ಕ್ರೀಡಾಕೂಟದ ಆಯೋಜಕ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್ ಮಾತನಾಡಿ, ಕ್ರೀಡಾಕೂಟದ ಯಶಸ್ಸಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು, ಸಿಆರ್‌ಪಿಗಳು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ನೀಡಿದ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳ ದೈಹಿಕ ಸಾಮರ್ಥ್ಯದ ಜತೆಗೆ ಮಾನಸಿಕ ದೃಢತೆ, ಆತ್ಮವಿಶ್ವಾಸ ಮತ್ತು ಏಕಾಗ್ರತೆಯೂ ವೃದ್ಧಿಯಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್ ಹೇಳಿದರು.

ನಗರದ ಕ್ರೀಡಾಂಗಣದಲ್ಲಿ ಕಸಬಾ–2 ವ್ಯಾಪ್ತಿಯ 14 ವರ್ಷ ವಯೋಮಾನದ ವಿದ್ಯಾರ್ಥಿಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಶಿಕ್ಷಣದ ಜತೆಗೆ ಕ್ರೀಡೆಗೂ ಸಮಾನ ಆದ್ಯತೆ ನೀಡಬೇಕು. ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪಾಲನೆ ಹಾಗೂ ಸ್ಪರ್ಧಾ ಮನೋಭಾವ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.

ತಾಲೂಕಿನಲ್ಲಿ ಆಯೋಜಿಸಲಾಗುತ್ತಿರುವ ವಿವಿಧ ಕ್ರೀಡಾಕೂಟಗಳಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸುತ್ತಿರುವುದು ಸಂತಸದ ವಿಚಾರ. ಗ್ರಾಮೀಣ ಹಾಗೂ ಸರ್ಕಾರಿ ಶಾಲೆಗಳಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸೂಕ್ತ ಅವಕಾಶ ಕಲ್ಪಿಸುವ ಮೂಲಕ ಭವಿಷ್ಯದ ಉತ್ತಮ ಕ್ರೀಡಾಪಟುಗಳನ್ನು ರೂಪಿಸಬೇಕಿದೆ ಎಂದು ತಿಳಿಸಿದರು.

ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಉಮೇಶ್ ಕ್ರೀಡಾ ಜ್ಯೋತಿ ಸ್ವೀಕರಿಸಿ ಮಾತನಾಡಿ, ಕಸಬಾ–2 ವ್ಯಾಪ್ತಿಯ ಕ್ರೀಡಾಕೂಟ ಯಶಸ್ವಿಯಾಗಿ ನಡೆಯಲು ಆರು ಬ್ಲಾಕ್‌ಗಳ ಸಿಆರ್‌ಪಿಗಳು, ಇಸಿಒಗಳು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಸಹಕಾರ ನೀಡಿದ್ದಾರೆ. ವಿದ್ಯಾರ್ಥಿಗಳು ಕ್ರೀಡೆಯನ್ನು ಜೀವನದ ಭಾಗವನ್ನಾಗಿಸಿಕೊಂಡು ದೇಹ ಮತ್ತು ಮನಸ್ಸನ್ನು ಸದೃಢವಾಗಿಟ್ಟುಕೊಳ್ಳಬೇಕು. ಇದರಿಂದ ಭವಿಷ್ಯದ ಗುರಿ ಸಾಧಿಸಲು ಏಕಾಗ್ರತೆ ಸಾಧ್ಯವಾಗುತ್ತದೆ ಎಂದರು.

ಶಿಕ್ಷಣ ಸಂಯೋಜಕ ನಿಂಗಪ್ಪ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿ, ಅರಸೀಕೆರೆ ತಾಲೂಕು ಕ್ರೀಡಾ ಕ್ಷೇತ್ರದಲ್ಲಿ ತನ್ನದೇ ಆದ ಇತಿಹಾಸ ಹೊಂದಿದೆ. ಇಲ್ಲಿನ ಹಲವು ಕ್ರೀಡಾಪಟುಗಳು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಕ್ರೀಡೆಯಲ್ಲಿ ಸೋಲು- ಗೆಲುವು ಸಹಜವಾಗಿದ್ದು, ಫಲಿತಾಂಶಕ್ಕಿಂತ ಸ್ಪರ್ಧೆಯಲ್ಲಿ ಭಾಗವಹಿಸುವ ಮನೋಭಾವ ಮುಖ್ಯ. ಇಂತಹ ಕ್ರೀಡಾಕೂಟಗಳು ವಿವಿಧ ಶಾಲೆಗಳ ವಿದ್ಯಾರ್ಥಿಗಳ ನಡುವೆ ಸ್ನೇಹ ಮತ್ತು ಸೌಹಾರ್ದ ಬೆಳೆಸಲು ಸಹಕಾರಿಯಾಗುತ್ತವೆ ಎಂದರು.

ಕ್ರೀಡಾಕೂಟದ ಆಯೋಜಕ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ, ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ್ ಮಾತನಾಡಿ, ಕ್ರೀಡಾಕೂಟದ ಯಶಸ್ಸಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು, ಸಿಆರ್‌ಪಿಗಳು ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ನೀಡಿದ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಕುಮಾರ್, ನಿಕಟಪೂರ್ವ ತಾಲೂಕು ಅಧ್ಯಕ್ಷ ಸದಾನಂದಮೂರ್ತಿ, ಪ್ರಧಾನ ಕಾರ್ಯದರ್ಶಿ ನವೀನ್ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.