ಹೊಸಕೋಟೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನ ಮತವೂ ಮೌಲ್ಯಯುತವಾದುದೆ. ಅರ್ಹರೆಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಡಾ.ವಾಸಂತಿ ಅಮರ್ ಹೇಳಿದರು
ಹೊಸಕೋಟೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನ ಮತವೂ ಮೌಲ್ಯಯುತವಾದುದೆ. ಅರ್ಹರೆಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಪಂ ಸಿಇಒ ಡಾ.ವಾಸಂತಿ ಅಮರ್ ಹೇಳಿದರು.
ನಗರದ ಶ್ರೀ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ತಾಲೂಕು ಸ್ವೀಪ್ ಸಮಿತಿ ಹಾಗೂ ನಗರಸಭೆ ಸಹಯೋಗದಲ್ಲಿ ಆಯೋಜಿಸಿದ್ದ ‘ಮತದಾರರ ವಿಶೇಷ ಜಾಗೃತಿ ಮ್ಯಾರಾಥಾನ್-2 ಹಾಗೂ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ -2026ರ ಜಾಗೃತಿ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ೧೮ ವರ್ಷ ಪೂರ್ಣಗೊಂಡಿರುವ ಪ್ರತಿ ಯುವಕ-ಯುವತಿಯೂ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಿಕೊಳ್ಳಬೇಕು. ಸಾರ್ವಜನಿಕರು ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಪರಿಶೀಲಿಸಿ ಖಾತ್ರಿಪಡಿಸಿಕೊಳ್ಳಬೇಕು. ಹೆಸರು, ವಿಳಾಸ ಸೇರಿದಂತೆ ಯಾವುದೇ ತಿದ್ದುಪಡಿ ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಅಲ್ಲದೆ, ಮತದಾರರ ಸೇವೆಗಳನ್ನು ಆನ್‌ಲೈನ್‌ನಲ್ಲಿ ಪಡೆಯಲು ವೋಟರ್ ಸಹಾಯವಾಣಿ ಆಪ್ ಬಳಸಿಕೊಳ್ಳುವಂತೆ ತಿಳಿಸಿದರು.‘ನನ್ನ ಮತ–ನನ್ನ ಹಕ್ಕು, ಪ್ರಜಾಪ್ರಭುತ್ವಕ್ಕೆ ನಮ್ಮ ಕೊಡುಗೆ’ ಹಾಗೂ ‘ಓಡಿ ಬನ್ನಿ, ಜಾಗೃತಿ ಮೂಡಿಸಿ, ತಪ್ಪದೇ ಮತದಾನ ಮಾಡಿ’ ಎಂಬ ಘೋಷಣೆಗಳೊಂದಿಗೆ ನೂರಾರು ಯುವಕ-ಯುವತಿಯರು ಹಾಗೂ ಸಾರ್ವಜನಿಕರು ಮ್ಯಾರಾಥಾನ್‌ನಲ್ಲಿ ಪಾಲ್ಗೊಂಡು ನಗರದ ಪ್ರಮುಖ ರಸ್ತೆಗಳು, ಮಾರುಕಟ್ಟೆ ಹಾಗೂ ವಿವಿಧ ಪೇಟೆಗಳಲ್ಲಿ ಮ್ಯಾರಾಥಾನ್ ಮೂಲಕ ಪ್ರಮುಖ ವೃತ್ತಗಳಲ್ಲಿ ಮಾನವ ಸರಪಳಿ ನಿರ್ಮಿಸಿ ಮತದಾರರಲ್ಲಿ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಜಿಪಂ ಉಪ ಕಾರ್ಯದರ್ಶಿ ಹಾಗೂ ತಾಲೂಕು ಮತದಾರರ ನೋಂದಣಾಧಿಕಾರಿ ಬಿ.ಶಿವಕುಮಾರ್, ಮುಖ್ಯ ಯೋಜನಾಧಿಕಾರಿ ರಾಮಕೃಷ್ಣಯ್ಯ, ತಾಪಂ ಇಒ ಮುನಿಯಪ್ಪ, ನಗರಸಭೆ ಆಯುಕ್ತ ನೀಲಲೋಚನಾ ಪ್ರಭು, ತಾಲೂಕು ಮಟ್ಟದ ಅಧಿಕಾರಿಗಳು, ನಗರಸಭೆ ಸಿಬ್ಬಂದಿ, ಜಿಪಂ ಪ್ರತಿನಿಧಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.ಫೋಟೋ: 19 ಹೆಚ್‌ಎಸ್‌ಕೆ 1
ಹೊಸಕೋಟೆಯಲ್ಲಿ ‘ಮತದಾರರ ವಿಶೇಷ ಜಾಗೃತಿ ಮ್ಯಾರಾಥಾನ್-2026’ ಹಾಗೂ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ -2026ರ ಜಾಗೃತಿ ಆಂದೋಲನಕ್ಕೆ ಜಿಪಂ ಸಿಇಒ ಡಾ.ವಾಸಂತಿ ಅಮರ್ ಚಾಲನೆ ನೀಡಿದರು.