ಉಡುಪಿಯ ಸಮಗ್ರ ಅಭಿವೃದ್ಧಿಗೆ ಶ್ರೀಕೃಷ್ಣ ಕಾರಿಡಾರ್‌ ಯೋಜನೆ: ಶಾಸಕ ಯಶಪಾಲ್‌ ಸುವರ್ಣ

| Published : Jan 09 2025, 12:47 AM IST

ಉಡುಪಿಯ ಸಮಗ್ರ ಅಭಿವೃದ್ಧಿಗೆ ಶ್ರೀಕೃಷ್ಣ ಕಾರಿಡಾರ್‌ ಯೋಜನೆ: ಶಾಸಕ ಯಶಪಾಲ್‌ ಸುವರ್ಣ
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರೀ ಕೃಷ್ಣ ಕಾರಿಡಾರ್‌ ಎಂಬ ಕಾರ್ಯ ಯೋಜನೆ ರೂಪಿಸಲಾಗುತ್ತಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಹೇಳಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ನಗರದ ಸಮಗ್ರ ಅಭಿವೃದ್ಧಿಗಾಗಿ ಶ್ರೀಕೃಷ್ಣ ಕಾರಿಡಾರ್ ಎಂಬ ಕಾರ್ಯಯೋಜನೆ ರೂಪಿಸಲಾಗುತ್ತಿದೆ. ಈ ಮೂಲಕ ನಗರದಲ್ಲಿ ವ್ಯವಸ್ಥಿತವಾದ ಫ್ಲೈ ಓವರ್, ರಿಂಗ್‌ರೋಡ್, ಟ್ರಾಫಿಕ್ ಸಿಗ್ನಲ್, ಸಿಸಿ ಕ್ಯಾಮರಗಳು, ಪಾರ್ಕಿಂಗ್ ವ್ಯವಸ್ಥೆಗಳನ್ನು ಮಾಡಲಾಗುವುದು. ಈ ಯೋಜನೆಗೆ ಕೇಂದ್ರ ಸರ್ಕಾರಕ್ಕೆ 300 ಕೋಟಿ ರು.ಗಳ ಪ್ರಸ್ತಾವನೆವನ್ನು ಸಲ್ಲಿಸಲಾಗುತ್ತಿದೆ ಎಂದು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ತಿಳಿಸಿದ್ದಾರೆ.

ಅವರು ಬುಧವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಉಡುಪಿ ಪತ್ರಿಕಾ ಭವನದಲ್ಲಿ ನಗರದ ಸಮಸ್ಯೆ ಮತ್ತು ಅಭಿವೃದ್ಧಿ ಕುರಿತು ಆಯೋಜಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಗರದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಜನಸಂಖ್ಯೆಯಿದ್ದು, ಅವರೆಲ್ಲರಿಗೆ ಕುಡಿಯುವ ನೀರು ಮತ್ತು ಒಳಚರಂಡಿ ಯೋಜನೆಗೆ 700 - 800 ರು.ಗಳ ಅನುದಾನ ಅಗತ್ಯವಿದ್ದು, ಆದ್ಯತೆಯಲ್ಲಿ 400 ಕೋಟಿ ರು.ಗಳ ಡಿಪಿಆರ್ ಸಿದ್ಧಪಡಿಸಲಾಗಿದೆ. ಉಡುಪಿ ನಗರಕ್ಕೆ ಕುಡಿಯುವ ನೀರು ಪೂರೈಕೆಗೆ ವಾರಾಹಿ ನದಿ ಯೋಜನೆ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಪರೀಕ್ಷೆ ಸಂದರ್ಭದಲ್ಲಿ ಲೀಕೇಜ್‌ಗಳನ್ನು ಪತ್ತೆ ಹಚ್ಚಿ ಸರಿಪಡಿಸಲಾಗುತ್ತಿದೆ, ಸದ್ಯವೇ ಈ ಯೋಜನೆ ಕಾರ್ಯಾರಂಭಿಸಲಿದೆ ಎಂದರು.

ನಗರದ ಬೀಡಿನಗುಡ್ಡೆಯಲ್ಲಿ ಸರ್ವ ಸುಸಜ್ಜಿತ ಕ್ರಿಕೆಟ್ ಕ್ರೀಡಾಂಗಣ, ಮಣಿಪಾಲ ಮಣ್ಣಪಳ್ಳ ಅಭಿವೃದ್ಧಿಗೆ ಯೋಜನೆ ಹಾಕಿಕೊಳ್ಳಲಾಗಿದೆ. ಮುಂದೆ ನಗರದ ಸಂಚಾರ ದಟ್ಟನೆ ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರೊಂದಿಗೆ ಯೋಜನೆ ರೂಪಿಸಲಾಗುವುದು. ಆಟೋರಿಕ್ಷಾ ನಿಲ್ದಾಣಗಳಿಗೆ ಮಾರ್ಗಸೂಚಿ ರಚನೆ, ಮಲ್ಟಿಲೆವಲ್ ಪಾರ್ಕಿಂಗ್‌ಗೆ ಯೋಜನೆ ರೂಪಿಸಲಾಗುತ್ತಿದೆ. ನಗರದ ಸಮಸ್ಯೆಗಳ ಪರಿಹಾರಕ್ಕೆ ತಿಂಗಳಿಗೆ ಎರಡು ಸಾರ್ವಜನಿಕ ಅದಾಲತ್‌ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಇದೇ ಸಂದರ್ಭದಲ್ಲಿ ಅಗಲಿದ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ಅವರ ಕುಟುಂಬಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಾಯಧನದ ಚೆಕ್ ವಿತರಿಸಲಾಯಿತು ಮತ್ತು ಸಂಘದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ಹಸ್ತಾಂತರಿಸಲಾಯಿತು.

ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ಯು.ಎಸ್.ಶೆಣೈ, ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು ಉಪಸ್ಥಿತರಿದ್ದರು. ಇದಕ್ಕೂ ಮೊದಲು ನಗರಸಭೆ ವತಿಯಿಂದ ಪತ್ರಿಕಾ ಭವನದ ಆವರಣದಲ್ಲಿ ಅಳವಡಿಸಲಾದ ಇಂಟರ್‌ಲಾಕ್‌ ವ್ಯವಸ್ಥೆಯನ್ನು ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಉದ್ಘಾಟಿಸಿದರು.

ಜಿಲ್ಲಾ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ವಂದಿಸಿದರು. ಕಾರ್ಯದರ್ಶಿ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು.