ಎಸ್ಸೆಸ್ಸೆಲ್ಸಿ ಪರೀಕ್ಷೆ ಸಮರ್ಪಕ ನಿರ್ವಹಣೆಗೆ ಸೂಚನೆ

| Published : Mar 19 2024, 12:53 AM IST

ಎಸ್ಸೆಸ್ಸೆಲ್ಸಿ ಪರೀಕ್ಷೆ ಸಮರ್ಪಕ ನಿರ್ವಹಣೆಗೆ ಸೂಚನೆ
Share this Article
  • FB
  • TW
  • Linkdin
  • Email

ಸಾರಾಂಶ

ಇದೇ ತಿಂಗಳ 25ರಿಂದ ಜಿಲ್ಲೆಯಾದ್ಯಂತ ಆರಂಭವಾಗಲಿರುವ ಎಸ್ಎಸ್ಎಲ್‌ಸಿ ಪರೀಕ್ಷೆಗೆ ಅವಶ್ಯವಾಗಿರುವ ಸಿದ್ಧತೆಗಳನ್ನು ಕೈಗೊಂಡು ಪರೀಕ್ಷಾ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಇದೇ ತಿಂಗಳ 25ರಿಂದ ಜಿಲ್ಲೆಯಾದ್ಯಂತ ಆರಂಭವಾಗಲಿರುವ ಎಸ್ಎಸ್ಎಲ್‌ಸಿ ಪರೀಕ್ಷೆಗೆ ಅವಶ್ಯವಾಗಿರುವ ಸಿದ್ಧತೆಗಳನ್ನು ಕೈಗೊಂಡು ಪರೀಕ್ಷಾ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಎಸ್ಎಸ್ಎಲ್‌ಸಿ ಪರೀಕ್ಷಾ ಸಂಬಂಧ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಈ ಬಾರಿಯ ಎಸ್ಎಸ್ಎಲ್‌ಸಿ ಪರೀಕ್ಷೆಯು ಮಾ. 25ರಿಂದ ಏಪ್ರಿಲ್ 6 ರವರೆಗೆ ನಡೆಯಲಿದ್ದು, ಪರೀಕ್ಷಾ ಪ್ರಾರಂಭದಿಂದ ಅಂತ್ಯದವರೆಗೆ ಜಿಲ್ಲೆಯ ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾಗಿರುವ ಮುಖ್ಯ ಅಧೀಕ್ಷಕರು ಹಾಗೂ ಮಾರ್ಗಾಧಿಕಾರಿಗಳು ವಹಿಸಿರುವ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪರೀಕ್ಷಾ ಕಾರ್ಯ ನಿರ್ವಹಣೆಯಲ್ಲಿ ಯಾವುದೇ ಗೊಂದಲಗಳಿಗೆ ಅಸ್ಪದವಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉತ್ತಮ ಗಾಳಿ-ಬೆಳಕಿನ ವ್ಯವಸ್ಥೆ ಇರಬೇಕು. ಕುಡಿಯುವ ನೀರು, ಶೌಚಾಲಯ, ಸ್ವಚ್ಚತಾ ಕಾರ್ಯಗಳು ವ್ಯವಸ್ಥಿತವಾಗಿರಬೇಕು. ವಿಶೇಷ ಅಗತ್ಯವುಳ್ಳ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಅವಶ್ಯ ಸೌಲಭ್ಯಗಳನ್ನು ನೀಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಬೇಕು. ಈಗಾಗಲೇ ಅಳವಡಿಸಿರುವ ಸಿಸಿ ಕ್ಯಾಮೆರಾಗಳು ಚಾಲ್ತಿಯಲ್ಲಿರುವ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಿಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ಮಾಡುವಂತೆ ನಿರ್ದೇಶನ ನೀಡಿದರು.ಪರೀಕ್ಷೆ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳಿಗೆ ನಿರಂತರವಾಗಿ ವಿದ್ಯುತ್ ಸರಬರಾಜು ವ್ಯವಸ್ಥೆ ಇರಬೇಕು. ಪರೀಕ್ಷಾ ಕೇಂದ್ರಗಳಲ್ಲಿನ ಯುಪಿಎಸ್‌ಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಯಾವುದೇ ಬಗೆಯ ಪರೀಕ್ಷಾ ಅಕ್ರಮಗಳನ್ನು ತಡೆಯಲು ರಚಿಸಲಾಗಿರುವ ಸ್ಥಾನಿಕ ಜಾಗೃತ ದಳ ಪಾರದರ್ಶಕವಾಗಿ ಕಾರ್ಯಾಚರಣೆ ನಡೆಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಹೆಲ್ಪ್‌ಡೆಸ್ಕ್‌ ಸ್ಥಾಪಿಸಬೇಕೆಂದು ತಿಳಿಸಿದರು.ಪರೀಕ್ಷಾ ಕಾರ್ಯಕ್ಕಾಗಿ ಸಾಮಾನ್ಯ ಬಸ್ಸುಗಳೊಂದಿಗೆ 33 ಹೆಚ್ಚುವರಿ ಕೆ.ಎಸ್.ಆರ್.ಟಿ.ಸಿ ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ಬಸ್‌ಗಳು ನಿಗದಿತ ಸಮಯಕ್ಕೆ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕರೆತರಲು ನೆರವಾಗಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದರು. ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್ ಮಾತನಾಡಿ ಚಾಮರಾಜನಗರ ತಾಲೂಕಿನ 4019 ವಿದ್ಯಾರ್ಥಿಗಳು, ಗುಂಡ್ಲುಪೇಟೆಯ 2722, ಹನೂರಿನ 2507, ಕೊಳ್ಳೇಗಾಲದ 2180 ಹಾಗೂ ಯಳಂದೂರಿನ 975 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 12403 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಚಾಮರಾಜನಗರ ತಾಲೂಕಿನ 15, ಗುಂಡ್ಲುಪೇಟೆ 9, ಹನೂರು 9, ಕೊಳ್ಳೇಗಾಲ 8ಹಾಗೂ ಯಳಂದೂರು ತಾಲೂಕಿನ 4 ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 45ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಎಡಿಸಿ ಗೀತಾ ಹುಡೇದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಿದಂಬರ, ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಅಧೀಕ್ಷಕರು, ಮಾರ್ಗಾಧಿಕಾರಿಗಳಾಗಿ ನೇಮಕವಾಗಿರುವ ಅಧಿಕಾರಿಗಳು, ಮತ್ತಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.