ಕನ್ನಡಪ್ರಭ ವಾರ್ತೆ ಮೈಸೂರು

ಆಷಾಢ ಶುಕ್ರವಾರದ ಅಂಗವಾಗಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತಾದಿಗಳಿಗೆ ಅನುಕೂಲಕರ ವಾತಾವರಣ ಕಲ್ಪಿಸುವ ಉದ್ದೇಶದಿಂದ ಚಾಮುಂಡಿಬೆಟ್ಟದಲ್ಲಿ ಮಾಡಲಾಗಿರುವ ವಿವಿಧ ವ್ಯವಸ್ಥೆಗಳನ್ನು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಶುಕ್ರವಾರ ಸ್ಥಳಕ್ಕೆ ಭೇಟಿ ನೀಡಿ ಪರಿವೀಕ್ಷಿಸಿದರು.ಈ ವೇಳೆ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ದೇವಿಯ ದರ್ಶನ ವ್ಯವಸ್ಥೆ, ವಾಹನ ಸಂಚಾರ ನಿರ್ವಹಣೆ, ಕುಡಿಯುವ ನೀರು, ಸ್ವಚ್ಛತೆ, ವೈದ್ಯಕೀಯ ಸೇವೆ, ಭದ್ರತಾ ಕ್ರಮಗಳು ಸೇರಿದಂತೆ ಅಗತ್ಯ ಸೌಲಭ್ಯಗಳ ಲಭ್ಯತೆಯನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಿದ ಸಚಿವರು, ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.ಆಷಾಢ ಶುಕ್ರವಾರದಂದು ನಿರೀಕ್ಷಿತ ಭಕ್ತಸಂದಣಿಯನ್ನು ಸಮರ್ಥವಾಗಿ ನಿರ್ವಹಿಸಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಪ್ರತಿಯೊಂದು ವ್ಯವಸ್ಥೆಯೂ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಮಾಜಿ ಶಾಸಕ ಎಂ.ಕೆ. ಸೋಮಶೇಖರ್, ಜಿಪಂ ಮಾಜಿ ಸದಸ್ಯ ರಾಕೇಶ್ ಪಾಪಣ್ಣ, ಜಿಪಂ ಸಿಇಒ ಯುಕೇಶ್ ಕುಮಾರ್, ಚಾಮುಂಡಿಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಮೊದಲಾದವರು ಇದ್ದರು.