ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ, ಬಳ್ಳಾರಿಯಲ್ಲಿ 64 ಕೇಂದ್ರಗಳ ಸ್ಥಾಪನೆ

| Published : Mar 21 2025, 12:35 AM IST

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ, ಬಳ್ಳಾರಿಯಲ್ಲಿ 64 ಕೇಂದ್ರಗಳ ಸ್ಥಾಪನೆ
Share this Article
  • FB
  • TW
  • Linkdin
  • Email

ಸಾರಾಂಶ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾ. 21ರಿಂದ ಆರಂಭಗೊಳ್ಳಲಿದ್ದು, ಈ ಬಾರಿ ಬಳ್ಳಾರಿ ಜಿಲ್ಲೆಯ 23,524 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಸಜ್ಜಾಗಿದ್ದಾರೆ. ಜಿಲ್ಲೆಯಲ್ಲಿ 64 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.

ಬಳ್ಳಾರಿ: ವಿದ್ಯಾರ್ಥಿ ಭವಿಷ್ಯದ ಪ್ರಮುಖ ಘಟ್ಟ ಎನ್ನಲಾದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾ. 21ರಿಂದ ಆರಂಭಗೊಳ್ಳಲಿದ್ದು, ಈ ಬಾರಿ ಜಿಲ್ಲೆಯ 23,524 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲು ಸಜ್ಜಾಗಿದ್ದಾರೆ.

ಜಿಲ್ಲೆಯಲ್ಲಿ 64 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಜಿಲ್ಲೆಯ 320 ಪ್ರೌಢಶಾಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯನ್ನು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲು ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಬಳ್ಳಾರಿ ತಾಲೂಕಿನ ಮೋಕಾ ಹಾಗೂ ಸಿರುಗುಪ್ಪ ತಾಲೂಕಿನ ಬಿ.ಎಂ. ಸೂಗೂರು ಕೇಂದ್ರಗಳನ್ನು ಅತಿಸೂಕ್ಷ್ಮ ಪರೀಕ್ಷಾ ಕೇಂದ್ರಗಳೆಂದು ಗುರುತಿಸಲಾಗಿದೆ.

ಕಳೆದ ವರ್ಷದಂತೆ ಈ ಬಾರಿಯೂ ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಪರೀಕ್ಷೆಯಲ್ಲಿ ಯಾವುದೇ ಅವ್ಯವಹಾರ ನಡೆಯಬಾರದು. ಪಾರದರ್ಶಕವಾಗಿರಬೇಕು ಎಂಬ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ವೆಬ್‌ಕಾಸ್ಟಿಂಗ್ ಆಗಲಿದೆ. ವಿದ್ಯಾರ್ಥಿಗಳ ಅನುಕೂಲ ದೃಷ್ಟಿಯಿಂದಲೇ ಈ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಗಡಿಭಾಗದ ವಿದ್ಯಾರ್ಥಿಗಳ ಕಡೆ ಗಮನ: ಪರೀಕ್ಷೆ ಸಮಯದಲ್ಲಿ ಗ್ರಾಮೀಣ ಪ್ರದೇಶಗಳಿಂದ ಬರುವ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕಾಗಿ ಸಾರಿಗೆ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಲಾಗಿದೆ. ವಿದ್ಯಾರ್ಥಿಗಳು ಆತಂಕಪಡುವ ಅಗತ್ಯವಿಲ್ಲ. ಪ್ರವೇಶಪತ್ರ ತೋರಿಸಿ ವಿದ್ಯಾರ್ಥಿಗಳು ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಗಡಿಭಾಗದಲ್ಲಿರುವ ಪರೀಕ್ಷಾರ್ಥಿಗಳ ಬಗ್ಗೆಯೂ ಗಮನ ಹರಿಸಲಾಗಿದೆ. ಈಗಾಗಲೇ ಪರೀಕ್ಷಾ ಕೇಂದ್ರಗಳಿಗೆ ಹಲವು ಬಾರಿ ಭೇಟಿ ನೀಡಿ, ಪೂರ್ವ ಸಿದ್ಧತೆಯನ್ನು ಪರಿಶೀಲಿಸಲಾಗಿದೆ.

ಬೇಸಿಗೆಯಾಗಿರುವುದರಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಫ್ಯಾನ್ ವ್ಯವಸ್ಥೆ ಮಾಡಲಾಗಿದೆ. ಕೇಂದ್ರದ ಮುಂದೆ ಶಾಮಿಯಾನ ಹಾಕಿಸಲಾಗುವುದು. ಪರೀಕ್ಷೆಗಳ ದಿನದಂದು ಜಿಲ್ಲಾದ್ಯಂತ ಸಂಚರಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳ ಮೂರು ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಪರೀಕ್ಷಾ ಮೇಲ್ವಿಚಾರಣೆ ನಡೆಸಲಿವೆ. ಉಪ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಪ್ರಶ್ನೆಪತ್ರಿಕೆ ಪಾಲಕರು, ಸ್ಥಾನಿಕ ಜಾಗೃತದಳ, ಮೊಬೈಲ್ ಸ್ವಾಧೀನ ಅಧಿಕಾರಿ, ರೂಟ್ ಅಧಿಕಾರಿ ಸೇರಿದಂತೆ ಒಟ್ಟು 443 ಸಿಬ್ಬಂದಿಯನ್ನು ಪರೀಕ್ಷೆಗೆ ನಿಯೋಜಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕಿ ಬಿ. ಉಮಾದೇವಿ ''''ಕನ್ನಡಪ್ರಭ''''ಕ್ಕೆ ತಿಳಿಸಿದ್ದಾರೆ.

ಉತ್ತಮ ಸ್ಥಾನ ಗಳಿಸುವ ನಿರೀಕ್ಷೆ:ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ 2022-23ನೇ ಸಾಲಿನಲ್ಲಿ 31ನೇ ಸ್ಥಾನದಲ್ಲಿತ್ತು. ಕಳೆದ ವರ್ಷ 28ನೇ ಸ್ಥಾನದಲ್ಲಿತ್ತು. ಈ ಬಾರಿ 10ರೊಳಗಿನ ಸ್ಥಾನ ಪಡೆಯಬೇಕು ಎಂಬ ಉದ್ದೇಶದಿಂದ ಕಳೆದ ನಾಲ್ಕೈದು ತಿಂಗಳಿನಿಂದ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸಲು ಶಿಕ್ಷಣ ಇಲಾಖೆ ನಾನಾ ಕಸರತ್ತು ನಡೆಸಿದೆ. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಅವರಿಗೆ ಹೆಚ್ಚಿನ ಅಭ್ಯಾಸ ಮಾಡಿಸಲಾಗಿದೆ. 15 ದಿನಗಳಿಗೊಮ್ಮೆ ಘಟಕ ಪರೀಕ್ಷೆ, ಪರೀಕ್ಷಾ ಪೂರ್ವ ಸಿದ್ಧತಾ ಪರೀಕ್ಷೆಗಳನ್ನು ನಡೆಸಲಾಗಿದೆ. ಪರೀಕ್ಷೆಯಲ್ಲಿ ಪಾಸ್ ಆಗಲು ಬೇಕಾದ ಅಂಕಗಳನ್ನು ತರಲು ವಿದ್ಯಾರ್ಥಿಗಳಿಗೆ ಸಾಧ್ಯವಾಗಬೇಕು ಎಂಬ ಉದ್ದೇಶದಿಂದ ಕಲಿಕಾ ಆಸರೆ, ಪ್ರತಿಬಿಂಬ ಹಾಗೂ ಅಭ್ಯಾಸ ಪುಸ್ತಕಗಳನ್ನು ನೀಡಲಾಗಿದ್ದು, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಲೆ ಮುಗಿದ ಬಳಿಕವೂ ವಿಶೇಷ ತರಗತಿಗಳನ್ನು ತೆಗೆದುಕೊಳ್ಳಲಾಗಿದೆ. ಇಲಾಖೆಯ ಅಧಿಕಾರಿಗಳ ಇಷ್ಟೆಲ್ಲ ಕಸರತ್ತುಗಳ ನಡುವೆ ಈ ಬಾರಿ ಬಳ್ಳಾರಿ ಜಿಲ್ಲೆ ಫಲಿತಾಂಶದಲ್ಲಿ ಯಾವ ಸ್ಥಾನಕ್ಕೆ ಜಿಗಿಯಲಿದೆ ಎಂಬ ಕುತೂಹಲವಿದೆ.

ಪರೀಕ್ಷಾ ಸಿದ್ಧತೆ ಪೂರ್ಣಗೊಂಡಿದೆ. ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ತಂಪಾದ ನೀರು ವ್ಯವಸ್ಥೆ ಮಾಡಿದ್ದೇವೆ. ಒಆರ್‌ಎಸ್‌ ಪ್ಯಾಕೆಟ್‌ಗಳನ್ನು ತರಿಸಿಟ್ಟುಕೊಳ್ಳಲಾಗಿದೆ. ಪರೀಕ್ಷೆ ಸಮಯದಲ್ಲಿ ವಿದ್ಯುತ್ ಸ್ಥಗಿತಗೊಳಿಸಬಾರದು ಎಂದು ಜಿಲ್ಲಾಧಿಕಾರಿ ಅವರು ಜೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಪರೀಕ್ಷೆಗೆ ಹೆಚ್ಚುವರಿ ಬಸ್‌ಗಳನ್ನು ನೀಡುವಂತೆ ಜಿಲ್ಲಾಧಿಕಾರಿ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ತಿಳಿಸಿದ್ದು, ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಪರೀಕ್ಷಾ ಕೇಂದ್ರಗಳ ಬಳಿ ಇರಲಿದ್ದಾರೆ ಎಂದು ಬಳ್ಳಾರಿ ಡಿಡಿಪಿಐ ಬಿ. ಉಮಾದೇವಿ ಹೇಳಿದರು.