ಇತ್ತೀಚೆಗೆ ವಿದ್ಯಾರ್ಥಿಗಳು ಟಿ.ವಿ, ಮೊಬೈಲ್ಹಾಗೂ ಸಾಮಾಜಿಕ ಜಾಲತಾಣದ ಪ್ರಭಾವದಿಂದ ಶೈಕ್ಷಣಿಕ ವ್ಯಾಸಂಗಕ್ಕೆ ಧಕ್ಕೆ ತಂದುಕೊಳ್ಳುತ್ತಿರುವುದಾಗಿ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ

ಕನ್ನಡಪ್ರಭ ವಾರ್ತೆ ನಂಜನಗೂಡು

ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಗೀಳಿನಿಂದಾಗುತ್ತಿರುವ ಅನಾಹುತವನ್ನು ನಿಯಂತ್ರಿಸುವ ಸಲುವಾಗಿ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ಆರೋಗ್ಯ ಇಲಾಖೆಯಿಂದ ಶೀಘ್ರದಲ್ಲಿಯೇ ತಜ್ಞ ವೈದ್ಯರ ಮಾರ್ಗದರ್ಶನದಲ್ಲಿ ಮಕ್ಕಳ ಮೊಬೈಲ್ ಗೀಳು ನಿಯಂತ್ರಣಕ್ಕೆ ಶಿಬಿರ ಆಯೋಜಿಸಲಾಗುವುದು ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.

ಪಟ್ಟಣದ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆ ಆವರಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ದಸಂಸದಿಂದ ಎಸ್ಸೆಸ್ಸೆಲ್ಸಿ ಮಕ್ಕಳಿಗಾಗಿ ಆಯೋಜಿಸಿದ್ದ ಪರೀಕ್ಷಾ ಪೂರ್ವ ತಯಾರಿ ಕಾರ್ಯಾಗಾರದ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚೆಗೆ ವಿದ್ಯಾರ್ಥಿಗಳು ಟಿ.ವಿ, ಮೊಬೈಲ್ಹಾಗೂ ಸಾಮಾಜಿಕ ಜಾಲತಾಣದ ಪ್ರಭಾವದಿಂದ ಶೈಕ್ಷಣಿಕ ವ್ಯಾಸಂಗಕ್ಕೆ ಧಕ್ಕೆ ತಂದುಕೊಳ್ಳುತ್ತಿರುವುದಾಗಿ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಜೀವನದ ಪ್ರಮುಖ ಘಟ್ಟಗಳಲ್ಲೊಂದಾಗಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಬರೆಯಲು ಸಜ್ಜಾಗಿರುವ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನದ ಅವಶ್ಯಕತೆ ಇದ್ದು, ದಸಂಸದಿಂದ ಮಕ್ಕಳಿಗೆ ಪರೀಕ್ಷೆಗೆ ಸಜ್ಜಾಗಲು ನೆರವಾಗುತ್ತಿರುವುದು ಉತ್ತಮ ಕಾರ್ಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನೂ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲೂಕಿಗೆ ಕಳೆದ ವರ್ಷ ಶೇ. 73 ಫಲಿತಾಂಶ ಲಭ್ಯವಾಗಿದ್ದು, ಈ ವರ್ಷ ಕನಿಷ್ಟ ಶೇ. 90 ರಷ್ಟು ಫಲಿತಾಂಶ ಲಭ್ಯವಾಗುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಈಗಿನಿಂದಲೇ ಶ್ರಮವಹಿಸಬೇಕು ಎಂದು ಸಲಹೆ ನೀಡಿದರು.

ತಹಸೀಲ್ದಾರ್ ಸ್ಮಿತಾ ರಾಮು ಮಾತನಾಡಿ, ಶೈಕ್ಷಣಿಕ ವ್ಯಾಸಂಗದಲ್ಲಿರುವ ವಿದ್ಯಾರ್ಥಿಗಳು ತಂತ್ರಜ್ಞಾನದ ಬಲದಿಂದ ಲಭ್ಯವಾಗುವ ಜ್ಞಾನವನ್ನು ಸದ್ಭಳಕೆ ಮಾಡಿಕೊಳ್ಳಬೇಕು ಪರೀಕ್ಷೆಯನ್ನು ನಿರ್ಭೀತಿಯಿಂದ ಎದುರಿಸುವ ಜೊತೆಗೆ ಕೊನೆ ಕ್ಷಣದಲ್ಲಿ ಕಠಿಣ ಪರಿಶ್ರಮದ ಮೂಲಕ ಸಮರ್ಥವಾಗಿ ಸಜ್ಜುಗೊಳ್ಳಬೇಕು ಆ ಮೂಲಕ ಉತ್ತಮ ಫಲಿತಾಂಶ ಪಡೆದುಕೊಳ್ಳಬಹುದಾಗಿದ್ದು ಅಮೂಲ್ಯ ಸಮಯವನ್ನು ವ್ಯರ್ಥ ಮಾಡದೆ ವಿದ್ಯಾರ್ಥಿಗಳು ನಿಯಮಿತವಾಗಿ ವ್ಯಾಸಂಗದಲ್ಲಿ ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.

ದಸಂಸ ತಾಲೂಕು ಸಂಚಾಲಕ ಸುರೇಶ್ ಶಂಕರಪುರ ಮಾತನಾಡಿ, ತಾಲೂಕಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ನುರಿತ ಶಿಕ್ಷಕರ ಮಾರ್ಗದರ್ಶನದಲ್ಲಿ ತಾಲೂಕಿನ 5 ಹೋಬಳಿ ವ್ಯಾಪ್ತಿಯಲ್ಲಿ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರವನ್ನು ಕಳೆದ ನಾಲ್ಕು ವರ್ಷಗಳಿಂದ ನಡೆಸಲಾಗುತ್ತಿದ್ದು ಮಕ್ಕಳು ಕಾರ್ಯಾಗಾರದ ನೆರವನ್ನು ಪಡೆದುಕೊಂಡು ಉತ್ತಮ ಫಲಿತಾಂಶ ಪಡೆದುಕೊಳ್ಳಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ದಸಂಸ ಸಂಘಟನಾ ಸಂಚಾಲಕ ಯಶ್ವಂತ್ಕುಮಾರ್, ಕಾರ್ಮೆಲ್ ಇಂಗ್ಲೀಷ್‌ ಶಾಲೆ ಮುಖ್ಯಶಿಕ್ಷಕಿ ಡೋರಿನ್ ಜಾಕ್ಸ್, ಶಿಕ್ಷಣ ಸಂಯೋಜಕ ಫಣಿರಾಜ್, ಚಿಕ್ಕಣ್ಣ ಹಗಿನವಾಳು ಭಾಗವಹಿಸಿದ್ದರು.