ಕನ್ನಡಪ್ರಭ ವಾರ್ತೆ ಬೇಲೂರುತಾಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಈ ವರ್ಷ ಶಿಸ್ತು ಹಾಗೂ ವ್ಯವಸ್ಥಿತವಾಗಿ ನಡೆಯಲಿದೆ ಎಂದು ತಹಸೀಲ್ದಾರ್ ಶ್ರೀಧರ್ ಕಂಕಣವಾಡಿ ತಿಳಿಸಿದರು.

ತಾಲೂಕು ಕಚೇರಿಯಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಎಲ್ಲಾ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ. ದೂರದ ಹಳ್ಳಿಗಳಿಂದ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಪರೀಕ್ಷಾ ಕೇಂದ್ರಗಳ ಬಳಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಲ್ಲಿ ಮೊಬೈಲ್‌ ಫೋನ್ ಬಳಕೆ ಹೆಚ್ಚಾಗಿರುವುದು ಓದಿನ ಮೇಲೆ ಪರಿಣಾಮ ಬೀರುತ್ತಿದೆ. ಆದ್ದರಿಂದ ಪೋಷಕರು ತಮ್ಮ ಮಕ್ಕಳಿಗೆ ಅನಗತ್ಯವಾಗಿ ಮೊಬೈಲ್ ನೀಡಬಾರದು. ಮಕ್ಕಳು ಓದುವ ಸಮಯದಲ್ಲಿ ಮೊಬೈಲ್ ಬಳಕೆಯನ್ನು ಕಡಿಮೆ ಮಾಡಬೇಕು ಎಂದು ಪೋಷಕರಿಗೆ ಅವರು ಮನವಿ ಮಾಡಿದರು.

ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಸಮರ್ಪಕವಾಗಿ ಬಳಸಲಾಗುತ್ತಿದ್ದು, ಯಾವುದೇ ಅಕ್ರಮ ನಡೆಯದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ನಿಗಾವಹಿಸಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆ ತಡೆಯುವ ಉದ್ದೇಶದಿಂದ ಪಟ್ಟಣದ ಎಲ್ಲಾ ಜೆರಾಕ್ಸ್ ಅಂಗಡಿಗಳಿಗೆ ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಗಳನ್ನು ಪ್ರಿಂಟ್ ಮಾಡಬಾರದು ಎಂದು ಸೂಚನೆ ನೀಡಲಾಗಿದೆ ಎಂದರು. ಇದೀಗ ಬಿಸಿಲಿನ ತಾಪಮಾನ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆಯಿಂದ ಪರೀಕ್ಷಾ ಕೇಂದ್ರಗಳಲ್ಲಿ ಒಆರ್‌ಎಸ್ ಪ್ಯಾಕೆಟ್‌ಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ ಮಾತನಾಡಿ , ತಾಲೂಕಿನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ. ತಾಲೂಕಿನಲ್ಲಿ ಒಟ್ಟು 6 ದಿನಗಳ ಕಾಲ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು, 7 ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗಿದೆ. ಪ್ರತಿಯೊಂದು ಕೇಂದ್ರಕ್ಕೂ ಅಧೀಕ್ಷಕರನ್ನು ನೇಮಕ ಮಾಡಲಾಗಿದ್ದು, ಪರೀಕ್ಷೆ ಸುಗಮವಾಗಿ ನಡೆಯಲು ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗಿದೆ. ಪರೀಕ್ಷೆಗೆ ಸಂಬಂಧಿಸಿದ ಪ್ರಶ್ನೆಪತ್ರಿಕೆಗಳ ಸುರಕ್ಷತೆಗಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದ್ದು, ಪೊಲೀಸ್ ಭದ್ರತೆಯೊಂದಿಗೆ ಸರ್ಕಾರಿ ವಾಹನಗಳ ಮೂಲಕ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ಆರಂಭವಾಗುವ ಮುಕ್ಕಾಲು ಗಂಟೆ ಮೊದಲು ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಬೇಲೂರುಟೌನ್, ಅರೇಹಳ್ಳಿ, ತಗರೆ, ಹಳೇಬೀಡು, ಹಗರೆ ಮಾರ್ಗಗಳಲ್ಲಿ ಪ್ರಶ್ನೆಪತ್ರಿಕೆ ಸಾಗಾಣಿಕೆ ವ್ಯವಸ್ಥೆ ಮಾಡಲಾಗಿದೆ ಎಂದರು.

ಒಟ್ಟು ೭ ಪರೀಕ್ಷಾ ಕೇಂದ್ರಗಳಲ್ಲಿ ಕೊಠಡಿ ಮೇಲ್ವಿಚಾರಕರನ್ನು ಅಗತ್ಯಕ್ಕೆ ಅನುಗುಣವಾಗಿ ನೇಮಕ ಮಾಡಲಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರೌಢಶಾಲಾ ಶಿಕ್ಷಕರನ್ನು ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾಗಿದೆ. ತಹಸೀಲ್ದಾರ್ ನೇತೃತ್ವದಲ್ಲಿ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಯಾವುದೇ ಗೊಂದಲ ಉಂಟಾಗದಂತೆ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ.ಹಳ್ಳಿಗಳಿಂದ ಬರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಅಡ್ಮಿಷನ್ ಟಿಕೆಟ್ ತೋರಿಸಿದರೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗಿದೆ. ಜೊತೆಗೆ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯುತ್ ಸೌಲಭ್ಯ, ಭದ್ರತಾ ವ್ಯವಸ್ಥೆ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಎಲ್ಲಾ ಪರೀಕ್ಷಾ ಕೇಂದ್ರದ ನೂಡಲ್ ಅಧಿಕಾರಿಗಳು ಹಾಜರಿದ್ದರು.