ಪಂಚ ಗ್ಯಾರಂಟಿ ಯೋಜನೆಗಳಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ದೇಶದಲ್ಲಿಯೇ ಮಾದರಿ ಸರ್ಕಾರವಾಗಿದೆ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಬಣ್ಣಿಸಿದರು.

ಕನ್ನಡಪ್ರಭ ವಾರ್ತೆ ಭದ್ರಾವತಿ

ಪಂಚ ಗ್ಯಾರಂಟಿ ಯೋಜನೆಗಳಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ದೇಶದಲ್ಲಿಯೇ ಮಾದರಿ ಸರ್ಕಾರವಾಗಿದೆ ಎಂದು ನಗರಸಭೆ ಹಿರಿಯ ಸದಸ್ಯ ಬಿ.ಕೆ ಮೋಹನ್ ಬಣ್ಣಿಸಿದರು.

ಅವರು ಮಂಗಳವಾರ ತಾಲೂಕಿನ ಕಾರೇಹಳ್ಳಿ ಗ್ರಾಮದ ಉಚ್ಚಿನದಾಸಪ್ಪ ದೇವಸ್ಥಾನದ ಆವರಣದಲ್ಲಿ ಆಯೋಜಿಸಲಾಗಿದ್ದ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸಭೆ ಉದ್ಘಾಟಿಸಿ ಮಾತನಾಡಿದರು.

ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ಹಿನ್ನೆಲೆಯಲ್ಲಿ ಕೆಲವರು ಸರ್ಕಾರ ದಿವಾಳಿಯಾಗಿದೆ ಎನ್ನುತ್ತಿದ್ದರು. ಇನ್ನೂ ಕೆಲವರು ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿವೆ ಎನ್ನುತ್ತಿದ್ದರು. ಮತ್ತೆ ಇನ್ನೂ ಕೆಲವರು ಭ್ರಷ್ಟಾಚಾರ ಹೆಚ್ಚಾಗಿದೆ ಎನ್ನುತ್ತಿದ್ದರು. ಆದರೆ ಸರ್ಕಾರ ಎಲ್ಲವನ್ನೂ ಮೀರಿ ಮುಂದೆ ಸಾಗುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳಿಂದ ಕೋಟ್ಯಾಂತರ ಜನರಿಗೆ ಅನುಕೂಲವಾಗುತ್ತಿದೆ. ಅದರಲ್ಲೂ ಮಹಿಳೆಯರಿಗೆ ಹೆಚ್ಚಿನ ಅನುಕೂಲವಾಗಿದೆ. ಈ ಯೋಜನೆಗಳನ್ನು ಸರ್ಕಾರ ಯಾವುದೋ ಒಂದು ಧರ್ಮಕ್ಕೆ ಅಥವಾ ಯಾವುದೋ ಒಂದು ಜಾತಿಗೆ ಸೀಮಿತಗೊಳಿಸಿಲ್ಲ. ಸರ್ವ ಜನಾಂಗದವರಿಗೆ ಈ ಯೋಜನೆ ತಲುಪುತ್ತಿದೆ. ಇದು ದೇಶದಲ್ಲಿಯೇ ಅತಿ ದೊಡ್ಡ ಸಾಧನೆಯಾಗಿದ್ದು, ಇಂತಹ ಸರ್ಕಾರವನ್ನು ಮುಂದಿನ ಬಾರಿ ಸಹ ರಾಜ್ಯದ ಜನರು ಆಯ್ಕೆ ಮಾಡುತ್ತಾರೆಂಬ ವಿಶ್ವಾಸವಿದೆ ಎಂದರು.

ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್ ಮಾತನಾಡಿ, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕೇವಲ ಭರವಸೆ ನೀಡುವ ಪಕ್ಷಗಳಾಗಿವೆ. ಆದರೆ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳಿಂದಾಗಿ ಇಂದು ಬಡ ವರ್ಗದವರು ಸ್ವಲ್ಪ ಮಟ್ಟಿಗೆ ನೆಮ್ಮದಿ ಕಾಣುವಂತಾಗಿದೆ. ಅಲ್ಲದೆ ಮಹಿಳೆಯರು ಸ್ವಾಭಿಮಾನದ ಬದುಕು ರೂಪಿಸಿಕೊಳ್ಳಲು ಈ ಯೋಜನೆಗಳು ಸಹಕಾರಿಯಾಗಿವೆ ಎಂದರು.

ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಎಸ್. ಕುಮಾರ್, ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ ಸೇರಿದಂತೆ ಇನ್ನಿತರರು ಮಾತನಾಡಿ, ನುಡಿದಂತೆ ನಡೆಯುತ್ತಿರುವ ಕಾಂಗ್ರೆಸ್ ಸರ್ಕಾರವನ್ನು ಮುಂದಿನ ಚುನಾವಣೆಯಲ್ಲೂ ಬೆಂಬಲಿಸುವಂತೆ ಮನವಿ ಮಾಡಿದರು.

ಉದ್ಯಮಿ ಬಿ.ಕೆ ಜಗನ್ನಾಥ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ನಗರಸಭೆ ಸದಸ್ಯರಾದ ಚನ್ನಪ್ಪ, ಬಸವರಾಜ ಬಿ ಆನೇಕೊಪ್ಪ, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಕಾರೇಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸಮಿತಿ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.