ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಸದೃಢಗೊಳಿಸುವುದರ ಜತೆಗೆ ಆತ್ಮವಿಶ್ವಾಸ, ಶಿಸ್ತು, ಸಮಯಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತದೆ ಎಂದು ತಹಸೀಲ್ದಾರ್ ಜೂಗಲ ಮಂಜುನಾಯಕ ಹೇಳಿದರು.

ಕಂಪ್ಲಿ: ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಸದೃಢಗೊಳಿಸುವುದರ ಜತೆಗೆ ಆತ್ಮವಿಶ್ವಾಸ, ಶಿಸ್ತು, ಸಮಯಪ್ರಜ್ಞೆ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತದೆ ಎಂದು ತಹಸೀಲ್ದಾರ್ ಜೂಗಲ ಮಂಜುನಾಯಕ ಹೇಳಿದರು.

ಪಟ್ಟಣದ ರೈನ್‌ಬೋ ಪದವಿಪೂರ್ವ ಕಾಲೇಜಿನಲ್ಲಿ ಸೋಮವಾರ ಆಯೋಜಿಸಿದ್ದ 2026-27ನೇ ಸಾಲಿನ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಕ್ರೀಡಾಜ್ಯೋತಿ ಬೆಳಗಿಸಿ ಮಾತನಾಡಿದರು.

ಕ್ರೀಡಾಸ್ಫೂರ್ತಿ ಹಾಗೂ ಕ್ರೀಡಾಭ್ಯಾಸವನ್ನು ವಿದ್ಯಾರ್ಥಿಗಳು ನಿತ್ಯ ಜೀವನದ ಅವಿಭಾಜ್ಯ ಅಂಗವನ್ನಾಗಿ ಮಾಡಿಕೊಂಡಾಗ ಉತ್ತಮ ಕ್ರೀಡಾಪಟುಗಳಾಗಿ ಹೊರಹೊಮ್ಮಲು ಸಾಧ್ಯ. ವಿದ್ಯಾರ್ಥಿಗಳು ಪಠ್ಯದ ಜತೆಗೆ ಕ್ರೀಡೆಗೂ ಸಮಾನ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.

ನಿತ್ಯ ಕ್ರೀಡಾಭ್ಯಾಸ ಮಾಡುವುದರಿಂದ ದೈಹಿಕ ಕ್ಷಮತೆ ಹೆಚ್ಚುವುದರ ಜತೆಗೆ ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಲು ಸಾಧ್ಯ. ತಾಲೂಕು, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಸಾಧನೆ ಮಾಡುವ ಗುರಿಯನ್ನು ವಿದ್ಯಾರ್ಥಿಗಳು ಹೊಂದಬೇಕು. ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಕ್ರೀಡಾಸ್ಫೂರ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

ಕೆಸಿಬಿ ಎಜುಕೇಷನ್ ಟ್ರಸ್ಟ್ ಸಂಸ್ಥಾಪಕ ಕೆ.ಎಸ್. ಚಾಂದ್‌ಬಾಷ ಮಾತನಾಡಿ, ಕ್ರೀಡಾಕೂಟದಲ್ಲಿ ತೀರ್ಪುಗಾರರು ಯಾವುದೇ ರೀತಿಯ ತಾರತಮ್ಯಕ್ಕೆ ಅವಕಾಶ ನೀಡದೆ ಪಾರದರ್ಶಕ ಹಾಗೂ ನ್ಯಾಯಸಮ್ಮತ ನಿರ್ಣಯಗಳನ್ನು ನೀಡಬೇಕು. ಉತ್ತಮ ಕ್ರೀಡಾಪಟುಗಳ ಪ್ರತಿಭೆಯನ್ನು ಗುರುತಿಸುವಲ್ಲಿ ತೀರ್ಪುಗಾರರ ಪಾತ್ರ ಮಹತ್ವದ್ದಾಗಿದೆ. ನಿಷ್ಪಕ್ಷಪಾತವಾದ ತೀರ್ಪಿನಿಂದ ಪ್ರತಿಭಾವಂತ ಕ್ರೀಡಾಪಟುಗಳಿಗೆ ಸೂಕ್ತ ಅವಕಾಶ ದೊರೆಯಲಿದ್ದು, ಅವರು ಮುಂದಿನ ಹಂತದ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ. ಶ್ರೀನಿವಾಸರಾವ್ ಕ್ರೀಡಾಧ್ವಜಾರೋಹಣ ನೆರವೇರಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ರೈನ್‌ಬೋ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಿ.ಕೆ. ಅಜೀಜ್ ಉಲ್ ಹಕ್ ಅಧ್ಯಕ್ಷತೆ ವಹಿಸಿದ್ದರು. ಕೆ.ಎಸ್. ಶಾರುಖ್, ಕೆ.ಎಂ. ಹೇಮಯ್ಯಸ್ವಾಮಿ, ಪಿ. ಮೂಕಯ್ಯಸ್ವಾಮಿ, ಭಟ್ಟ ಪ್ರಸಾದ್, ಸಿ.ಆರ್. ಹನುಮಂತ, ಬಿ. ಸಿದ್ದಪ್ಪ, ರಮೇಶ್ ಎನ್. ಶಿವಪುರ, ಪ್ರಾಚಾರ್ಯರಾದ ಮಾರೆಪ್ಪ, ಸಿದ್ದಪ್ಪ ಪರಮೇಶ್ವರ, ಕೆ.ಬಿ. ವೀರೇಶ್, ಟಿ.ಎಂ. ಬಸವರಾಜ, ಜಿ. ಮಹಾಬಲೇಶ್ವರಪ್ಪ, ಬಸವರಾಜ ನಾಯಕ, ಬಸವರಾಜಸ್ವಾಮಿ, ಎಚ್.ಆರ್. ನವೀನ್‌ಕುಮಾರ್, ಸಿ. ಜಡೆಪ್ಪ ಸೇರಿದಂತೆ ವಿವಿಧ ಕಾಲೇಜುಗಳ ಉಪನ್ಯಾಸಕರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.