ಸಾರಾಂಶ
ಕನ್ನಡಪ್ರಭ ವಾರ್ತೆ ಉಡುಪಿಕರ್ನಾಟಕ ಸಾಹಿತ್ಯ ಅಕಾಡೆಮಿ, ಚಕೋರ ಸಾಹಿತ್ಯ ವಿಚಾರ ವೇದಿಕೆಗಳ ಸಂಯುಕ್ತ ಆಶ್ರಯದಲ್ಲಿ ಎದೆಯ ಹಣತೆಯ ಬೆಳಕು - ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಕತೆಗಳ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವು ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಿತು. ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಪ್ರಾಧ್ಯಾಪಕ ಡಾ. ಪ್ರವೀಣ್ ಕುಮಾರ್ ವಿಶೇಷ ಉಪನ್ಯಾಸ ನೀಡಿ, ಬಾನು ಮುಷ್ತಾಕ್ ಅವರ ಬದುಕಿನ ಅನುಭವಗಳೇ ಅವರ ಕತೆಗಳಲ್ಲಿ ಅಡಕವಾಗಿದೆ. ಸಮಾಜದ ಕಟ್ಟ ಕಡೆಯ ಹೆಣ್ಮಕ್ಕಳ ಶೋಚನೀಯ ಸಂಗತಿಯನ್ನು ತೆರೆದಿಡುತ್ತಾ ಹೋರಾಟಗಾರ್ತಿಯಾಗಿ, ಪತ್ರಕರ್ತೆಯಾಗಿ ತೊಡಗಿಸಿಕೊಂಡಿದ್ದಾರೆ. ಬಾನು ಮುಷ್ತಾಕ್ ಅವರ ಕತೆಗಳಲ್ಲಿ ಪ್ರಯೋಗಶೀಲ ತಂತ್ರಗಳಿಲ್ಲ. ವಾಸ್ತವ ಸತ್ಯಾಸತ್ಯತೆಯನ್ನು ತಮ್ಮ ಕೃತಿಗಳ ಮೂಲಕ ಸಮಾಜಕ್ಕೆ ತೆರೆದಿಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದರು.ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಲೀಲಾಬಾಯಿ ಭಟ್ ಅಧ್ಯಕ್ಷತೆ ವಹಿಸಿದ್ದರು. ಸಾಹಿತ್ಯ ಅಕಾಡೆಮಿ ಸದಸ್ಯ, ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಪ್ರೊ. ಜಯಪ್ರಕಾಶ್ ಶೆಟ್ಟಿ ಎಚ್. ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿ.ಎಂ. ಶರೀಫ್ ಹೂಡೆ, ರಾಮಾಂಜಿ ನಮ್ಮ ಭೂಮಿ, ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಕನ್ನಡ ವಿಭಾಗ ಮುಖ್ಯಸ್ಥ ನಾಗರಾಜ ಸ್ವಾಗತಿಸಿದರು. ವಿದ್ಯಾರ್ಥಿ ಸಂಘದ ಸಂಚಾಲಕಿ ಗ್ರೇಸಿ ಕೆ.ಜೆ. ವಂದಿಸಿದರು. ಚಕೋರ ಉಡುಪಿ ಜಿಲ್ಲಾ ಸಂಚಾಲಕಿ ಶಾಲಿನಿ ಯು. ಬಿ. ಕಾರ‍್ಯಕ್ರಮ ನಿರೂಪಿಸಿದರು.