ಅಭಿವೃದ್ಧಿ ಕೆಲಸಗಳಲ್ಲಿ ರಾಜ್ಯ ಸರ್ಕಾರ ಹಿಂದೆ ಬಿದ್ದಿಲ್ಲ: ಸಚಿವ ಕೆ.ಜೆ. ಜಾರ್ಜ್

| Published : Jan 17 2024, 01:48 AM IST

ಅಭಿವೃದ್ಧಿ ಕೆಲಸಗಳಲ್ಲಿ ರಾಜ್ಯ ಸರ್ಕಾರ ಹಿಂದೆ ಬಿದ್ದಿಲ್ಲ: ಸಚಿವ ಕೆ.ಜೆ. ಜಾರ್ಜ್
Share this Article
  • FB
  • TW
  • Linkdin
  • Email

ಸಾರಾಂಶ

ನಗರದ ಕಲ್ಯಾಣನಗರ ಬಡಾವಣೆಯಲ್ಲಿ ನಗರೋತ್ಥಾನದ ನಾಲ್ಕನೇ ಹಂತದ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಭಿವೃದ್ಧಿ ಕೆಲಸಗಳಲ್ಲಿ ರಾಜ್ಯ ಸರ್ಕಾರ ಹಿಂದೆ ಬಿದ್ದಿಲ್ಲ, ರಾಜ್ಯದಲ್ಲಿ ನಿರಂತರವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದರು.

-ಚಿಕ್ಕಮಗಳೂರು ನಗರದಲ್ಲಿ ನಾಲ್ಕನೇ ಹಂತದ ನಗರೋತ್ಥಾನ ಕಾಮಗಾರಿಗೆ ಗುದ್ದಲಿಪೂಜೆ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಅಭಿವೃದ್ಧಿ ಕೆಲಸಗಳಲ್ಲಿ ರಾಜ್ಯ ಸರ್ಕಾರ ಹಿಂದೆ ಬಿದ್ದಿಲ್ಲ, ರಾಜ್ಯದಲ್ಲಿ ನಿರಂತರವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ನಗರದ ಕಲ್ಯಾಣನಗರ ಬಡಾವಣೆಯಲ್ಲಿ ನಗರೋತ್ಥಾನದ ನಾಲ್ಕನೇ ಹಂತದ ಕಾಮಗಾರಿಗೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು. ನಮ್ಮ ಸರ್ಕಾರ ಕಳೆದ ಬಜೆಟ್‌ನಲ್ಲಿ ಪಟ್ಟಿ ಮಾಡಿರುವ ಕಾಮಗಾರಿಗಳನ್ನು ಈಗಾಗಲೇ ಕೈಗೆತ್ತಿಕೊಂಡಿದೆ. ಕಳೆದ ಬಜೆಟ್‌ನಲ್ಲಿ ಘೋಷಣೆ ಮಾಡಿರುವ ಕಾಮಗಾರಿಗಳನ್ನು ಮುಂದುವರೆಸುವಂತೆ ಮುಖ್ಯ ಮಂತ್ರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ. ಅದರ ಪ್ರಕಾರ ಇಡೀ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಆರ್ಥಿಕವಾಗಿ ಸಂಕಷ್ಟದಲ್ಲಿರುವ ಜನಸಾಮಾನ್ಯರು, ಬಡವರು, ಮಧ್ಯಮ ವರ್ಗದವರು ಮತ್ತು ಕೆಳವರ್ಗದವರಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಅದರ ಅಡಿಯಲ್ಲಿ 45 ಸಾವಿರ ಕೋಟಿ ಹಣವನ್ನು ರಾಜ್ಯದಲ್ಲಿ ಫಲಾನುಭವಿಗಳ ಮನೆಗಳಿಗೆ ತಲುಪಿಸಲಾಗಿದೆ ಎಂದು ತಿಳಿಸಿದರು. ಇಂಧನ ಇಲಾಖೆಯಲ್ಲಿ ಗೃಹ ಜ್ಯೋತಿ ಯೋಜನೆಯಡಿ 1.65 ಕೋಟಿ ಫಲಾನುಭವಿಗಳಿಗೆ ಯೋಜನೆಯನ್ನು ತಲುಪಿಸ ಲಾಗಿದೆ. ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಈಗಾಗಲೇ ರಾಜ್ಯದ 60 ಲಕ್ಷ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿಗೆ ಬದಲಾಗಿ ಹಣ ನೀಡ ಲಾಗುತ್ತಿದೆ ಎಂದ ಅವರು, ಗ್ಯಾರಂಟಿ ಯೋಜನೆಗಳನ್ನು ಜನರ ಹಣದಿಂದ ಜನರಿಗೇ ನೀಡುತ್ತಿದ್ದೇವೆ. ಐದು ಗ್ಯಾರಂಟಿ ಯೋಜನೆ ಗಳಿಂದಾಗಿ ರಾಜ್ಯದಲ್ಲಿ ಹಣದ ಹರಿವು ಹೆಚ್ಚಾಗಿದೆ ಉತ್ಪಾದನೆ ಜಾಸ್ತಿಯಾಗುತ್ತಿದೆ ಎಂದರು.

ಶಾಸಕ ಎಚ್.ಡಿ. ತಮ್ಮಯ್ಯ ಮಾತನಾಡಿ, ನಗರೋತ್ಥಾನ 4ನೇ ಹಂತದಲ್ಲಿ ಇಂದು 18 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಾಗುತ್ತಿದೆ. ಅದರಲ್ಲಿ 8 ಕೋಟಿ ಟೆಂಡರ್ ಕರೆಯುವುದು ಉಳಿದ 6 ಕೋಟಿ ವೈಯಕ್ತಿಕ ಸೌಲಭ್ಯಕ್ಕೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.

ಏಳು ತಿಂಗಳಾದರೂ ರಾಜ್ಯ ಸರ್ಕಾರ ಅಭಿವೃದ್ಧಿಗೆ ಮುಂದಾಗಿಲ್ಲ ಎಂಬ ಆರೋಪಕ್ಕೆ ಇಂದು ಕಾಮಗಾರಿಗಳಿಗೆ ನೀಡಿರುವ ಚಾಲನೆ ಉತ್ತರವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಜೊತೆಗೆ ಅಭಿವೃದ್ಧಿಯಲ್ಲಿ ರಾಜ್ಯ ಸರ್ಕಾರ ಕಮ್ಮಿ ಇಲ್ಲ ಎನ್ನುವುದಕ್ಕೆ ಇದು ಉದಾಹರಣೆಯಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಉಪಾಧ್ಯಕ್ಷ ಅಮೃತೇಶ್, ಜಿಲ್ಲಾಧಿಕಾರಿ ಮೀನಾ ನಾಗರಾಜ್, ನಗರಸಭೆ ಆಯುಕ್ತ ಬಸವರಾಜ್, ಜಿಲ್ಲಾ ನಗರ ಅಭಿವೃದ್ಧಿ ಕೋಶದ ಯೋಜನಾಧಿಕಾರಿ ನಾಗರತ್ನ ಹಾಗೂ ಚಿಕ್ಕಮಗಳೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಂಜೇಗೌಡ ಉಪಸ್ಥಿತರಿದ್ದರು.

16 ಕೆಸಿಕೆಎಂ 6

ಚಿಕ್ಕಮಗಳೂರಿನ ಕಲ್ಯಾಣನಗರ ಬಡಾವಣೆಯಲ್ಲಿ ಸಚಿವ ಕೆ.ಜೆ. ಜಾರ್ಜ್‌ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಶಾಸಕ ಎಚ್‌.ಡಿ. ತಮ್ಮಯ್ಯ ಇದ್ದರು.