ಸಾರಾಂಶ
ತುಮಕೂರು : ಜಿಲ್ಲೆಯಲ್ಲಿ 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಮಾರ್ಚ್ 21 ರಿಂದ ಏಪ್ರಿಲ್ 4ರವರೆಗೆ ನಡೆಯಲಿದ್ದು, ಪರೀಕ್ಷೆಯು ಯಾವ ಲೋಪದೋಷವಿಲ್ಲದೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ತಿಳಿಸಿದ್ದಾರೆ.ಜಿಲ್ಲೆಯಲ್ಲಿ ಒಟ್ಟಾರೆ 35,636 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ ತುಮಕೂರು (ದ) ಶೈಕ್ಷಣಿಕ ಜಿಲ್ಲೆಯಿಂದ 12,227 ವಿದ್ಯಾರ್ಥಿಗಳು, 10,246 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 22,473 ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 6,897 ವಿದ್ಯಾರ್ಥಿಗಳು, 6,266 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 13,163 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ತುಮಕೂರು(ದ) 80 ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 49 ಸೇರಿ ಒಟ್ಟು 129 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಿಗೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪರೀಕ್ಷಾ ಕೇಂದ್ರಗಳಿಗೆ ಸಕಾಲದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು ಮಾರ್ಗಗಳನ್ನು ರಚಿಸಲಾಗಿದ್ದು, ಸೂಕ್ತ ಭದ್ರತೆಯೊಂದಿಗೆ ಪ್ರಶ್ನೆ ಪತ್ರಿಕೆಗಳನ್ನು ವಿತರಿಸಲು ಕ್ರಮವಹಿಸಲಾಗಿದೆ.
ಜಿಲ್ಲಾ ಹಂತದಲ್ಲಿ ಪರೀಕ್ಷಾ ಕೇಂದ್ರಗಳ ಸಿಸಿಟಿವಿ ವೀಕ್ಷಣೆ(ವೆಬ್ ಕಾಸ್ಟಿಂಗ್) ಮಾಡಲು ಎಲ್ಲಾ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಡೆಸ್ಕ್, ಕುಡಿಯುವ ನೀರಿನ ಸೌಲಭ್ಯ, ಶೌಚಾಲಯ ವ್ಯವಸ್ಥೆ ಹಾಗೂ ವಿದ್ಯುತ್ ಸೌಲಭ್ಯ ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯ ಭಾರತೀಯ ನಾಗರಿಕ ಸುರಕ್ಷ ಸಂಹಿತೆ 2023ರ ಕಲಂ 163ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗುವುದು. ಪರೀಕ್ಷಾ ಸಮಯದಲ್ಲಿ ಝರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚಲು ಆದೇಶ ಮಾಡಲಾಗುವುದು.
ಪರೀಕ್ಷಾ ದಿನಗಳಂದು ವಿದ್ಯುತ್ ವ್ಯತ್ಯಯವಾಗದಂತೆ ನಿರಂತರ ವಿದ್ಯುತ್ ಸೌಲಭ್ಯ ಒದಗಿಸಲು ಕ್ರಮವಹಿಸಲಾಗಿದೆ ಪರೀಕ್ಷಾ ಕೇಂದ್ರದೊಳಗೆ ಯಾವುದೇ ಅಧಿಕಾರಿಯು ಮೊಬೈಲ್ ತೆಗೆದುಕೊಂಡು ಹೋಗುವಂತಿಲ್ಲ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ಹಾಜರುಪಡಿಸಿ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಪೋಲೀಸ್ ಇಲಾಖೆಯಿಂದ ಸೂಕ್ತ ಭದ್ರತೆಯನ್ನು ಒದಗಿಸಲಾಗುವುದು. ಎಲ್ಲಾ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಹಾಗೂ ಪ್ರಶ್ನೆಪತ್ರಿಕೆ ಪಾಲಕರುಗಳಿಗೆ ಮಾರ್ಚ್ 11ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಗತ್ಯ ತರಬೇತಿ ಮತ್ತು ಮಾರ್ಗದರ್ಶನವನ್ನು ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.