ಕ್ರೀಡೆಗಳಿಂದ ಒತ್ತಡ ನಿವಾರಣೆ ಸಾಧ್ಯ

| Published : Nov 24 2024, 01:47 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಜನರ ರಕ್ಷಣೆ-ಶಾಂತಿ ಸುವ್ಯವಸ್ಥೆ ಕಾರ್ಯದಲ್ಲಿ ತೊಡಗಿರುವ ಪೊಲೀಸ್ ಅಧಿಕಾರಿ-ಸಿಬ್ಬಂದಿಗಳು ಸಹ ತಮ್ಮ ಒತ್ತಡದ ನಡುವೆಯೂ ಕ್ರೀಯಾಶೀಲ-ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ಒತ್ತಡ ನಿವಾರಣೆಗೆ ಮುಂದಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಿವಾಜಿ ಅನಂತ ನಲವಡೆ ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜನರ ರಕ್ಷಣೆ-ಶಾಂತಿ ಸುವ್ಯವಸ್ಥೆ ಕಾರ್ಯದಲ್ಲಿ ತೊಡಗಿರುವ ಪೊಲೀಸ್ ಅಧಿಕಾರಿ-ಸಿಬ್ಬಂದಿಗಳು ಸಹ ತಮ್ಮ ಒತ್ತಡದ ನಡುವೆಯೂ ಕ್ರೀಯಾಶೀಲ-ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ಒತ್ತಡ ನಿವಾರಣೆಗೆ ಮುಂದಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಿವಾಜಿ ಅನಂತ ನಲವಡೆ ಸಲಹೆ ನೀಡಿದರು.

ನಗರದ ಪೊಲೀಸ್‌ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ರೀಡೆಗಳಿಂದ ದೇಹ ಸದೃಢತೆಯೊಂದಿಗೆ ಮಾನಸಿಕ ಸದೃಢತೆ ಕಾಯ್ದುಕೊಳ್ಳಲು ಸಹಕಾರಿಯಾಗಿದೆ. ಆರೋಗ್ಯಯುತ ಹಾಗೂ ಕ್ರಿಯಾಶೀಲತೆಯಿಂದ ನಿರಂತರವಾಗಿ ಕ್ರೀಡೆ ಸೇರಿದಂತೆ ಇತರೆ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ಕ್ರೀಯಾಶೀಲ ಮನಸ್ಸನ್ನು ಹೊಂದಲು ಸಾಧ್ಯ. ಆರೋಗ್ಯಕರ ಮನಸ್ಸನ್ನು ಕಾಪಾಡಿಕೊಳ್ಳಲು ಕ್ರೀಡಾ ಚಟುವಟಿಕೆಗಳು ಸಹಕಾರಿಯಾಗಿವೆ ಎಂದು ಹೇಳಿದರು.ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಹೆಚ್ಚೆಚ್ಚು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು. ಇದರಿಂದ ಆತ್ಮ ವಿಶ್ವಾಸ, ಸಾಮಾಜಿಕ ಸಂವಹನ ಕೌಶಲ್ಯ, ಶಿಸ್ತು, ನಾಯಕತ್ವದ ಗುಣ ಬೆಳೆಯುತ್ತದೆ. ಸತತ ಪ್ರಯತ್ನ, ಆತ್ಮ ವಿಶ್ವಾಸದಿಂದ ವೃತ್ತಿಯಲ್ಲಿಯೂ ನೈಪುಣ್ಯತೆಯೊಂದಿಗೆ ಸಾಧನೆ ಸಾಧ್ಯವಾಗುತ್ತದೆ. ಆ ಹಿನ್ನೆಲೆಯಲ್ಲಿ ನಮ್ಮ ಕೆಲಸ ಕಾರ್ಯಗಳಲ್ಲಿ ಈ ಗುಣಗಳನ್ನು ಬೆಳೆಸಿಕೊಳ್ಳಬೇಕು. ವೃತ್ತಿ ಜೀವನದ ಒತ್ತಡದ ಮಧ್ಯೆಯೂ ದೈಹಿಕ ಶ್ರಮ, ಕ್ರೀಡೆಯಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳುವಂತೆ ಹೇಳಿದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಈ ಕ್ರೀಡಾಕೂಟಗಳಲ್ಲಿ ಆಸಕ್ತಿಯಿಂದ ಭಾಗವಹಿಸಬೇಕು. ಸೋಲು-ಗೆಲುವನ್ನು ಲೆಕ್ಕಿಸದೇ ಸ್ಪೂರ್ತಿ, ಚೈತನ್ಯದಿಂದ ಮೂರು ದಿನಗಳ ಕಾಲ ನಡೆಯುವ ಈ ಕ್ರೀಡಾಕೂಟದಲ್ಲಿ ಭಾಗವಹಿಸಿ ಎಂದು ಸಿಬ್ಬಂದಿಗೆ ಸಲಹೆ ನೀಡಿದರು.

ಮೊದಲು ವೈಯಕ್ತಿಕ ವೀರಾಗ್ರಣಿ ಪ್ರಶಸ್ತಿ ವಿಜೇತರು ಕ್ರೀಡಾ ಜ್ಯೋತಿಯನ್ನು ನೀಡುವುದರ ಮೂಲಕ ಕ್ರೀಡಾಕೂಟಕ್ಕೆ ವಿದ್ಯುಕ್ತ ಚಾಲನೆ ದೊರೆಯಿತು. ಕ್ರೀಡಾಪಟುಗಳಿಂದ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾದಿಕಾರಿ ಶಂಕರ ಮಾರಿಹಾಳ, ರಾಮನಗೌಡ ಹಟ್ಟಿ, ಸೈನಿಕ ಶಾಲೆಯ ಪ್ರಾಂಶುಪಾಲ ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಬಿಷೆ, ಎನ್.ಸಿ.ಸಿ ಅಧಿಕಾರಿ ಗಿರೀಶ ಶಿಂಧೆ, ಕೇಂದ್ರ ಕಾರಾಗೃಹದ ಅಧೀಕ್ಷಕ ಬಿ.ಎಂ ಕೊಟ್ರೇಶ ಮುಂತಾದವರು ಇದ್ದರು.