ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಕ್ರೀಡೆಗಳು ಸಹಕಾರಿ

| Published : Sep 12 2024, 01:52 AM IST

ಸಾರಾಂಶ

ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಕ್ರೀಡಾಕೂಟ ಹಾಗೂ ಪ್ರತಿಭಾ ಕಾರಂಜಿಗಳು ಮಹತ್ವದ ಪಾತ್ರ ವಹಿಸುತ್ತವೆ. ಅವರಲ್ಲಿನ ವಿಶೇಷ ಪ್ರತಿಭೆಯನ್ನು ಗುರುತಿಸಿ ನಿರ್ದಿಷ್ಟ ಕ್ಷೇತ್ರದಲ್ಲಿ ಸಾಧನೆಗೈಯಲು ಇಲಾಖೆಯ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ. ತೀರ್ಪುಗಾರರು ನಿಷ್ಪಕ್ಷಪಾತವಾಗಿ ನಿಜವಾದ ಪ್ರತಿಭೆಯನ್ನು ಗುರುತಿಸಿ ಆಯ್ಕೆ ಮಾಡಿ ತಾಲೂಕು ಹಂತಕ್ಕೆ ಕಳುಹಿಸಿ. ಗುಣಾತ್ಮಕತೆಯನ್ನು ಕಾಯ್ದುಕೊಳ್ಳಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಜೆ.ಕೃಷ್ಣೇಗೌಡ ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ ಆಲೂರು

ಶಿಕ್ಷಣದ ಮೂಲ ಉದ್ದೇಶ ಕೇವಲ ಓದು, ಬರಹ ಕಲಿಸುವುದು ಮಾತ್ರವಲ್ಲ. ಮಗುವಿನಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ನಿರಂತರವಾಗಿ ಪ್ರೋತ್ಸಾಹಿಸುವುದಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಜೆ.ಕೃಷ್ಣೇಗೌಡ ಅಭಿಪ್ರಾಯಪಟ್ಟರು.

ಅವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಲೂರು ಹಾಗೂ ಕಾಮತಿ ಕೂಡಿಗೆ ಕ್ಲಸ್ಟರ್ ಮತ್ತು ತಾಳೂರು ಗ್ರಾಮ ಪಂಚಾಯಿತಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಟಿ.ಗುಡ್ಡೇನಹಳ್ಳಿ ಸಹಯೋಗದಲ್ಲಿ ಗುಡ್ಡೇನಹಳ್ಳಿ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾಮತಿ ಕೂಡಿಗೆ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಕ್ರೀಡಾಕೂಟ ಹಾಗೂ ಪ್ರತಿಭಾ ಕಾರಂಜಿಗಳು ಮಹತ್ವದ ಪಾತ್ರ ವಹಿಸುತ್ತವೆ. ಅವರಲ್ಲಿನ ವಿಶೇಷ ಪ್ರತಿಭೆಯನ್ನು ಗುರುತಿಸಿ ನಿರ್ದಿಷ್ಟ ಕ್ಷೇತ್ರದಲ್ಲಿ ಸಾಧನೆಗೈಯಲು ಇಲಾಖೆಯ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ. ತೀರ್ಪುಗಾರರು ನಿಷ್ಪಕ್ಷಪಾತವಾಗಿ ನಿಜವಾದ ಪ್ರತಿಭೆಯನ್ನು ಗುರುತಿಸಿ ಆಯ್ಕೆ ಮಾಡಿ ತಾಲೂಕು ಹಂತಕ್ಕೆ ಕಳುಹಿಸಿ. ಗುಣಾತ್ಮಕತೆಯನ್ನು ಕಾಯ್ದುಕೊಳ್ಳಿ ಎಂದು ಕಿವಿಮಾತು ಹೇಳಿದರು.

ತಾಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮೇಶ್ ಮಾತನಾಡಿ ಪ್ರತಿಭಾ ಕಾರಂಜಿ ಮಕ್ಕಳಲ್ಲಿನ ಸಾಂಸ್ಕೃತಿಕ ಪ್ರತಿಭೆಯನ್ನು ಗುರುತಿಸಲು ಅನುಕೂಲವಾಗಿದೆ. ನಮ್ಮ ತಾಳೂರು ಪಂಚಾಯಿತಿ ವ್ಯಾಪ್ತಿ ಶಾಲೆಯ ಮಕ್ಕಳು ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯ ಮಟ್ಟದಲ್ಲಿ ಬೆಳಗುವಂತಾಗಲಿ ಎಂದು ಶುಭಕೋರಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ್ ಮಾತನಾಡಿ, ಮಕ್ಕಳ ಭೌತಿಕ ಹಾಗೂ ಬೌದ್ಧಿಕ ವಿಕಸನಕ್ಕೆ ಕ್ರೀಡೆ ಹಾಗೂ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಅತ್ಯಂತ ಪ್ರಮುಖವಾಗಿವೆ. ಮಕ್ಕಳು ಇಂತಹ ವೇದಿಕೆಗಳನ್ನು ಸದುಪಯೋಗಪಡಿಸಿಕೊಂಡು ಮುನ್ನೆಲೆಗೆ ಬರಬೇಕಿದೆ ಎಂದರು.

ವೇದಿಕೆಯಲ್ಲಿ ಪಾಳ್ಯ ಹೋಬಳಿ ಶಿಕ್ಷಣ ಸಂಯೋಜಕ ದಿವಾಕರ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಜಯಂತಿ, ಸಿ.ಆರ್.ಪಿ. ಮಂಜುನಾಥ್, ಗುಡ್ಡೇನಹಳ್ಳಿ ಶಾಲೆಯ ಮುಖ್ಯ ಶಿಕ್ಷಕ ಎಚ್.ಡಿ.ಕುಮಾರ್ ಸೇರಿದಂತೆ ಮುಂತಾದವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ವಾಟೆಹೊಳೆ ಶಾಲೆಯ ಮುಖ್ಯ ಶಿಕ್ಷಕ ಮಂಜುನಾಥ ರಾವ್, ತಾಳೂರು ಶಾಲೆಯ ಮುಖ್ಯ ಶಿಕ್ಷಕ ಕೊಟ್ರೇಶ್ ಎಸ್.ಉಪ್ಪಾರ್, ಕಾಮತಿ ಕೂಡಿಗೆ ಶಾಲೆಯ ಮುಖ್ಯ ಶಿಕ್ಷಕಿ ಎಂ.ಇ.ಭಾಗ್ಯಲಕ್ಷ್ಮೀ, ಬೆಳ್ಳಾವರ ಶಾಲೆಯ ಮುಖ್ಯ ಶಿಕ್ಷಕಿ ಲಕ್ಷ್ಮಿ ಸೇರಿದಂತೆ ಹಿರಿಯ ಹಾಗೂ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರುಗಳು ಉಪಸ್ಥಿತರಿದ್ದರು.

ಚಿ.ಆರ್.ಪಿ. ಮಂಜುನಾಥ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಟಿ.ಗುಡ್ಡೇನಹಳ್ಳಿ ಶಾಲೆಯ ಮುಖ್ಯ ಶಿಕ್ಷಕ ಎಚ್.ಡಿ.ಕುಮಾರ್ ಸ್ವಾಗತಿಸಿದರು, ಸಹ ಶಿಕ್ಷಕಿ ಕೋಮಲ ನೀರೂಪಿಸಿ ವಂದಿಸಿದರು. ತಾಳೂರು ಗುಡ್ಡೇನಹಳ್ಳಿ ಗ್ರಾಮದ ಹಳೆಯ ವಿದ್ಯಾರ್ಥಿಗಳ ಸಂಘ, ಊರಿನ ಗ್ರಾಮಸ್ಥರ ಸಹಕಾರದಿಂದ ಕಾರ್ಯಕ್ರಮ ಅಚ್ಚುಕಟ್ಟಾಗಿ ಮೂಡಿಬಂದಿತು. ಬಹುಮಾನ ಪ್ರಾಯೋಜಕತ್ವ ವಹಿಸಿಕೊಂಡ ವಾಟೆಹೊಳೆ ಶಾಲೆಯ ಮಂಜುನಾಥ ರಾವ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.