ದೈಹಿಕ, ಮಾನಸಿಕ ವಿಕಾಸಕ್ಕೆ ಕ್ರೀಡೆ ಸಹಕಾರಿ

| Published : Apr 06 2025, 01:49 AM IST

ಸಾರಾಂಶ

ಶಿವಮೊಗ್ಗ: ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಶಿವಮೊಗ್ಗ: ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ವಿಕಾಸಕ್ಕೆ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳು ಸಹಕಾರಿಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.ನಗರದ ನೆಹರೂ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರಪಾಲಿಕೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕಗಳ ಸಹಯೋಗದಲ್ಲಿ ಏರ್ಪಡಿಸಿದ್ದ ರಾಜ್ಯ ಸರ್ಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡಿದರು.

ತಮ್ಮ ಕಾರ್ಯಕ್ಷೇತ್ರದಲ್ಲಿ ದಿನನಿತ್ಯ ಒತ್ತಡದಿಂದ ದಿನಕಳೆಯುವ ನೌಕರರು ತಮ್ಮಲ್ಲಿರುವ ಸುಪ್ತ ಪ್ರತಿಭೆಯ ಅನಾವರಣಕ್ಕೆ ಹಾಗೂ ಕೆಲಕ್ಷಣಗಳಾದರೂ ಒತ್ತಡದ ಬದುಕಿನಿಂದ ಮುಕ್ತಗೊಳ್ಳಲು ಈ ಸ್ಪರ್ಧೆಗಳು ಸಹಕಾರಿಯಾಗಿವೆ ಎಂದರು.ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರು ಸ್ವೀಕರಿಸಿದ ಪ್ರಮಾಣದಂತೆ ಸ್ಪರ್ಧಾತ್ಮಕಭಾವದಿಂದ ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದ ಅವರು, ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರೂ ವಿಜೇತರಾಗುವುದು ಸಾಧ್ಯವಿಲ್ಲ. ಆದರೆ ಸ್ಪರ್ಧಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ವಿಜೇತರಾದವರು ರಾಜ್ಯಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ, ಜಿಲ್ಲೆಯ ಕೀರ್ತಿಗೆ ಕಾರಣರಾಗುವಂತೆ ಮನವಿ ಮಾಡಿದರು.ಪ್ರಸಕ್ತ ಸಾಲಿನಲ್ಲಿ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಶಿವಮೊಗ್ಗದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದು, ಜಿಲ್ಲಾಡಳಿತದೊಂದಿಗೆ ರಾಜ್ಯ ಸರ್ಕಾರದ ಎಲ್ಲಾ ಸಹಕಾರ ಹಾಗೂ ನೆರವನ್ನು ಒದಗಿಸಿಕೊಡಲಾಗುವುದು ಎಂದರು.

ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾತನಾಡಿ, ರಾಜ್ಯಮಟ್ಟದ ನೌಕರರ ಕ್ರೀಡಾಕೂಟವನ್ನು ಏಪ್ರಿಲ್‌ನಲ್ಲಿ ಶಿವಮೊಗ್ಗದಲ್ಲಿ ನಡೆಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರಿ ನೌಕರರು ವೇತನಾಧಾರಿತ ಬ್ಯಾಂಕ್‌ ಖಾತೆ ತೆರೆದು, 1.20ಕೋಟಿ ಮೊತ್ತದ ವಿಮಾ ಸೌಲಭ್ಯ ಮತ್ತು ಮಕ್ಕಳ ಶೈಕ್ಷಣಿಕ ಸೌಲಭ್ಯ, ಆಕಸ್ಮಿಕ ಅಪಘಾತ ಮುಂತಾದ ಸೌಲಭ್ಯಗಳ ಲಾಭ ಪಡೆದುಕೊಳ್ಳಬೇಕು. ಈಗಾಗಲೇ ಸಂಘವು ಕೈಗೊಂಡು ನಿರ್ಣಯದಂತೆ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಲು ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅದರ ಅಧ್ಯಯನಕ್ಕಾಗಿ ಹಿರಿಯ ಅಧಿಕಾರಿ ಅಂಜುಂ ಫರ್ವೇಜ್‌ ಅವರ ನೇತೃತ್ವದಲ್ಲಿ ಸಮಿತಿ ರಚಿಸಿದೆ. ಈ ಸಮಿತಿಯು ಶೀಘ್ರದಲ್ಲಿ ವರದಿ ಸಲ್ಲಿಸಲಿದ್ದು, ವರದಿಯಂತೆ ಸರ್ಕಾರ ಪಿಂಚಣಿ ವ್ಯವಸ್ಥೆ ಜಾರಿಗೊಳಿಸುವ ಆಶಾಭಾವನೆ ಹೊಂದಲಾಗಿದೆ ಎಂದರು.ಶಾಸಕ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿದ್ದರು.

ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಆರ್.ಮೋಹನ್‌ಕುಮಾರ್‌, ವಿಧಾನ ಪರಿಷತ್‌ ಸದಸ್ಯೆ ಬಲ್ಕಿಶ್‌ಬಾನು, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನಕುಮಾರ್, ಜಿಪಂ ಸಿಇಒ ಎನ್.ಹೇಮಂತ್, ಮಹಾನಗರಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗರೆಡ್ಡಿ ಮತ್ತಿತರರಿದ್ದರು.