ರಾಜ್ಯ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಫೆ.13ಕ್ಕೆ ಒಂದು ಸಾವಿರ ದಿನ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಅದೇ ದಿನ ಹಾವೇರಿಯಲ್ಲಿ ಬೃಹತ್‌ ಸಾಧನಾ ಸಮಾವೇಶ ನಡೆಸಲು ಸಿದ್ಧತೆ ನಡೆದಿದೆ.

ಕನ್ನಡಪ್ರಭ ವಾರ್ತೆ ಹಾವೇರಿ

ರಾಜ್ಯ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಫೆ.13ಕ್ಕೆ ಒಂದು ಸಾವಿರ ದಿನ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಅದೇ ದಿನ ಹಾವೇರಿಯಲ್ಲಿ ಬೃಹತ್‌ ಸಾಧನಾ ಸಮಾವೇಶ ನಡೆಸಲು ಸಿದ್ಧತೆ ನಡೆದಿದೆ. ಅಂದು ರಾಜ್ಯದ ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ತಯಾರಿ ನಡೆಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾವೇರಿಯಲ್ಲಿ ಸಮಾವೇಶ ನಡೆಸುವ ಬಗ್ಗೆ ಹೇಳಿಕೆ ನೀಡಿರುವ ಬೆನ್ನಲ್ಲೇ ಹಾವೇರಿಯಲ್ಲಿ ಅಗತ್ಯ ಸಿದ್ಧತೆ ನಡೆಸಲಾಗಿದೆ. ಹೊಸಪೇಟೆಯಲ್ಲಿ ಕಳೆದ ವರ್ಷ ಮೇ 13ರಂದು ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶ ನಡೆದಿತ್ತು. ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಫೆ.13ಕ್ಕೆ 1000 ದಿನವನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ಬೃಹತ್‌ ಸಮಾವೇಶ ನಡೆಸಲು ತೀರ್ಮಾನಿಸಿದೆ. ಜಿಲ್ಲೆ ಹಾಗೂ ರಾಜ್ಯದ ಎಲ್ಲ ಜಿಲ್ಲೆಗಳಿಂದ ಸೇರಿ ಒಂದು ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗೆ ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳು ಮುಂದಾಗಿದ್ದಾರೆ.

ಸರ್ಕಾರದ ಸಾಧನಾ ಸಮಾವೇಶಕ್ಕೆ ರಾಜ್ಯದ ನಾನಾ ಮೂಲೆಗಳಿಂದ ಲಕ್ಷಾಂತರ ಜನರು ಪಾಲ್ಗೊಳ್ಳುವುದರಿಂದ ಎಲ್ಲ ರೀತಿಯಲ್ಲಿ ಅನುಕೂಲಕರವಾಗಿರುವ ಸ್ಥಳಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ಜಿಲ್ಲಾ ಕ್ರೀಡಾಂಗಣ, ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆದ ಜಾಗ ಅಥವಾ ಹಾನಗಲ್ಲ ರಸ್ತೆಯ ಬೈಪಾಸ್‌ ಪಕ್ಕದ ಹೊಲ, ಈ ಮೂರರಲ್ಲಿ ಒಂದು ಕಡೆ ಸಮಾವೇಶ ನಡೆಸುವ ಬಗ್ಗೆ ಪಕ್ಷದ ಸ್ಥಳೀಯ ನಾಯಕರು ಗುರುತು ಮಾಡಿಕೊಂಡಿದ್ದಾರೆ. ಸಮಾವೇಶದ ಜಾಗ, ಕಾರ್ಯಕ್ರಮದ ರೂಪುರೇಷೆ ಸಿದ್ಧಪಡಿಸಲು ಕಂದಾಯ ಸಚಿವ ಕೃಷ್ಣ ಬೈರೇಗೌಡ ಒಂದೆರಡು ದಿನಗಳಲ್ಲೇ ಜಿಲ್ಲೆಗೆ ಆಗಮಿಸುವ ಸಾಧ್ಯತೆಯಿದೆ.