ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ

| Published : Mar 25 2024, 12:53 AM IST / Updated: Mar 25 2024, 08:48 AM IST

ಸಾರಾಂಶ

ಕಾರವಾರ ಶೈಕ್ಷಣಿಕ ಜಿಲ್ಲೆ ೧೦,೧೧೨ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆ ೧೦,೪೯೦ ವಿದ್ಯಾರ್ಥಿಗಳು ಪ್ರಸಕ್ತ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ.

ಕಾರವಾರ: ಜಿಲ್ಲೆಯಲ್ಲಿ ಇಂದಿನಿಂದ(ಮಾ. ೨೫) ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗಲಿದ್ದು, ಸುಗಮವಾಗಿ ನಡೆಯಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ.ಸಾರ್ವಜನಿಕ ಶಿಕ್ಷಣ ಇಲಾಖೆಗೆ ಸಂಬಂಧಿಸಿದಂತೆ ಶಿರಸಿ ಹಾಗೂ ಕಾರವಾರ ಎರಡು ಪ್ರತ್ಯೇಕ ಜಿಲ್ಲೆಗಳಿದ್ದು, ಪರೀಕ್ಷೆ ಸುಗಮವಾಗಿ ನಡೆಯಲು ಎರಡೂ ಜಿಲ್ಲೆಯಲ್ಲಿ ಅಧಿಕಾರಿಗಳು ಕ್ರಮ ವಹಿಸಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಮೂಲ ಸೌಲಭ್ಯಗಳ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ.ಕಾರವಾರ ಶೈಕ್ಷಣಿಕ ಜಿಲ್ಲೆ ೧೦,೧೧೨ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆ ೧೦,೪೯೦ ವಿದ್ಯಾರ್ಥಿಗಳು ಪ್ರಸಕ್ತ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಸುವ್ಯವಸ್ಥಿತವಾಗಿ ನಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಅಧೀಕ್ಷಕರನ್ನು, ಕಸ್ಟೋಡಿಯನ್‌ಗಳನ್ನು, ಉಪ ಅಧೀಕ್ಷಕರನ್ನು ನೇಮಿಸಲಾಗಿದೆ. ಉತ್ತರ ಪತ್ರಿಕೆ ಭದ್ರವಾಗಿಡಲು ಆಯಾ ಉಪ ನಿರ್ದೇಶಕರ ನೇತೃತ್ವದಲ್ಲಿ ಜಿಲ್ಲಾ ಕೇಂದ್ರದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದ್ದು, ಇಲ್ಲಿಯೂ ಸಿಸಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಕೊಠಡಿ ಮೇಲ್ವಿಚಾರಕ, ಮೊಬೈಲ್ ಸ್ವಾಧೀನಾಧಿಕಾರಿಗಳ ನೇಮಕ, ಸ್ಥಾನಿಕ ಜಾಗೃತ ದಳ ನಿಯೋಜಿಸಲಾಗಿದೆ.ಉಪನಿರ್ದೇಶಕರ ಕಚೇರಿಯಿಂದ ಪ್ರಶ್ನೆಪತ್ರಿಕೆಗಳನ್ನು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಪಡೆದು ತಾಲೂಕಿನ ಉಪ ಖಜಾನೆಯಲ್ಲಿ ಇರಿಸಿದ್ದು, ಪರೀಕ್ಷೆಯ ದಿನದಂದು ಕೇಂದ್ರಕ್ಕೆ ತಲುಪಿಸಲಿದ್ದಾರೆ. ಇದಕ್ಕಾಗಿ ಮಾರ್ಗಾಧಿಕಾರಿಗಳನ್ನು ನಿಯುಕ್ತಿ ಮಾಡಲಾಗಿದೆ.ಅಧಿಕಾರಿಗಳ ನಿಯೋಜನೆ: ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಸುಗಮವಾಗಿ ನಡೆಯಲು ಅಗತ್ಯ ಸಿದ್ಧತೆಯನ್ನು ಈಗಾಗಲೆ ಮಾಡಿಕೊಳ್ಳಲಾಗಿದೆ. ಪ್ರಶ್ನೆ ಹಾಗೂ ಉತ್ತರ ಪತ್ರಿಕೆಗಳನ್ನು ಕೇಂದ್ರಕ್ಕೆ ತೆಗೆದುಕೊಂಡು ಹೋಗಲು, ವಾಪಸ್ ಅಲ್ಲಿಂದ ತರಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮಕ್ಕಳು ಯಾವುದೇ ಭಯವಿಲ್ಲದೇ ಪರೀಕ್ಷೆಯನ್ನು ಎದುರಿಸಬೇಕು ಎಂದು ಶಿರಸಿ ಡಿಡಿಪಿಐ ಪಿ. ಬಸವರಾಜ ತಿಳಿಸಿದರು.

ಪರೀಕ್ಷೆಗೆ ಅಗತ್ಯ ಸಿದ್ಧತೆ

ಮುಂಡಗೋಡ: ಮಾ. ೨೫ರಿಂದ ಆರಂಭವಾಗಲಿರುವ ಎಸ್ಎಸ್ಎಲ್‌ಸಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.ಈ ಬಾರಿ ತಾಲೂಕಿನಲ್ಲಿ ೧೨೫೦ಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು, ರೋಟರಿ ಪ್ರೌಢಶಾಲೆ, ಲೊಯೋಲಾ ಪ್ರೌಢಶಾಲೆ ಹಾಗೂ ಕಾತೂರ ಸರ್ಕಾರಿ ಪ್ರೌಢಶಾಲೆ ಸೇರಿದಂತೆ ೪ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.

ಸ್ಥಾನಿಕ ಜಾಗೃತ ದಳ, ವಿಚಕ್ಷಕ ದಳ ಕಾರ್ಯನಿರ್ವಹಿಸುತ್ತಿದ್ದು, ತಹಸೀಲ್ದಾರ್‌ ಮತ್ತು ತಾಪಂ ಕಾರ್ಯನಿರ್ವಹಣಾಧಿಕಾರಿಗಳು ಇದರಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಒಂದು ಕೊಠಡಿಯಲ್ಲಿ ೨೪ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿದೆ.

ಗುಣಮಟ್ಟದ ಹಿತದೃಷ್ಟಿಯಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಒಟ್ಟಾರೆ ಪಾರದರ್ಶಕವಾಗಿ ಪರೀಕ್ಷೆ ನಡೆಸಲು ತಾಲೂಕಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಕಣಾಚಾರಿ ತಿಳಿಸಿದ್ದಾರೆ.