ಸಾರಾಂಶ
ವಿದ್ಯಾರ್ಥಿಗಳು ಓದುವ ಜೊತೆಗೆ ಯಾವುದಾದರೂ ಒಂದು ಪಠ್ಯೇತರ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಅದರಲ್ಲಿ ಉತ್ತಮ ಸಾಧನೆ ಮಾಡಿ ಯಶಸ್ವಿಯಾಗಿ ಜೀವನ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು
ಕನ್ನಡಪ್ರಭ ವಾರ್ತೆ ಮೈಸೂರು
ಇಂದು ಶಿಕ್ಷಣ ಕ್ಷೇತ್ರ ಬೆಳೆದಷ್ಟು ಕ್ರೀಡೆ, ಸಾಂಸ್ಕೃತಿಕ ಲೋಕವು ಕೂಡ ಬೆಳೆದಿದೆ. ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳು ಬದುಕನ್ನು ರೂಪಿಸಿಕೊಂಡಿದ್ದಾರೆ ಎಂದು ದಿ ಇನ್ಸ್ ಟಿಟ್ಯೂಟ್ ಆಫ್ ಎಜುಕೇಷನ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಮುಖ್ಯ ಆಡಳಿತಾಧಿಕಾರಿ ಪಿ. ಗೀತಾಂಜಲಿ ತಿಳಿಸಿದರು.ಕುವೆಂಪುನಗರದ ಬಾಸುದೇವ ಸೋಮಾನಿ ಕಾಲೇಜಿನಲ್ಲಿ ಮಂಗಳವಾರ ನಡೆದ ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ, ಸಾಂಸ್ಕೃತಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಎನ್ಎಸ್ಎಸ್, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಶಿಕ್ಷಣದ ಪ್ರಮುಖ ಆಂಗಗಳಾಗಿವೆ. ಪಠ್ಯ ಚಟುವಟಿಕೆಯ ಜೊತೆಯಲ್ಲಿ ಕ್ರೀಡೆ, ಸಾಂಸ್ಕೃತಿಕ, ಎನ್ನೆಸ್ಸೆಸ್ ಚಟುವಟಿಕೆಗಳ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳು ಮತ್ತು ಪೋಷಕರು ಅರಿತುಕೊಳ್ಳಬೇಕು ಎಂದರು.
ವಿದ್ಯಾರ್ಥಿಗಳು ಓದುವ ಜೊತೆಗೆ ಯಾವುದಾದರೂ ಒಂದು ಪಠ್ಯೇತರ ಕ್ಷೇತ್ರದಲ್ಲಿ ತೊಡಗಿಸಿಕೊಂಡು, ಅದರಲ್ಲಿ ಉತ್ತಮ ಸಾಧನೆ ಮಾಡಿ ಯಶಸ್ವಿಯಾಗಿ ಜೀವನ ರೂಪಿಸಿಕೊಳ್ಳಲು ಪ್ರಯತ್ನಿಸಬೇಕು. ಎನ್ಎಸ್ಎಸ್ ಮುಖಾಂತರ ಉತ್ತಮ ರಾಷ್ಟ್ರ ನಿರ್ಮಾಣ, ಸ್ವಚ್ಛ ಸಮಾಜ ಸಮಸಮಾಜ ನಿರ್ಮಾಣದಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಕ್ರೀಡೆ, ಕಲೆ, ಎನ್ಎಸ್ಎಸ್, ಸಾಂಸ್ಕತಿಕ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತಿಯೊಬ್ಬರು ಸಹಕರಿಸಬೇಕು ಎಂದು ಅವರು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಎಂ. ಮಹದೇವಸ್ವಾಮಿ ಮಾತನಾಡಿ, ಪಠ್ಯೇತರ ಚಟುವಟಿಕೆಗಳಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ. ಕಲೆಯಿಂದ ಉತ್ತಮ ಸಂಸ್ಕೃತಿಯನ್ನು ಬೆಳೆಸಿಕೊಳ್ಳಲು ಸಾಧ್ಯ. ಹಾಗೆ ಎನ್ಎಸ್ಎಸ್ ನಿಂದ ರಾಷ್ಟ್ರ ನಿರ್ಮಾಣಕ್ಕೆ ಸೇವೆ ಸಲ್ಲಿಸಲು ಸಾಧ್ಯ ಎಂದು ತಿಳಿಸಿದರು.
ಇದೇ ವೇಳೆ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಿಗೆ ಹಾಗೂ ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಡಾ.ಟಿ. ರಮೇಶ್ ಇದ್ದರು.