ಶ್ರೀಕೃಷ್ಣನ ಜೀವನ ಹಾಗೂ ಅವರು ಸಾರಿದ ಸಂದೇಶಗಳು ಸರ್ವರಿಗೂ ಮಾರ್ಗದರ್ಶನವಾಗಿವೆ. ಇಂದಿನ ಮಕ್ಕಳಿಗೆ ಧರ್ಮ, ಸಂಸ್ಕೃತಿ ಹಾಗೂ ಜೀವನ ಮೌಲ್ಯಗಳ ಅರಿವು ಮೂಡಿಸುವ ಅಗತ್ಯವಿದೆ ಎಂದು ಬಂಟ್ವಾಳ ತಹಸೀಲ್ದಾರ್ ಮಂಜುನಾಥ್ ಹೇಳಿದರು.
ಕನ್ನಡಪ್ರಭ ವಾರ್ತೆ ಬಂಟ್ವಾಳ
ಶ್ರೀಕೃಷ್ಣನ ಜೀವನ ಹಾಗೂ ಅವರು ಸಾರಿದ ಸಂದೇಶಗಳು ಸರ್ವರಿಗೂ ಮಾರ್ಗದರ್ಶನವಾಗಿವೆ. ಇಂದಿನ ಮಕ್ಕಳಿಗೆ ಧರ್ಮ, ಸಂಸ್ಕೃತಿ ಹಾಗೂ ಜೀವನ ಮೌಲ್ಯಗಳ ಅರಿವು ಮೂಡಿಸುವ ಅಗತ್ಯವಿದೆ ಎಂದು ಬಂಟ್ವಾಳ ತಹಸೀಲ್ದಾರ್ ಮಂಜುನಾಥ್ ಹೇಳಿದರು.ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಶುಕ್ರವಾರ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಪ್ರಧಾನ ಭಾಷಣಕಾರ ಹಾಗೂ ಯಾದವ ಸಭಾ ತಾಲೂಕು ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಮಾತನಾಡಿ, ಶ್ರೀಕೃಷ್ಣ ಭಾರತೀಯ ಸಂಸ್ಕೃತಿ ಹಾಗೂ ಪರಂಪರೆಯ ಪ್ರತೀಕವಾಗಿದ್ದು, ಅವರ ಆದರ್ಶಗಳು ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಹೀಗಾಗಿ ಸಮಾಜದ ಎಲ್ಲ ವರ್ಗದವರೂ ಕೃಷ್ಣಜಯಂತಿಯನ್ನು ಆಚರಿಸುತ್ತಾರೆ ಎಂದು ಅವರು ಹೇಳಿದರು.ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಮಾತನಾಡಿ, ಶ್ರೀಕೃಷ್ಣನ ಜೀವನ ಸಂದೇಶಗಳು ಸಮಾಜದ ಪ್ರತಿಯೊಬ್ಬರಿಗೂ ತಲುಪಬೇಕು. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ನಡೆಯಬೇಕು ಎಂದರು.
ಪಂಚಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ. ಪೂಜಾರಿ, ಯಾದವ ಸಭಾ ಪ್ರತಿನಿಧಿಗಳು, ಉಪತಹಸೀಲ್ದಾರ್ ನರೇಂದ್ರನಾಥ್ ಮಿತ್ತೂರು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವಿಷಯ ನಿರ್ವಾಹಕ ವಿಷುಕುಮಾರ್, ಕಂದಾಯ ಇಲಾಖೆಯ ಸಿಬ್ಬಂದಿ, ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಗ್ರಾಮ ಸಹಾಯಕರು ಉಪಸ್ಥಿತರಿದ್ದರು.ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು ಕಾರ್ಯಕ್ರಮ ನಿರ್ವಹಿಸಿದರು. ಕಂದಾಯ ಇಲಾಖೆ ಸಿಬ್ಬಂದಿ ಜನಾರ್ದನ್ ವಂದಿಸಿದರು.