ಸಾರಾಂಶ
ಕನ್ನಡಪ್ರಭ ವಾರ್ತೆ ಮದ್ದೂರು
1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಿಗೆ ಅನುದಾನ ನೀಡದ ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಡಿ.11ರಂದು ಬೆಳಗಾವಿಯ ಸುವರ್ಣ ಸೌಧದ ಎದುರು ಅನುದಾನರಹಿತ ಶಾಲಾ ಕಾಲೇಜುಗಳ ಆಡಳಿತ ಹಾಗೂ ನೌಕರರ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ರಾಜ್ಯಾಧ್ಯಕ್ಷ ಜಿ.ಸಿ.ಶಿವಪ್ಪ ಹೇಳಿದರು.ಪಟ್ಟಣದಲ್ಲಿ ಸೋಮವಾರ ಮಾತನಾಡಿದ ಅವರು, 1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಶಾಲಾ-ಕಾಲೇಜುಗಳಿಗೆ ಅನುದಾನ ವಿಸ್ತರಿಸಬೇಕೆಂದು 28 ವರ್ಷಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ಪ್ರಯೋಜನವಾಗಿಲ್ಲ. ಕಳೆದ ಕನ್ನಡ ರಾಜ್ಯೋತ್ಸವ ದಿನದಂದು ಕರಾಳ ಕರ್ನಾಟಕ ರಾಜ್ಯೋತ್ಸವ ಎಂದು ಕಪ್ಪುಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ಮಾಡಿದ್ದೇವೆ. ನಂತರ ಬೆಂಗಳೂರು, ಬೆಳಗಾವಿ ಎಲ್ಲಾ ಅಧಿವೇಶನಗಳಲ್ಲಿ ಹೋರಾಟ ಮಾಡಲಾಗಿದೆ ಎಂದರು.
ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೋಟ್ಯಂತರ ರು. ಖರ್ಚು ಮಾಡುತ್ತಾರೆ. ಆದರೆ, ಕನ್ನಡ ಶಾಲೆಗಳೆ ಇಲ್ಲದೆ ಕನ್ನಡ ಭಾಷೆ ಉಳಿಯುವುದಾದರೂ ಹೇಗೆ. ಸರ್ಕಾರದ ನಿರ್ಲಕ್ಷದಿಂದ ನೂರಾರು ಕನ್ನಡ ಶಾಲೆಗಳು ಮುಚ್ಚುತ್ತಿವೆ. ಹಲವು ಶಾಲೆಗಳು ಆಂಗ್ಲ ಮಾಧ್ಯಮಕ್ಕೆ ಪರಿವರ್ತನೆಯಾಗುತ್ತಿವೆ ಎಂದರು.ಸರ್ಕಾರ ಇದೇ ರೀತಿ ಮೈ ಮರೆತರೇ ಕೆಲವೇ ವರ್ಷಗಳಲ್ಲಿ ಕನ್ನಡ ಭಾಷೆ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳು ಕಣ್ಮರೆಯಾದರೆ ಅಚ್ಚರಿಪಡಬೇಕಾಗಿಲ್ಲ, ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಿಗೆ ವೇತನ ಅನುದಾನ ಕೊಡುವಲ್ಲಿ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ 2012ರ ತನಕ ಪ್ರಾರಂಭವಾಗಿರುವ ಶಾಲಾ ಕಾಲೇಜುಗಳಿಗೆ ಅನುದಾನ ನೀಡುವುದಾಗಿ ತಿಳಿಸಿತ್ತು. ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಈ ಬೇಡಿಕೆ ಈಡೇರಿಸಿಲ್ಲ. ಆದ್ದರಿಂದ ಬೆಳಗಾವಿಯಲ್ಲಿ ಡಿ.11ರಂದು ನಡೆಯುವ ಪ್ರತಿಭಟನೆಯಲ್ಲಿ ನಾಗನೂರು ರುದ್ರಾಕ್ಷಿ ಮಠದ ಸ್ವಾಮೀಜಿ ನೇತೃತ್ವದಲ್ಲಿ ಶಿವಾನಂದ ಸ್ವಾಮೀಜಿ ಹಂದಿಗುಂದ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಮಠಾಧೀಶರು ಪಾಲ್ಗೊಳ್ಳುತ್ತಿದ್ದಾರೆ ಎಂದರು.ಡಿ.12 ರಂದು ಬೃಹತ್ ಸಂಖ್ಯೆಯಲ್ಲಿ ಆಡಳಿತ ಮಂಡಳಿಗಳು ಮತ್ತು ಶಿಕ್ಷಕರು ಕುಟುಂಬ ಸಮೇತರಾಗಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಅಧಿವೇಶನದಲ್ಲಿ ಬೇಡಿಕೆ ಈಡೇರದಿದ್ದರೆ ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲೂ ಕೂಡ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದರು.