ಸಾರಾಂಶ
ಕ್ರೀಡೆಯಲ್ಲಿ ಸೋಲು-ಗೆಲುವು ಸಹಜವಾಗಿದ್ದು, ಸೋಲನ್ನು ಸವಾಲಾಗಿ ಸ್ವೀಕರಿಸಿದರೆ ಹೆಚ್ಚಿನ ಸಾಧನೆಗೆ ಅವಕಾಶವಿದೆ. ಪ್ರತಿದಿನ ಸೋಲು ಮತ್ತು ಗೆಲುವನ್ನು ಲೆಕ್ಕಿಸದೆ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ.
ಕನ್ನಡಪ್ರಭ ವಾರ್ತೆ ಪಾಂಡವಪುರ
ಆರೊಗ್ಯಕರ ಜೀವನಕ್ಕೆ ಕ್ರೀಡೆ ಅಗತ್ಯ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಧರ್ಮಶೆಟ್ಟಿ ಹೇಳಿದರು.ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಹಯೋಗದಲ್ಲಿ ಆಯೋಜಿಸಿದ್ದ 14 ವರ್ಷದ ವಯೋಮಿತಿಯ ಬಾಲಕ-ಬಾಲಕಿಯರ ಕ್ರೀಡಾಕೂಟವನ್ನು ಗುಂಡು ಎಸೆಯುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಕ್ರೀಡೆ ಆರೋಗ್ಯಕರವಾದ ಉತ್ತಮ ಜೀವನ ನಡೆಸಲು ಅತ್ಯಗತ್ಯ. ಪ್ರತಿದಿನ ಕ್ರೀಡೆ ಮತ್ತು ವ್ಯಾಯಾಮವನ್ನು ಮೈಗೂಡಿಸಿಕೊಳ್ಳಬೇಕು ಎಂದರು.ಕ್ರೀಡೆಯಲ್ಲಿ ಸೋಲು-ಗೆಲುವು ಸಹಜವಾಗಿದ್ದು, ಸೋಲನ್ನು ಸವಾಲಾಗಿ ಸ್ವೀಕರಿಸಿದರೆ ಹೆಚ್ಚಿನ ಸಾಧನೆಗೆ ಅವಕಾಶವಿದೆ. ಪ್ರತಿದಿನ ಸೋಲು ಮತ್ತು ಗೆಲುವನ್ನು ಲೆಕ್ಕಿಸದೆ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ ಎಂದರು.
ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಟಿ.ಕುಮಾರ್ ಮಾತನಾಡಿ, ಕ್ರೀಡಾಪಟುಗಳಿಗೆ ಕ್ರೀಡೆಯಿಂದ ತಮ್ಮ ವೃತ್ತಿ ಜೀವನಕ್ಕೆ ಸಾಕಷ್ಟು ಅನುಕೂಲವಾಗಲಿದೆ. ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ಹಾಗಾಗಿ ಕ್ರೀಡೆಯಲ್ಲಿ ಭಾಗವಹಿಸಿ ಶಾಲೆಗೆ, ಗ್ರಾಮಕ್ಕೆ, ಪೋಷಕರಿಗೆ ಕೀರ್ತಿ ತರಬೇಕೆಂದು ಸಲಹೆ ನೀಡಿದರು.ಕ್ರೀಡಾಕೂಟದಲ್ಲಿ ಬನ್ನಂಗಾಡಿ, ಬೆಳ್ಳಾಳೆ, ಕ್ಯಾತನಹಳ್ಳಿ, ಮೇಲುಕೋಟೆ, ಪಾಂಡವಪುರ ಪಟ್ಟಣ, ಗ್ರಾಮೀಣ, ಚಿನಕುರುಳಿ,ಸೇರಿದಂತೆ ೮೦೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಈ ವೇಳೆ ರಾಜ್ಯ ಸಂಘಟನಾ ಕಾರ್ಯದರ್ಶಿ ಜಯರಾಂ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆಂಪೇಗೌಡ, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಲ್.ಶಿವಕುಮಾರ್, ತಾ.ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೇಶವಮೂರ್ತಿ, ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಯುವರಾಜ್, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಮಾದೇಶ್, ತಾ.ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಯೋಗೀಶ್ ಮತ್ತಿತರರಿದ್ದರು.