ನಾಳೆಯಿಂದ ತುಮಕೂರಿನ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ

| Published : Jan 17 2025, 12:48 AM IST / Updated: Jan 17 2025, 12:31 PM IST

ನಾಳೆಯಿಂದ ತುಮಕೂರಿನ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ
Share this Article
  • FB
  • TW
  • Linkdin
  • Email

ಸಾರಾಂಶ

ದಿ. 18 ಮತ್ತು 19 ರಂದು ಎರಡು ದಿವಸಗಳ ಕಾಲ ತುಮಕೂರಿನ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ತುಮಕೂರು ಸಂಪೂರ್ಣ ಸಜ್ಜಾಗಿದೆ ಎಂದು ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ. ಪುರುಷೋತ್ತಮ್ ತಿಳಿಸಿದರು.

 ತುಮಕೂರು : ದಿ. 18 ಮತ್ತು 19 ರಂದು ಎರಡು ದಿವಸಗಳ ಕಾಲ ತುಮಕೂರಿನ ಸಿದ್ದಾರ್ಥ ತಾಂತ್ರಿಕ ಮಹಾವಿದ್ಯಾಲಯ ಆವರಣದಲ್ಲಿ ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ತುಮಕೂರು ಸಂಪೂರ್ಣ ಸಜ್ಜಾಗಿದೆ ಎಂದು ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ. ಪುರುಷೋತ್ತಮ್ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 18 ರ ಬೆಳಿಗ್ಗೆ 8 ಗಂಟೆಗೆ ಟೌನ್ ಹಾಲ್ ವೃತ್ತದಿಂದ ಎಸ್‌ಎಸ್ ಐ ಟಿ ಮೈದಾನದವರೆಗೂ ನಡೆಯಲಿರುವ ಪತ್ರಕರ್ತರ ಮೆರವಣಿಗೆಗೆ ಜಿಲ್ಲೆಯ ವಿವಿಧ ಮಠಾಧೀಶರು ಹಾಗೂ ಜನಪ್ರತಿನಿಧಿಗಳು ಚಾಲನೆ ನೀಡಲಾಗಿದ್ದಾರೆ. 

ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಮ್ಮೇಳನ ಉದ್ಘಾಟನೆ ಮಾಡಲಿದ್ದಾರೆ. ಕೇಂದ್ರ ಮಂತ್ರಿ ವಿ ಸೋಮಣ್ಣ, ಗೃಹ ಸಚಿವ ಡಾ ಜಿ. ಪರಮೇಶ್ವರ್, ಸಹಕಾರ ಸಚಿವ ಕೆ ಎನ್‌ ರಾಜಣ್ಣ ಸೇರಿದಂತೆ ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳು ಅಧಿಕಾರಿಗಳು, ಸಂಘ ಸಂಸ್ಥೆಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ನಂತರ ಪತ್ರಕರ್ತರಿಗಾಗಿ ವಿವಿಧ ಗೋಷ್ಠಿಗಳು ನಡೆಯಲಿದ್ದು ಅಂದು ಸಂಜೆ ಖ್ಯಾತಗಾಯಕಿ ಶಮಿತಾ ಮಲ್ನಾಡ್‌ ಅವರ ಸಂಗೀತ ಸಂಜೆ ಕಾರ್ಯಕ್ರಮ ನಡೆಯಲಿದೆ. 

ಎರಡನೇ ದಿನವು ಕೂಡ ಸಮ್ಮೇಳನ ಮುಂದುವರೆಯಲಿದ್ದು ವಿವಿಧ ಗೋಷ್ಠಿಗಳು ಸೇರಿದಂತೆ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಕಣ್ಣಿಗೆ ಮುದ ನೀಡಲಿವೆ. 

ಸಮಾರೋಪ ಸಮಾರಂಭದಲ್ಲಿ ಕೇಂದ್ರ ಬೃಹತ್‌ ಕೈಗಾರಿಕೆ ಸಚಿವ ಎಚ್ ಡಿ ಕುಮಾರಸ್ವಾಮಿ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ರಾಘವೇಂದ್ರ ಸೇರಿದಂತೆ ವಿವಿಧ ಪ್ರಮುಖರು ರಾಜಕಾರಣಿಗಳು ಭಾಗಿಯಾಗಲಿದ್ದು ಕಲ್ಪತರು ನಾಡಿನಲ್ಲಿ ಸಾಧನೆಗೈದ ವಿವಿಧ ಸಾಧಕರಿಗೆ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಲ್ಪತರು ರತ್ನ ಪ್ರಶಸ್ತಿಯನ್ನು ವಿತರಣೆ ಮಾಡಲಾಗುವುದು. ಅಲ್ಲದೇ ಈ ಸಮಾರಂಭದಲ್ಲಿ ಕೆಯುಡಬ್ಲ್ಯೂಜೆ ತನ್ನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಧಾನ ಮಾಡಲಿದೆ.

 ಜಿಲ್ಲೆಯ ಎಲ್ಲಾ ಸಂಘ ಸಂಸ್ಥೆಗಳು, ಮಹಿಳಾ ಪದಾಧಿಕಾರಿಗಳು, ಮಹಿಳಾ ಸಂಘಟಕರು ಸೇರಿದಂತೆ ಸಾರ್ವಜನಿಕರಿಗೆ ಸಮ್ಮೇಳನಕ್ಕೆ ಮುಕ್ತ ಅವಕಾಶವಿದ್ದು ಈ ಸಮ್ಮೇಳನಕ್ಕೆ ಬಂದು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದು ಮಾತನಾಡಿದ ಶಾಸಕ ಜ್ಯೋತಿ ಗಣೇಶ್ ಅವರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ್‌ ಅವರ ಮಾರ್ಗದರ್ಶನಲ್ಲಿ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ನಡೆಯಲಿರುವ ಪತ್ರಕರ್ತರ ರಾಜ್ಯ ಸಮ್ಮೇಳನವನ್ನು ಯಶಸ್ವಿಗೊಳಿಸೋಣ ಎಂದರು.

ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಂ.ಎಸ್‌ ರವಿಪ್ರಕಾಶ್‌ ಅವರು ಮಾತನಾಡಿ ಗೃಹ ಸಚಿವರು ಹಾಗೂ ಸಾಹೇ ವಿಶ್ವ ವಿದ್ಯಾಲಯದ ಕುಲಾಧಿಪತಿ ಡಾ. ಜಿ ಪರಮೇಶ್ವರ್‌ ಅವರ ಆಶಯದಂತೆ ನಮ್ಮ ಕಾಲೇಜು ಆವರಣದಲ್ಲಿ ನಡೆಯುತ್ತಿರುವ ರಾಜ್ಯಮಟ್ಟದ 39ನೇ ಪತ್ರಕರ್ತರ ಸಮ್ಮೇಳನ ವಿಭಿನ್ನವಾಗಿ ಹತ್ತು ಹಲವು ವಿಶೇಷತೆಗಳಿಂದ ಕೂಡಿದೆ ಎಂದರು. ಸಮ್ಮೇಳನದ ಎರಡೂ ದಿವಸ ವಿವಿಧ ಗೋಷ್ಠಿಗಳು ನಡೆಯಲಿದ್ದು ಕಾರ್ಯಕ್ರಮದ ಯಶಸ್ಸಿಗೆ ಎಲ್ಲರ ಸಹಕರಿಸುವಂತೆ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ಮನವಿ ಮಾಡಿದೆ. ಪತ್ರಿಕಾಗೋಷ್ಠಿಯಲ್ಲಿ ವಿವಿಧ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.