ಸಾರಾಂಶ
ಕನ್ನಡಪ್ರಭ ವಾರ್ತೆ ಮಡಿಕೇರಿ
ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ-1 ಮಾ.21 ರಿಂದ ಏ.4 ರವರೆಗೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.ಕೊಡಗು ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾ. 21 ರಿಂದ ಏ.4 ರವರೆಗೆ ಬೆಳಗ್ಗೆ 10 ಗಂಟೆಯಿಂದ ನಡೆಯಲಿದೆ. ಶಾಲೆಗಳ ಸಂಖ್ಯೆ 171.
ಕೊಡಗು ಜಿಲ್ಲೆಯಲ್ಲಿ ಈ ಬಾರಿ 6997 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗೆ ನೋಂದಣಿ ಮಾಡಿದ್ದು, 6622 ಹೊಸ ವಿದ್ಯಾರ್ಥಿಗಳು, 375 ಪುನರಾವರ್ತಿತ ಮತ್ತು ಖಾಸಗಿ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿದ್ದಾರೆ.ಕೊಡಗು ಜಿಲ್ಲೆಯಲ್ಲಿ ಒಟ್ಟು 27 ಪರೀಕ್ಷಾ ಕೇಂದ್ರಗಳಿದ್ದು, ಮಡಿಕೇರಿ ತಾಲೂಕಿನಲ್ಲಿ 8, ಸೋಮವಾರಪೇಟೆ ತಾಲೂಕಿನಲ್ಲಿ 11 ಮತ್ತು ವಿರಾಜಪೇಟೆ ತಾಲೂಕಿನಲ್ಲಿ 8 ಪರೀಕ್ಷಾ ಕೇಂದ್ರಗಳಿವೆ.
ಪರೀಕ್ಷಾ ಕೇಂದ್ರಗಳಲ್ಲಿ ಪೀಠೋಪಕರಣ, ಶೌಚಾಲಯ, ಕುಡಿಯುವ ನೀರು, ಸಿಸಿಟಿವಿ, ವೆಬ್‌ಕಾಸ್ಟಿಂಗ್ ಮತ್ತು ಇಂಟರ್‌ನೆಟ್ ಸೌಲಭ್ಯ ಒದಗಿಸಲಾಗಿದೆ.ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಜಿಲ್ಲೆಯಲ್ಲಿ ಜಾಗೃತ ದಳ ರಚಿಸಲಾಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಖಜಾನೆಯಿಂದ ಸುಗಮವಾಗಿ ಮತ್ತು ಸುರಕ್ಷಿತವಾಗಿ ಸಾಗಿಸಲು ವಾಹನಗಳಿಗೆ ಜಿಪಿಎಸ್ ಅಳವಡಿಸಲಾಗಿದೆ ಮತ್ತು ಪ್ರತೀ ಮಾರ್ಗಕ್ಕೆ ಒಬ್ಬರಂತೆ 7 ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದ್ದು, ಮಾರ್ಗಾಧಿಕಾರಿಗಳ ವಾಹನ ಭದ್ರತೆಗೆ ಒಬ್ಬರು ಸಶಸ್ತ್ರ ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರು ಮತ್ತು ಉಪ ಮುಖ್ಯ ಅಧೀಕ್ಷಕರನ್ನು ಹಾಗೂ ಸ್ಥಾನಿಕ ಜಾಗೃತದಳದ ಸಿಬ್ಬಂದಿ ನೇಮಕ ಮಾಡಲಾಗಿದೆ.ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ನಿಷೇಧಿತ ಪ್ರದೇಶವಾಗಿದ್ದು, ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಸಮಯದಲ್ಲಿ ಮುಚ್ಚಲು ಸೂಚಿಸಲಾಗಿದೆ. ವಿದ್ಯುತ್ ಅಡಚಣೆಯಾಗದಂತೆ ಕ್ರಮ ವಹಿಸಲು ಸೆಸ್ಕಾಂ ಇಲಾಖೆಗೆ ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿದ್ದು, ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಸಮಯದಲ್ಲಿ ಮುಚ್ಚಲು ಕ್ರಮವಹಿಸಲಾಗಿದೆ.
ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಹಾಜರಾಗಲು ಅನುಕೂಲವಾಗುವಂತೆ ಬಸ್ ವ್ಯವಸ್ಥೆ ಕಲ್ಪಿಸಲು ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕರಿಗೆ ಸೂಚಿಸಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಕ್ಕೆ ಪೊಲೀಸ್ ಬಂದೋಬಸ್ತ್ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ. ಪ್ರತೀ ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಸಿಬ್ಬಂದಿ ನೇಮಿಸಲು ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.