ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರುತಂಬಾಕು ಸೇವನೆಯಿಂದ ಮಾರಣಾಂತಿಕ ಕಾಯಿಲೆಗಳು ಹೆಚ್ಚುತ್ತಿವೆ ಎಂದು ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ನ ಉಪಶಮನ ಆರೈಕೆಯ ಹಿರಿಯ ವ್ಯವಸ್ಥಾಪಕಿ ಡಾ. ವಿಭಾ ಹೇಳಿದರು.ಕುವೆಂಪುನಗರದ ಬಾಸುದೇವ ಸೋಮಾನಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನ ವತಿಯಿಂದ ತಂಬಾಕು ಸೇವನೆಯ ದುಷ್ಪರಿಣಾಮಗಳು ಎಂಬ ವಿಷಯದ ಕುರಿತು ಶುಕ್ರವಾರ ಏರ್ಪಡಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಂಪನ್ಮೂಲ ವ್ಯಕ್ತಿಗಳಾಗಿ ಅವರು ಮಾತನಾಡಿದರು.ಇಂದಿನ ಆಧುನಿಕ ಜಗತ್ತಿನಲ್ಲಿ ಯುವ ಜನತೆಯು ಹಲವಾರು ದುಶ್ಚಟಗಳ ದಾಸರಾಗುತ್ತಿದ್ದಾರೆ, ಅದರಲ್ಲಿ ತಂಬಾಕು ಸೇವನೆ ಕೂಡ ಒಂದಾಗಿದ್ದು, ಇದರಿಂದಾಗಿ ಪ್ರತಿವರ್ಷ ಹಲವಾರು ಜನರು ಕ್ಯಾನ್ಸರ್, ನ್ಯುಮೋನಿಯಾ, ಹೃದಯ ಸಂಬಂಧಿ ಕಾಯಿಲೆ, ಶ್ವಾಸಕೋಶದ ತೊಂದರೆ ಮೊದಲಾದ ಮಾರಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ತಂಬಾಕು ಸೇವನೆಯು ಮಹಿಳೆಯರಲ್ಲಿ ಗರ್ಭಪಾತ, ಅಕಾಲಿಕ ಹಾಗೂ ಅನಾರೋಗ್ಯಪೂರಿತ ಮಗು ಜನನ ಮೊದಲಾದ ಪರಿಣಾಮಗಳನ್ನು ಉಂಟುಮಾಡುತ್ತಿದೆ. ಆದ್ದರಿಂದ ಇಂದಿನ ಯುವ ಜನತೆಗೆ ಇದರ ಸೇವನೆಯಿಂದಾಗುವ ದುಷ್ಟರಿಣಾಮಗಳ ಬಗ್ಗೆ ಸರಿಯಾದ ಮಾರ್ಗದರ್ಶನ ನೀಡುವ ಅವಶ್ಯಕತೆ ಇಂದು ಅತ್ಯಂತ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಇಂತಹ ಉಪನ್ಯಾಸ ಕಾರ್ಯಕ್ರಮಗಳು ವಿದಾರ್ಥಿಗಳಿಗೆ ಉಪಯುಕ್ತ ಮಾಹಿತಿ ನೀಡಲು ಸಹಾಯಕಾರಿ ಎಂದು ಅವರು ತಿಳಿಸಿದರು.ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಎಂ. ಮಹದೇವಸ್ವಾಮಿ. ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮ ಸುತ್ತಮುತ್ತಲಿನ ಜನರಿಗೆ ತಂಬಾಕು ಸೇವನೆಯಿಂದಾಗುವ ಅಪಾಯಗಳ ಬಗ್ಗೆ ಅರಿವು ಮೂಡಿಸಿ ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ನಿಮ್ಮ ಕೈಲಾದ ಅಳಿಲು ಸೇವೆ ಸಲ್ಲಿಸಿ ಎಂದು ತಿಳಿಸಿದರು.ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್ ಸಂಯೋಜಕಿ ದಾಕ್ಷಾಯಿಣಿ, ಕಾಲೇಜಿನ ಬೋಧಕ, ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಹಾಗೂ ಸಂಯೋಜಕ ಡಾ.ಟಿ. ರಮೇಶ್ ಸ್ವಾಗತಿಸಿದರು.