ಕಾರ್ಯಕ್ರಮದ ಆರಂಭದಲ್ಲಿ ಸಂವಿಧಾನ ದಿನಾಚರಣೆ ನಿಮಿತ್ತ ಎಲ್ಲ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸಂವಿಧಾನದ ಪೀಠಿಕೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಸಂವಿಧಾನದ ಮೌಲ್ಯಗಳು, ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
ದಾಂಡೇಲಿ: ಅಂಬೇವಾಡಿಯ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಕಾಲೇಜಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಶಾಲೆ, ಕಾಲೇಜುಗಳ ಕ್ರೀಡಾಕೂಟ ಮತ್ತು ಕಲೆ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಗುರುವಾರ ಜರುಗಿತು.ಕಾರ್ಯಕ್ರಮದ ಆರಂಭದಲ್ಲಿ ಸಂವಿಧಾನ ದಿನಾಚರಣೆ ನಿಮಿತ್ತ ಎಲ್ಲ ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಸಂವಿಧಾನದ ಪೀಠಿಕೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಸಂವಿಧಾನದ ಮೌಲ್ಯಗಳು, ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಸತೀಶ ಅವರು, ಕ್ರೀಡೆ ಮತ್ತು ಸಂಸ್ಕೃತಿ ವಿದ್ಯಾರ್ಥಿಗಳಲ್ಲಿ ಶಿಸ್ತು, ಆತ್ಮವಿಶ್ವಾಸ ಮತ್ತು ತಂಡದ ಮನೋಭಾವ ಬೆಳೆಸುತ್ತದೆ. ಕೇವಲ ಪಠ್ಯಪುಸ್ತಕದ ಓದಷ್ಟೇ ಶಿಕ್ಷಣವಲ್ಲ. ಇಂತಹ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿನ ಸುಪ್ತ ಪ್ರತಿಭೆಯನ್ನು ಹೊರತರಲು ವೇದಿಕೆಯಾಗಿವೆ ಎಂದರು. ಪತ್ರಕರ್ತ ಸಂದೇಶ್ ಎಸ್. ಜೈನ್ ಮಾತನಾಡಿ, ಇಂದಿನ ವಿದ್ಯಾರ್ಥಿಗಳೇ ನಾಳಿನ ಭಾರತದ ಭವಿಷ್ಯ. ಕ್ರೀಡಾಂಗಣದಲ್ಲಿ ಸೋಲು-ಗೆಲುವಿಗಿಂತ ಭಾಗವಹಿಸುವಿಕೆ ಮುಖ್ಯ. ಸ್ಪರ್ಧಾ ಮನೋಭಾವದ ಜತೆಗೆ ಸ್ನೇಹ, ಸಹಕಾರ ಬೆಳೆಸಿಕೊಳ್ಳಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬೇವಾಡಿಯ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಕಾಲೇಜಿನ ಪ್ರಾಚಾರ್ಯ ಪ್ರಶಾಂತ ಮಾತನಾಡಿ, ಸಂವಿಧಾನ ದಿನದಂದು ಈ ಕಾರ್ಯಕ್ರಮ ನಡೆಯುತ್ತಿರುವುದು ವಿಶೇಷ. ವಿದ್ಯಾರ್ಥಿಗಳು ಸಂವಿಧಾನಕ್ಕೆ ಗೌರವ ನೀಡುತ್ತಾ, ಕ್ರೀಡೆ ಮತ್ತು ಕಲೆಯನ್ನು ಸಮಾನವಾಗಿ ಗೌರವಿಸಿ, ಶಿಸ್ತಿನಿಂದ ಸ್ಪರ್ಧೆಯಲ್ಲಿ ಭಾಗವಹಿಸಬೇಕು ಎಂದರು.
ಮುಂಡಗೋಡದ ಮೌಲಾನಾ ಆಜಾದ್ ವಸತಿ ಶಾಲೆಯ ಪ್ರಾಚಾರ್ಯ ಸಂತೋಷ್, ಹಳಿಯಾಳದ ಮೌಲಾನಾ ಆಜಾದ್ ವಸತಿ ಶಾಲೆಯ ಪ್ರಾಚಾರ್ಯ ಕಿರಣ್, ಭಟ್ಕಳದ ಮೌಲಾನಾ ಆಜಾದ್ ವಸತಿ ಶಾಲೆಯ ಪ್ರಾಚಾರ್ಯ ಶಂಸುದ್ದೀನ್, ತಾಲೂಕು ವಿಸ್ತರಣಾ ಅಧಿಕಾರಿ ಸುರೇಶ್ ಗೌಡ ಉಪಸ್ಥಿತರಿದ್ದರು.ಶಿಕ್ಷಕ ವಿಕ್ರಂ ಸ್ವಾಗತಿಸಿದರು. ಉಪನ್ಯಾಸಕ ಅಬ್ದುಲ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಸುಖಾದೇವಿ ಗುರವ ವಂದಿಸಿದರು. ಅಂಬೇವಾಡಿಯ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಕಾಲೇಜಿನ ಉಪನ್ಯಾಸಕರು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಸಹಕರಿಸಿದರು.