ಸಾರಾಂಶ
ತೆಂಕನಿಡಿಯೂರು ಕಾಲೇಜು ಸಭಾಂಗಣದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ನಡೆದ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ನೆರವೇರಿತು.
ಉಡುಪಿ: ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕವಾಗಿ ಮತ್ತು ಮಾನಸಿಕವಾಗಿ ಕ್ರಿಯಾಶೀಲರಾಗಿ ಸದೃಢ ಬದುಕನ್ನು ಕಟ್ಟಿಕೊಳ್ಳಲು ಸಹಕಾರಿಯಾಗುತ್ತದೆ. ಯುವ ಜನರು ಕ್ರೀಡೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಿ, ಸದೃಢ ಆರೋಗ್ಯ ಹೊಂದಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದ್ದಾರೆ.
ಶನಿವಾರ ಇಲ್ಲಿನ ತೆಂಕನಿಡಿಯೂರು ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಅಂಗವಾಗಿ ನಡೆದ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ, ಮೇಜರ್ ಧ್ಯಾನ್‌ಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಫಿಟ್ ಇಂಡಿಯಾ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿ, ಹಾಕಿ ಕ್ರೀಡಾಪಟು ಮೇಜರ್ ಧ್ಯಾನ್‌ಚಂದ್ ಅವರ ಹುಟ್ಟುಹಬ್ಬದ ಸ್ಮರಣಾರ್ಥವಾಗಿ ಇಂದು ರಾಷ್ಟ್ರೀಯ ಕ್ರೀಡಾ ದಿನವನ್ನು ದೇಶದಾದ್ಯಂತ ಆಚರಿಸಲಾಗುತ್ತಿದೆ. ಇಂದಿನ ಯುವಪೀಳಿಗೆ ಕಲಿಕೆಯ ಜೊತೆಜೊತೆಗೆ ಧ್ಯಾನ್‌ಚಂದ್‌ರಂತೆ ಕ್ರೀಡಾ ಮನೋಭಾವ, ಸಂಯಮ, ಆತ್ಮವಿಶ್ವಾಸ, ದೃಢನಿರ್ಧಾರವನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಆಗ ಮಾತ್ರ ಜೀವನದಲ್ಲಿ ಉತ್ತಮ ಸ್ಥಾನವನ್ನು ಅಲಂಕರಿಸಲು ಸಾಧ್ಯವಾಗುತ್ತದೆ ಎಂದರು.
ಶಾಸಕ ಯಶ್‌ಪಾಲ್ ಎ. ಸುವರ್ಣ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಮಾತನಾಡಿ, ಶಿಕ್ಷಣದ ಅವಿಭಾಜಕ ಅಂಗ ಕ್ರೀಡೆ. ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡಾ ಕ್ಷೇತ್ರದಲ್ಲಿಯೂ ಮುಂದೆ ಬರಬೇಕು. ಶೈಕ್ಷಣಿಕವಾಗಿ ಜಿಲ್ಲೆಯು ಮುಂಚೂಣಿಯಲ್ಲಿದ್ದು, ಕ್ರೀಡಾ ಕ್ಷೇತ್ರದಲ್ಲಿಯೂ ಸಾಧನೆಯನ್ನು ಮುಂದುವರೆಸಿಕೊಂಡು ಜಿಲ್ಲೆಗೆ ಕೀರ್ತಿ ತರುವಂತಾಗಬೇಕು ಎಂದರು.ಸಂಸದ್ ಖೇಲ್ ಮಹೋತ್ಸವ್ ವೆಬ್‌ಸೈಟ್ ಅನ್ನು ಅನಾವರಣಗೊಳಿಸಲಾಯಿತು. ರೆಡ್‌ಕ್ರಾಸ್ ಸಂಸ್ಥೆ ಕುಂದಾಪುರ ತಾಲೂಕು ಅಧ್ಯಕ್ಷ ಡಾ. ಜಯಕರ ಶೆಟ್ಟಿ ರಕ್ತದಾನದ ಮಹತ್ವದ ಕುರಿತು ಮಾತನಾಡಿದರು.ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ರೆಡ್‌ಕ್ರಾಸ್ ಸಂಸ್ಥೆ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು, ಲಯನ್ಸ್ ಕ್ಲಬ್ ಅಧ್ಯಕ್ಷ ದಿನೇಶ್ ಕಿಣಿ, ತೆಂಕನಿಡಿಯೂರು ಕಾಲೇಜು ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ. ಗಣೇಶ್ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು. ಕಾಲೇಜಿನ ರೆಡ್‌ಕ್ರಾಸ್ ಘಟಕದ ಸಂಚಾಲಕ ಪ್ರಶಾಂತ್ ನೀಲಾವರ ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿ, ವಂದಿಸಿದರು.