್ಟುಕೊಂಡು ಯೋಜನೆ, ಕಾರ್ಯರೂಪಕ್ಕೆ ತರಲು ಸಂಬಂಧಿಸಿದ ಅಧಿಕಾರಿಗಳು ವಿಶೇಷ ಗಮನ ನೀಡುವಂತೆ ಜಿಲ್ಲಾಧಿಕಾರಿ ಡಾ. ಸುಶೀಲಾ ಸೂಚಿಸಿದರು.

ಜಿಲ್ಲೆಯಲ್ಲಿ 10ನೇ ತರಗತಿ ಪರೀಕ್ಷೆ ರಿಸಲ್ಟ್‌ ಸುಧಾರಣೆ ಕಾರ್ಯಾಗಾರ । ಸೂಕ್ತ ಕ್ರಮಕ್ಕೆ ನಿರ್ದೇಶನ

ಕನ್ನಡಪ್ರಭ ವಾರ್ತೆ ಯಾದಗಿರಿ

ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸುವ ವಿನೂತನ ಕಾರ್ಯಕ್ರಮಗಳ ಮೂಲಕ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರಿಯಾಗಿಟ್ಟುಕೊಂಡು ಯೋಜನೆ, ಕಾರ್ಯರೂಪಕ್ಕೆ ತರಲು ಸಂಬಂಧಿಸಿದ ಅಧಿಕಾರಿಗಳು ವಿಶೇಷ ಗಮನ ನೀಡುವಂತೆ ಜಿಲ್ಲಾಧಿಕಾರಿ ಡಾ. ಸುಶೀಲಾ ಸೂಚಿಸಿದರು.

ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಕುರಿತಂತೆ, ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರೊಂದಿಗೆ ನಡೆದ ಕಾರ್ಯಾಗಾರದಲ್ಲಿ ಮಾತನಾಡಿದರು.

ಜಿಲ್ಲೆಯ ಪ್ರಗತಿಯನ್ನು ನಿರ್ಧರಿಸುವ ಹಲವಾರು ಸೂಚ್ಯಂಕಗಳಲ್ಲಿ ಶಿಕ್ಷಣದ ಗುಣಮಟ್ಟವು ಒಂದು. ಸಾಮಾನ್ಯವಾಗಿ ಶಿಕ್ಷಣದ ಗುಣಮಟ್ಟವನ್ನು ಎಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಕುರಿತಂತೆ ಮತ್ತು ಪಿಯುಸಿ ಫಲಿತಾಂಶದ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. ಯಾದಗಿರಿ ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಕುರಿತಂತೆ ಫಲಿತಾಂಶ ಬೇರೆ ಜಿಲ್ಲೆಗಳಿಗೆ ಹೋಲಿಸಿದಲ್ಲಿ ಎಲ್ಲಾ ಜಿಲ್ಲೆಗಳಿಗಿಂತ ಕಡಿಮೆ ಇದೆ. ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಕುರಿತಂತೆ ಫಲಿತಾಂಶವನ್ನು ಉತ್ತಮಪಡಿಸುವ ದೆಸೆಯಲ್ಲಿ ಅನೇಕ ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರಿಯಾಗಿಟ್ಟುಕೊಂಡು ಯೋಜನೆ ತರಲಾಗುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ಈ ದಿಶೆಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವಂತೆ ತಿಳಿಸಿದರು.

ಮಕ್ಕಳ ಕಲಿಕೆಯನ್ನು ಪರಿಶೀಲಿಸಲು ಜಿಲ್ಲಾ ಹಂತದ, ಬ್ಲಾಕ್ ಹಂತದ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಜವಾಬ್ದಾರಿವಹಿಸಿ ಆದೇಶ ನೀಡಲಾಗಿದೆ. ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ವಿದ್ಯಾರ್ಥಿಗಳ ಗೈರು ಹಾಜರಿ ಹಾಗೂ ಪೋಷಕರ ನಿರಾಸಕ್ತಿಯು ಫಲಿತಾಂಶದ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿದುಬಂದಿರುವ ಹಿನ್ನೆಲೆಯಲ್ಲಿ ತಾವು ಹಾಗೂ ಜಿಲ್ಲಾ ಪಂಚಾಯತಿ, ಮುಖ್ಯ ಕಾರ್ಯನಿರ್ವಣಾಧಿಕಾರಿಗಳು ಜಂಟಿಯಾಗಿ ಸಭೆ ಮತ್ತು ಕಾರ್ಯಾಗಾರ ನಡೆಸಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಕುರಿತಂತೆ ಫಲಿತಾಂಶ ಉತ್ತಮಪಡಿಸುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ತಮ್ಮ ವ್ಯಾಪ್ತಿಯಲ್ಲಿ ಮಕ್ಕಳಿಗೆ ಪರೀಕ್ಷೆಗೆ ಬಾಕಿ ಇರುವ 40 ದಿನಗಳ ವರೆಗೆ ಯಾವುದೇ ಮಗು ಶಾಲೆ ಬಿಡದಂತೆ ಹಾಗೂ ಶಾಲಾ ಅವಧಿಯ ನಂತರ ತೊಡಗಿಕೊಳ್ಳುವಂತಾಗಬೇಕು ಎಂದರು.

ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ರಾತ್ರಿ ವೇಳೆ ತರಗತಿಗಳನ್ನು ಹಮ್ಮಿಕೊಳ್ಳಲು ವ್ಯವಸ್ಥೆ ಕಲ್ಪಿಸಲು ಕೋರಿದ ಅವರು ‘ನಮ್ಮ ಮಕ್ಕಳು ನಮ್ಮ ಹೆಮ್ಮೆ’ ಎಂಬುದನ್ನು ಮತ್ತು ಅವರ ಉಜ್ವಲ ಭವಿಷ್ಯ ರೂಪಿಸಲು ಶಿಕ್ಷಣ ಇಲಾಖೆಯೊಂದಿಗೆ ಕೈಜೋಡಿಸುವಂತೆ ಮನವಿ ಮಾಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಲವೀಶ್ ಒರಡಿಯಾ ಮಾತನಾಡಿ, ಜಿಲ್ಲೆಯ ಫಲಿತಾಂಶವನ್ನು ಉತ್ತಮಪಡಿಸಲು 20 ಅಂಶಗಳ ಕಾರ್ಯಕ್ರಮಗಳನ್ನು ಇಲಾಖೆಯು ಜಾರಿಗೊಳಿಸುತ್ತಿದ್ದು, ಉತ್ತಮ ರೀತಿಯಲ್ಲಿ ಪಾಲಕರು ಹಾಗೂ ಶಿಕ್ಷಕರು ಅವುಗಳನ್ನು ಅನುಷ್ಠಾನಗೊಳಿಸುತ್ತಿದ್ದಾರೆ. ಶಾಲಾ ಅವಧಿಯ ನಂತರ ಅವರಿಗೆ ಮನೆಯಲ್ಲಿಯೇ ಓದಿಕೊಳ್ಳುವಂತಾಗಲು ಉತ್ತಮ ಮೇಲ್ವಿಚಾರಣೆ ಅಗತ್ಯವಿದೆ ಎಂದರು.

ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಎಸ್.ಮುಧೋಳ್ ಮಾತನಾಡಿ, ಇಲ್ಲಿಯವರಿಗೆ ಜಿಲ್ಲೆಯ ಫಲಿತಾಂಶ ಸುಧಾರಣೆಗಾಗಿ ಕೈಗೊಳ್ಳಲಾಗುತ್ತಿರುವ ಕ್ರಮಗಳ ಬಗ್ಗೆ ತಿಳಿಸಿ ಪಾಲಕ- ಪೋಷಕರಿಂದ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರಿಂದ ಬೇಕಾದ ಸಹಕಾರದ ಕುರಿತು ವಿವರಿಸಿದರು. ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳು ಹಾಗೂ ಆಯಾ ತಾಲೂಕಿನ ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಹಾಜರಿದ್ದರು.