ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರ ₹4.50 ಲಕ್ಷ ಕೋಟಿ ಸಾಲ ಮಾಡಿದ್ದು, ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಸಂಕಷ್ಟಕ್ಕೆ ಸಿಲುಕಿದೆ.

ಎಸ್‌.ವಿ. ಸಂಕನೂರ ಪರ ಮತಯಾಚಿಸಿದ ಬಿಜೆಪಿ ರಾಜ್ಯಾಧ್ಯಕ್ಷ

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ಕಳೆದ ಮೂರು ವರ್ಷಗಳಲ್ಲಿ ರಾಜ್ಯ ಸರ್ಕಾರ ₹4.50 ಲಕ್ಷ ಕೋಟಿ ಸಾಲ ಮಾಡಿದ್ದು, ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದ ಆರ್ಥಿಕ ಸ್ಥಿತಿ ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರಿ ನೌಕರರಿಗೆ ಸಂಬಳ ನೀಡುವುದಕ್ಕೂ ಕಷ್ಟದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ಆರೋಪಿಸಿದರು.

ನಗರದ ಬಿವಿಬಿ ಕಾಲೇಜಿನ ಬಯೋ ಟೆಕ್ನಾಲಜಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಪರ ಮತಯಾಚಿಸಿ ಮಾತನಾಡಿದರು. ರಾಜ್ಯದಲ್ಲಿ ಯುವಕರಿಗೆ ಉದ್ಯೋಗ ಕಲ್ಪಿಸುವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ. ಸಾರಿಗೆ ಸಂಸ್ಥೆಯ ಬಸ್‌ಗಳಿಗೆ ಡೀಸೆಲ್ ಪೂರೈಸಲೂ ತೊಂದರೆಯಾಗುವ ಸ್ಥಿತಿ ನಿರ್ಮಾಣವಾಗಿದೆ. ಗ್ಯಾರಂಟಿ ಯೋಜನೆಗಳನ್ನು ದೇಶಕ್ಕೆ ಮಾದರಿ ಎಂದು ಬಿಂಬಿಸುವ ಕಾಂಗ್ರೆಸ್, ಅವುಗಳ ಅನುಷ್ಠಾನದಿಂದ ಉಂಟಾಗುತ್ತಿರುವ ಆರ್ಥಿಕ ಒತ್ತಡದ ಬಗ್ಗೆಯೂ ಉತ್ತರಿಸಬೇಕು ಎಂದು ಒತ್ತಾಯಿಸಿದರು.

ಎರಡು ಬಾರಿ ವಿಪ ಸದಸ್ಯರಾಗಿರುವ ಪ್ರೊ. ಎಸ್.ವಿ. ಸಂಕನೂರ ಅವರು ಪ್ರಾಮಾಣಿಕ ಹಾಗೂ ಸಜ್ಜನ ರಾಜಕಾರಣಿಯಾಗಿದ್ದಾರೆ. ಪದವೀಧರರ ಹಿತಾಸಕ್ತಿ ಕಾಪಾಡಲು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅ. 23ರಂದು ನಡೆಯುವ ಚುನಾವಣೆಯಲ್ಲಿ ಮತದಾರರು ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಅವರನ್ನು ದೊಡ್ಡ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಮತ್ತೊಮ್ಮೆ ರೈತಪರ, ಅಭಿವೃದ್ಧಿಪರ ಹಾಗೂ ಯುವಕರಿಗೆ ಉದ್ಯೋಗ ಕಲ್ಪಿಸುವ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು. ಈ ನಿಟ್ಟಿನಲ್ಲಿ ಪದವೀಧರ ಮತದಾರರು ಸಂಕನೂರ ಅವರಿಗೆ ಬೆಂಬಲ ನೀಡಬೇಕು. ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಗೊಂದಲ ಸೃಷ್ಟಿಸುವ ಕಾಂಗ್ರೆಸ್ ಷಡ್ಯಂತ್ರ ಜನರಿಗೆ ಈಗಾಗಲೇ ತಿಳಿದಿದೆ. ಎಡಚರ ವಿದ್ಯಾರ್ಥಿ ಸಂಘಟನೆಗಳ ಬೆಂಬಲದೊಂದಿಗೆ ಕಾಂಗ್ರೆಸ್ ಅರಾಜಕತೆ ಸೃಷ್ಟಿಸುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು.

ರಾಜ್ಯಸಭಾ ಸದಸ್ಯ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮಾ. ನಾಗರಾಜ ಮಾತನಾಡಿ, ಪದವೀಧರರ ವಿಧಾನ ಪರಿಷತ್ ನಾಲ್ಕು ಕ್ಷೇತ್ರಗಳಲ್ಲಿ ಎನ್‌ಡಿಎ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಪ್ರೊ. ಎಸ್.ವಿ. ಸಂಕನೂರ ಅವರು ಸತತ ಮೂರನೇ ಬಾರಿ ಪಶ್ಚಿಮ ಪದವೀಧರರ ಕ್ಷೇತ್ರದಿಂದ ಜಯಶಾಲಿಗಳಾಗಿ ಚುಕ್ಕಾಣಿ ಹಿಡಿಯಬೇಕು ಎನ್ನು ಉದ್ದೇಶದಿಂದ ಸ್ಪರ್ಧೆಗೆ ಇಳಿದಿದ್ದಾರೆ. ಎಸ್‌ಐಆರ್ ಭೂತ ಹಾಗೂ ವಿವಿಧ ಹಿತಾಸಕ್ತಿಗಳನ್ನು ಇಟ್ಟುಕೊಂಡು ರಾಹುಲ್ ಗಾಂಧಿ ದೆಹಲಿಯಲ್ಲಿ ಡೊಂಬರಾಟ ಮಾಡುತ್ತಿದ್ದಾರೆ. ಇದಕ್ಕೆ ನಾವು ತಕ್ಕ ಉತ್ತರ ನೀಡಬೇಕು. ದೇಶದ ಜನರ ದಾರಿ ತಪ್ಪಿಸುತ್ತ ಕುತಂತ್ರವಾದ ಅನುಸರಿಸುತ್ತಿರುವ ಕಾಂಗ್ರೆಸ್ ಆಟ ಬಹಳ ದಿನ ನಡೆಯಲ್ಲ ಎಂದರು.

ಶಾಸಕ ಮಹೇಶ ಟೆಂಗಿನಕಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ವೇಳೆ ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ರವೀಂದ್ರನಾಥ ದಂಡಿನ, ರಘು ಅಕಮಂಚಿ, ಶರಣು ಶೆಲ್ಲಿಕೇರಿ, ಮಹೇಂದ್ರ ಕೌತಾಳ, ಪ್ರೀತಮ್ ಅರಕೇರಿ, ವೆಂಕಟೇಶ ಕಾಟವೆ, ಸಂದೀಪ ಬೂದಿಹಾಳ, ಜಯತೀರ್ಥ ಕಟ್ಟಿ ಸೇರಿದಂತೆ ಹಲವರಿದ್ದರು.