ಗದಗ: ಮಾ. 18ರಿಂದ ಏ. 2ರ ವರೆಗೆ ಜಿಲ್ಲಾದ್ಯಂತ ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 17146 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಇದಕ್ಕೆ ಬೇಕಾಗುವ ಅಗತ್ಯ ಸಿದ್ಧತೆಗಳನ್ನು ಜಿಲ್ಲಾಡಳಿತ ಪೂರ್ಣಗೊಳಿಸಿದೆ.

ಜಿಲ್ಲೆಯ ರೋಣ ತಾಲೂಕು ವ್ಯಾಪ್ತಿಯ 14 ಪರೀಕ್ಷಾ ಕೇಂದ್ರಗಳಲ್ಲಿ 4421 ವಿದ್ಯಾರ್ಥಿಗಳು ಗದಗ ಶಹರ ವ್ಯಾಪ್ತಿಯಲ್ಲಿ 12 ಪರೀಕ್ಷಾ ಕೇಂದ್ರಗಳಲ್ಲಿ 2940 ವಿದ್ಯಾರ್ಥಿಗಳು, ಗದಗ ಗ್ರಾಮೀಣ ಭಾಗದಲ್ಲಿನ 10 ಪರೀಕ್ಷಾ ಕೇಂದ್ರಗಳಲ್ಲಿ 2884 ವಿದ್ಯಾರ್ಥಿಗಳು, ಮುಂಡರಗಿ ತಾಲೂಕಿನಲ್ಲಿ 8 ಪರೀಕ್ಷಾ ಕೇಂದ್ರಗಳಲ್ಲಿ 2401 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ನರಗುಂದ ತಾಲೂಕಿನ 5 ಪರೀಕ್ಷಾ ಕೇಂದ್ರಗಳಲ್ಲಿ 1548 ವಿದ್ಯಾರ್ಥಿಗಳು ಹಾಗೂ ಶಿರಹಟ್ಟಿ ತಾಲೂಕಿನ 12 ಪರೀಕ್ಷಾ ಕೇಂದ್ರಗಳಲ್ಲಿ 2952 ವಿದ್ಯಾರ್ಥಿಗಳು, ಒಟ್ಟಾರೆ ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳಲ್ಲಿ 17146 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರಶ್ನೆಪತ್ರಿಕೆಗಳನ್ನು ಸಕಾಲದಲ್ಲಿ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಒಟ್ಟು 26 ಮಾರ್ಗಗಳನ್ನು ರಚಿಸಲಾಗಿದೆ.

ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪರೀಕ್ಷಾರ್ಥಿಗಳ ಬದಲು ಬೇರೆಯವರು ಪರೀಕ್ಷೆಗೆ ಹಾಜರಾಗುವುದು ಮುಂತಾದ ಅವ್ಯವಹಾರ ತಡೆಗಟ್ಟಲು ಮತ್ತು ಪರೀಕ್ಷಾ ಕೇಂದ್ರಗಳಲ್ಲಿ ಶಿಸ್ತು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್‌ ಪರಿಮಿತಿಯೊಳಗೆ ಮಾ. 18ರಿಂದ ಏ. 2 ರ ವರೆಗೆ ಬೆಳಗ್ಗೆ 9.30ರಿಂದ ಮಧ್ಯಾಹ್ನ 2.30ರ ವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ‍್ಯ ನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿ ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝೆರಾಕ್ಸ್‌ ಅಂಗಡಿ, ಬುಕ್‌ ಸ್ಟಾಲ್‌, ಫೋಟೋ ಕಾಪಿಯರ್‌ಗಳನ್ನು ಬಂದ್ ಮಾಡಲು ಆದೇಶಿಸಿದೆ.


ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್‌ ಫೋನ್‌ ಮತ್ತು ಇತರೆ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಆಗಮಿಸುವ ಸಮಯ ಮತ್ತು ಹೊರಹೋಗುವ ಸಮಯದಲ್ಲಿ ಮಾತ್ರ ಚಿತ್ರೀಕರಿಸಲು ಮಾಧ್ಯಮದವರಿಗೆ ಅವಕಾಶವಿದೆ. ಪರೀಕ್ಷಾ ಗೌಪ್ಯತೆ ದೃಷ್ಟಿಯಿಂದ ಪರೀಕ್ಷಾ ಕೊಠಡಿಗಳಲ್ಲಿ ಪ್ರವೇಶ, ಚಿತ್ರೀಕರಣ ಇತ್ಯಾದಿಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್‌. ಶ್ರೀಧರ್‌ ಆದೇಶಿಸಿದ್ದಾರೆ.

ಉಚಿತ ಬಸ್‌ ಪ್ರಯಾಣಕ್ಕೆ ಅವಕಾಶ: ಮಾ. 18ರಿಂದ ಆರಂಭಗೊಳ್ಳುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿಯೂ ಇತರೆ ವಿದ್ಯಾಸಂಸ್ಥೆಗಳಲ್ಲಿ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮವು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನದಂದು ಪರೀಕ್ಷೆಗೆ ಹಾಜರಾಗುವ ಎಲ್ಲ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ಮತ್ತು ವಾಸಸ್ಥಳಕ್ಕೆ ಹಿಂದಿರುಗುವಾಗ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ. ಪರೀಕ್ಷಾ ವೇಳಾಪಟ್ಟಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾ. 18ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1.15ರ ವರೆಗೆ ಪ್ರಥಮ ಭಾಷೆ, 23ರಂದು ಬೆಳಗ್ಗೆ 10ರಿಂದ 1.15ರ ವರೆಗೆ ವಿಜ್ಞಾನ, 25ರಂದು ಬೆಳಗ್ಗೆ 10ರಿಂದ 1ರ ವರೆಗೆ ದ್ವಿತೀಯ ಭಾಷೆ ಇಂಗ್ಲಿಷ್, 28ರಂದು ಬೆಳಗ್ಗೆ 10ರಿಂದ 1.15ರ ವರೆಗೆ ಗಣಿತ, ಮಾ. 30ರಂದು ಬೆಳಗ್ಗೆ 10ರಿಂದ 1ರ ವರೆಗೆ ತೃತೀಯ ಭಾಷೆ ಹಿಂದಿ, ಏ. 2ರಂದು ಬೆಳಗ್ಗೆ 10ರಿಂದ 1.15ರ ವರೆಗೆ ಸಮಾಜ ವಿಜ್ಞಾನ ಪರೀಕ್ಷೆಗಳು ಜರುಗಲಿವೆ.