ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ಕ್ರಮಗಳ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ನಗರದ ಫ್ರೀಡಂ ಪಾರ್ಕಿನಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.
ಕನ್ನಡಪ್ರಭ ವಾರ್ತೆ ಬೆಂಗಳೂರು:
ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ಕ್ರಮಗಳ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ನಗರದ ಫ್ರೀಡಂ ಪಾರ್ಕಿನಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿದರು.ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಪಕ್ಷದ ಹಲವು ಶಾಸಕರು, ಸಂಸದರು, ಮುಖಂಡರು ಹಾಗೂ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಜಮಾಯಿಸಿ ಇಡೀ ದಿನ ಪ್ರತಿಭಟನೆ ನಡೆಸಿದರು. ಹಾಲು, ಬಸ್ ಪ್ರಯಾಣ ದರ ಸೇರಿದಂತೆ ವಿವಿಧ ದರ ಏರಿಕೆ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ಅಂತ್ಯದಲ್ಲಿ ಬಿಜೆಪಿ ನಾಯಕರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದಾಗ, ಪೊಲೀಸರು ರಸ್ತೆಗಳಿಗೆ ಬ್ಯಾರಿಕೇಡ್ ಅಳವಡಿಸಿ ಪ್ರತಿಭಟನಾಕಾರರನ್ನು ಯಶಸ್ವಿಯಾಗಿ ತಡೆದರು. ಇದರಿಂದ ರೊಚ್ಚಿಗೆದ್ದ ಬಿ.ವೈ.ವಿಜಯೇಂದ್ರ, ಸಿ.ಟಿ.ರವಿ, ಸತೀಶ್ ರೆಡ್ಡಿ ಸೇರಿದಂತೆ ಹಲವು ನಾಯಕರು ಪೊಲೀಸ್ ಬ್ಯಾರಿಕೇಡ್ ಹತ್ತಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪರಿಸ್ಥಿತಿ ಕೈ ಮೀರುತ್ತಿರುವುದನ್ನು ಅರಿತ ಪೊಲೀಸರು ತಕ್ಷಣ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಪೊಲೀಸರು ಹಾಗೂ ಬಿಜೆಪಿ ನಾಯಕರ ನಡುವೆ ಕೆಲ ಕಾಲ ಹೈಡ್ರಾಮಾ ಕೂಡ ನಡೆಯಿತು.ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ನಿಶ್ಚಿತ: ಬಿಎಸ್‌ವೈ
ಇದಕ್ಕೂ ಮುನ್ನ ಪ್ರತಿಭಟನೆಯಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಈ ಸರ್ಕಾರ ದಿವಾಳಿಯಾಗಿದೆ. ಸರ್ಕಾರಿ ಬಸ್‌ಗಳಿಗೆ ಡೀಸೆಲ್ ತುಂಬಿಸಲು ಹಣ ಕೊಡಲು ಆಗುತ್ತಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಹಣ, ಹೆಂಡ, ತೋಳ್ಬಲದಿಂದ ಅಧಿಕಾರಕ್ಕೆ ಬರುತ್ತೇವೆ ಎನ್ನುವ ಕಾಂಗ್ರೆಸ್ ಅನ್ನು ಜನ ಈಗಾಗಲೇ ತಿರಸ್ಕರಿಸಿದ್ದಾರೆ. ನೀವೆಲ್ಲ ಮೊದಲಿನಂತೆ ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಕಾರ್ಯಕರ್ತರಿಗೆ ಉತ್ಸಾಹ ತುಂಬಿದರೆ, ಕರ್ನಾಟಕದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಹೇಳಿದರು.ಹಾಸನದಲ್ಲಿ ಡಿಕೆಶಿಗೆ ಮಂಗಳಾರತಿ- ಅಶೋಕ್ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರಕ್ಕೆ ಬಂದ ನಂತರ ಏನಾದರೂ ಉತ್ತಮ ಕೆಲಸ ಮಾಡಿದ್ದಾರಾ ಎಂದು ಜನರು ಪ್ರಶ್ನೆ ಮಾಡುತ್ತಿದ್ದಾರೆ. ಇತ್ತೀಚೆಗೆ ಹಾಸನಾಂಬೆ ದೇವಾಲಯದ ದರ್ಶನಕ್ಕೆ ಮುಖ್ಯಮಂತ್ರಿ ಹೋದಾಗ, ಜನರು ಬೆಲೆ ಏರಿಕೆ ಬಗ್ಗೆ ಪ್ರಶ್ನೆ ಮಾಡಿ ಮಂಗಳಾರತಿ ಮಾಡಿ ಕಳುಹಿಸಿದ್ದಾರೆ. ಈಗ ದೇವರು ಕೂಡ ಡಿ.ಕೆ.ಶಿವಕುಮಾರ್‌ಗೆ ಆಶೀರ್ವಾದ ಮಾಡುತ್ತಿಲ್ಲ. ತಮಿಳುನಾಡು ಸರ್ಕಾರ ಕೇಳದಿದ್ದರೂ ಕಾಂಗ್ರೆಸ್ ಸರ್ಕಾರ ನೀರು ಬಿಡುತ್ತಿದೆ. ಈಗ ಡೀಸೆಲ್ ಹಾಕಲೂ ಹಣವಿಲ್ಲ ಎಂದಿದ್ದಾರೆ. ಮುಂದೆ ನೀರು ಕೂಡ ಇರುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.ಬೆಲೆ ಏರಿಕೆ 6ನೇ ಗ್ಯಾರಂಟಿ- ಬಿ.ವೈ.ವಿಜಯೇಂದ್ರ
ಬಿ.ವೈ.ವಿಜಯೇಂದ್ರ ಮಾತನಾಡಿ, ರಾಜ್ಯ ಸರ್ಕಾರವು 6ನೇ ಗ್ಯಾರಂಟಿಯಾಗಿ ಬೆಲೆ ಏರಿಕೆಯನ್ನು ನೀಡಿದೆ. ರಾಜ್ಯದಲ್ಲಿ ಯಾವತ್ತೇ ಚುನಾವಣೆ ನಡೆದರೂ ಈ ಕಾಂಗ್ರೆಸ್ ಸರ್ಕಾರವನ್ನು ಜನತೆ ಮನೆಗೆ ಕಳಿಸುತ್ತಾರೆ. ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಚುನಾವಣೆಯಲ್ಲಿ ಗೆಲ್ಲಿಸಿ ನಿಮ್ಮನ್ನು ದಿಕ್ಕಾಪಾಲು ಮಾಡುವುದು ಶತಃಸಿದ್ಧ ಎಂದು ವಾಗ್ದಾಳಿ ನಡೆಸಿದರು.ಮೊನ್ನೆ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ಹೋಗಿದ್ದರು. ನೀನು ಮುಖ್ಯಮಂತ್ರಿ ಆಗಿ ಮುಂದುವರೆಯಬೇಕಾದರೆ, ಸಿದ್ದರಾಮಯ್ಯ ಅವರ ಕೈಕಾಲು ಹಿಡಿ. ಇಲ್ಲವಾದರೆ, ಮೂರನೇ ಮುಖ್ಯಮಂತ್ರಿ ಬರುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿದ ಬಳಿಕ ಡಿ.ಕೆ.ಶಿವಕುಮಾರ್ ಅವರು ಸಿದ್ದರಾಮಯ್ಯ ಮನೆಗೆ ಹೋಗಿ ಮಾತನಾಡಿದ್ದಾರೆ. ಇವರಿಬ್ಬರ ಸಂಬಂಧ ಹೇಗಿದೆ ಎಂದು ಸ್ವಲ್ಪ ದಿನಗಳಲ್ಲಿ ಸಿದ್ದರಾಮಯ್ಯ ಅವರೇ ತೋರಿಸುತ್ತಾರೆ ಎಂದು ಮಾರ್ಮಿಕವಾಗಿ ಹೇಳಿದರು.ಚಾಕು-ಚೂರಿ ಸಂಸ್ಕೃತಿಯ ಕಾಂಗ್ರೆಸ್- ಛಲವಾದಿ:
ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಕಾಂಗ್ರಸ್‌ನದು ಚಾಕು-ಚೂರಿ ಸಂಸ್ಕೃತಿ. ನಮ್ಮ ಮನೆಗೆ ಚೂರಿ ಕಳುಹಿಸುತ್ತಾರೆ. ಕಾಂಗ್ರೆಸ್‌ನ ತುಂಡುಗಳು ಎಲ್ಲೆಡೆ ಇವೆ. 2028ಕ್ಕೆ ರಾಜ್ಯದ ಜನರು ಮನಸು ಮಾಡಿದರೆ ಅರಬ್ಬಿ ಸಮುದ್ರದಲ್ಲಿ ಹುಡುಕಿದರೂ ಇವರು ಸಿಗುವುದಿಲ್ಲ. ವಿದ್ಯಾವಂತರ ಹೆಚ್ಚಳದಿಂದ ಕಾಂಗ್ರೆಸ್‌ನ ಮನೆ ಬಾಗಿಲು ಹಾಕುವಂತಾಗಿದೆ ಎಂದು ವಾಗ್ದಾಳಿ ನಡೆಸಿದರು.