ಕನಕಪುರ: ಮಕ್ಕಳ ಉಜ್ವನ ಜೀವನಕ್ಕೆ ಶಿಕ್ಷಣ ಎಷ್ಟು ಮುಖ್ಯವೋ ಹಾಗೆಯೇ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಯೂ ಅಷ್ಟೇ ಮುಖ್ಯ ಎಂದು ಬಿಜಿಎಸ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಪ್ರಶಾಂತ್ ಹೇಳಿದರು.

ತಾಲೂಕಿನ ದೊಡ್ಡಆಲಹಳ್ಳಿ ಬಿಜಿಎಸ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಿದ್ದ 2026ನೇ ಸಾಲಿನ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಮಾತನಾಡಿದ ಅವರು, ಕ್ರೀಡಾಕೂಟಗಳು ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯ, ಆತ್ಮವಿಶ್ವಾಸ ಮತ್ತು ನಾಯಕತ್ವ ಗುಣ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಲಿದೆ. ಕ್ರೀಡಾಕೂಟದಲ್ಲಿ ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಮಕ್ಕಳು ಯಾವುದಾದರೂ ಒಂದು ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು. ಶಾಲೆಯ ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನು ಬೆಳಗಿಸಿ ಕ್ರೀಡಾ ಮನೋಭಾವದ ಪ್ರಮಾಣ ವಚನ ಸ್ವೀಕರಿಸಿದರು. ಕ್ರೀಡಾದಿನದಲ್ಲಿ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಅತ್ಯುತ್ತಮ ಪ್ರತಿಭೆ ಪ್ರದರ್ಶಿಸಿ ತಮ್ಮ ಕ್ರೀಡಾ ಕೌಶಲ್ಯವನ್ನು ಮೆರೆದರು. ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕ ವೃಂದ ಅತ್ಯಂತ ಉತ್ಸಾಹದಿಂದ ಭಾಗವಹಿಸಿ ಕ್ರೀಡಾದಿನದ ಯಶಸ್ಸಿಗೆ ಕೈಜೋಡಿಸಿದರು, ವಿವಿಧ ಓಟ, ಕ್ರೀಡೆ ಮತ್ತು ಕೌಶಲ್ಯಾಧಾರಿತ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳು ಹಾಗೂ ಪದಕಗಳನ್ನು ವಿತರಿಸಿ ಗೌರವಿಸಲಾಯಿತು.

ಮುಖ್ಯ ಶಿಕ್ಷಕ ಉಮೇಶ್, ದೈಹಿಕ ಶಿಕ್ಷಕ ಮಹೇಶ್, ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರು ಉಪಸ್ಥಿತರಿದ್ದರು.