ಒತ್ತಡ ನಿವಾರಣೆಗೆ ಕ್ರೀಡಾಕೂಟಗಳು ಸಹಕಾರಿ: ಜಿಲ್ಲಾಧಿಕಾರಿ ಡಾ.ಸುಶೀಲಾ

| Published : Mar 21 2024, 01:09 AM IST

ಒತ್ತಡ ನಿವಾರಣೆಗೆ ಕ್ರೀಡಾಕೂಟಗಳು ಸಹಕಾರಿ: ಜಿಲ್ಲಾಧಿಕಾರಿ ಡಾ.ಸುಶೀಲಾ
Share this Article
  • FB
  • TW
  • Linkdin
  • Email

ಸಾರಾಂಶ

ಯಾದಗಿರಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಜಿಲ್ಲಾಧಿಕಾರಿ ಡಾ. ಸುಶೀಲಾ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ಮನುಷ್ಯನ ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡಾಕೂಟಗಳು ಹೆಚ್ಚಿನ ಸಹಕಾರಿ. ಸರ್ಕಾರಿ ನೌಕರರು ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ಆರೋಗ್ಯ ಉತ್ತಮಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಬಿ.ಸುಶೀಲಾ ಸಲಹೆ ನೀಡಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯಾದಗಿರಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಲ್ಲಿ ಆಯೋಜಿಸಿರುವ ಕ್ರೀಡಾಕೂಟದಲ್ಲಿ ಎಲ್ಲರೂ ಕ್ರೀಡಾ ಮನೋಭಾವದಿಂದ ಭಾಗವಹಿಸಿ, ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಯಶಸ್ವಿಯಾಗಿ ಕ್ರೀಡಾಕೂಟ ನಡೆಸುವಂತೆ ಕರೆ ನೀಡಿದರು.

ಕೆಲಸದ ವೇಳೆ ಒತ್ತಡದ ಸನ್ನಿವೇಶ ನಿರ್ಮಾಣವಾಗುತ್ತದೆ. ಹೀಗಾಗಿ ಒತ್ತಡದಿಂದ ಹೊರಬರಲು ಹಾಗೂ ವರ್ಷಕ್ಕೊಮ್ಮೆ ಎಲ್ಲರೂ ಸೇರಿ ಕ್ರೀಡೆಯಲ್ಲಿ ಭಾಗವಹಿಸಬೇಕು. ಈಗಾಗಲೇ ಲೋಕಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆ ಚುನಾವಣೆ ಕರ್ತವ್ಯಕ್ಕೆ ನೇಮಿಸಿದ ಸಿಬ್ಬಂದಿ ನಿಷ್ಠೆಯಿಂದ ಕೆಲಸ ನಿರ್ವಹಣೆ ಮಾಡಬೇಕು ಎಂದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾಧ್ಯಕ್ಷ ಮಹಿಪಾಲರೆಡ್ಡಿ ಮಾಲಿ ಪಾಟೀಲ್ ಮಾತನಾಡಿ, ಒತ್ತಡದಿಂದ ಹೊರಬಂದು ಚೈತನ್ಯದಾಯಕ, ಸ್ಫೂರ್ತಿದಾಯಕ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು. ಈ ನಿಟ್ಟಿನಲ್ಲಿ ವಾರ್ಷಿಕ ಕ್ರೀಡಾಕೂಟಗಳ ಆಯೋಜನೆ ಮಾಡಲಾಗಿದೆ. ಕ್ರೀಡಾಕೂಟಗಳಲ್ಲಿ ಆಸಕ್ತಿಯಿಂದ ಭಾಗವಹಿಸಬೇಕು. ಸೋಲು-ಗೆಲುವನ್ನು ಲೆಕ್ಕಿಸದೇ ಸ್ಫೂರ್ತಿ, ಚೈತನ್ಯದಿಂದ ಈ ಕ್ರೀಡಾಕೂಟದಲ್ಲಿ ಭಾಗವಹಿಸಲು ಇದು ಉತ್ತಮ ವೇದಿಕೆ ಎಂದರು.

ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಕೋಶಾಧ್ಯಕ್ಷ ಯಾಮರೆಡ್ಡಿ, ಆರ್.ಎಂ. ನಾಟೇಕರ್, ಬಸವರಾಜ ಯಡ್ಡಳ್ಳಿ, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜು ಭಾವಿಹಳ್ಳಿ, ರಾಯಪ್ಪಗೌಡ, ಸಂಜು ದರ್ಬಾರಿ, ಸಂತೋಷ ನಿರಟಿ, ಮಲ್ಲೇಶ, ವೆಂಕಟೇಶ ಎಂ. ಹಿರೇನೂರ್, ಹಂಪೇಶ, ಗೋವಿಂದ ಮೂರ್ತಿ, ಕೃಷ್ಣಾರೆಡ್ಡಿ, ಅಶೋಕ ಕೆಂಭಾವಿ, ನಾರಾಯಣರಡ್ಡಿ ಸೇರಿದಂತೆ ಇತರರಿದ್ದರು. ಚಂದ್ರಶೇಖರ ಗೋಗಿ ತಂಡದಿಂದ ನಾಡ ಗೀತೆ ಹಾಡಿದರು.