ಸಾರಾಂಶ
ಕನಕಪುರ: ದಿನನಿತ್ಯ ಒತ್ತಡದಲ್ಲಿ ಕೆಲಸ ಮಾಡುವ ನೌಕರರು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಪೂರಕವಾಗಲಿದೆ ಎಂದು ತಹಸೀಲ್ದಾರ್ ಸ್ಮಿತಾ ರಾಮು ತಿಳಿಸಿದರು.
ಕನಕಪುರ: ದಿನನಿತ್ಯ ಒತ್ತಡದಲ್ಲಿ ಕೆಲಸ ಮಾಡುವ ನೌಕರರು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಪೂರಕವಾಗಲಿದೆ ಎಂದು ತಹಸೀಲ್ದಾರ್ ಸ್ಮಿತಾ ರಾಮು ತಿಳಿಸಿದರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಮಾತನಾಡಿದ ಅವರು, ನೌಕರರು ಪ್ರತಿನಿತ್ಯ ವ್ಯಾಯಾಮಗಳಿಂದ ದೂರವೇ ಉಳಿದಿರುತ್ತಾರೆ. ಇಂತಹ ಕಾರ್ಯಕ್ರಮಗಳ ಆಯೋಜನೆಯಿಂದ ನೌಕರರಿಗೆ ದೈಹಿಕ ಮಾನಸಿಕ ಆರೋಗ್ಯದ ಜೊತೆಗೆ ಕ್ರಿಯಾಶೀಲರಾಗಲು ಕ್ರೀಡಾ ಚಟುವಟಿಕೆಗಳು ಸಹಕಾರಿಯಾಗಲಿವೆ ಎಂದು ತಿಳಿಸಿದರು.ತಾಲೂಕು ಅಧ್ಯಕ್ಷ ಶಿವಲಿಂಗೇಗೌಡ ಮಾತನಾಡಿ, ಎಲ್ಲಾ ನೌಕರರು ಒಂದು ಕಡೆ ಸೇರಿ ಪರಸ್ಪರ ಪ್ರೀತಿ-ವಿಶ್ವಾಸದಿಂದ ಬೆರೆತು ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ತಾಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದ ಸ್ಪರ್ಧೆಗಳಲ್ಲಿ ಜಯಗಳಿಸಿ ಎಂದು ಶುಭ ಹಾರೈಸಿದರು.
ಸರ್ಕಾರಿ ನೌಕರರ ಮೂರು ಬೇಡಿಕೆಗಳನ್ನು ಈಡೇರಿಕೆಗೆ ಹಕ್ಕೊತ್ತಾಯಿಸಲು ಫೆ.27ರಂದು ಕರೆ ನೀಡಿರುವ ಸರ್ಕಾರಿ ನೌಕರರ ಮಹಾ ಸಮ್ಮೇಳನಕ್ಕೆ ಪ್ರತಿಯೊಬ್ಬರು ಭಾಗವಹಿಸುವ ಮೂಲಕ ಹಳೆ ಪಿಂಚಣಿ ಯೋಜನೆ ಮರುಜಾರಿ, 7ನೇ ವೇತನ ಆಯೋಗ ಅನುಷ್ಠಾನ ಮತ್ತು ಆರೋಗ್ಯ ಸಂಜೀವಿನಿ ಈ ಮೂರು ಬೇಡಿಕೆಗಳನ್ನು ಸರ್ಕಾರ ಈಡೇರಿಸುವ ವಿಶ್ವಾಸವಿದೆ ಎಂದರು.ಕಾರ್ಯಕ್ರಮದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಎಸ್.ಬಿ. ಗೌಡ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಮಹದೇವರಾವ್, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರಮೇಶ್, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಭಾಕರ್, ರಾಜೇಶ್, ಪ್ರಸನ್ನ, ಚಂದ್ರು, ಕ್ಷೇತ್ರ ಶಿಕ್ಷಣಾಧಿಕಾರಿ ಬಿಜಿ ರಾಮಪ್ಪ, ಇಒ ಬೈರಪ್ಪ, ರಾಜ್ಯ ಪರಿಷತ್ ಸದಸ್ಯ ರಾಜೇಶ್, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.