ಸಾರಾಂಶ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಮೇ 20ರಂದು ಹೊಸಪೇಟೆಯಲ್ಲಿ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ವಕ್ಫ್ ಮತ್ತು ವಸತಿ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ತಿಳಿಸಿದರು.
ಹೊಸಪೇಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಮೇ 20ರಂದು ಹೊಸಪೇಟೆಯಲ್ಲಿ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ವಕ್ಫ್ ಮತ್ತು ವಸತಿ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್. ಜಮೀರ್ ಅಹಮದ್ ಖಾನ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸರ್ಕಾರದ ಎರಡನೇ ವರ್ಷದ ಸಾಧನೆ ಹಾಗೂ ಹಕ್ಕು ಪತ್ರ ವಿತರಣಾ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೊಸಪೇಟೆ ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಮೇ 20ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆ ವರೆಗೆ ಬೃಹತ್ ವೇದಿಕೆ ಕಾರ್ಯಕ್ರಮ ಜರುಗಲಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಅನೇಕ ಸಚಿವರು, ಶಾಸಕರು ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಸುಮಾರು 2 ಲಕ್ಷ ಜನರು ಸೇರುವ ನಿರೀಕ್ಷೆ ಇದೆ. ಹಕ್ಕುಪತ್ರ ವಿತರಣಾ ಫಲಾನುಭವಿಗಳು ಸೇರಿದಂತೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಲಿದ್ದಾರೆ. ಇದಕ್ಕೆ ಬೇಕಾದ ಎಲ್ಲ ಸಿದ್ಧತೆಗೆ ಜಿಲ್ಲಾಡಳಿತ ಸೂಕ್ತ ಕ್ರಮವಹಿಸಬೇಕು. ಎರಡು ಜಿಲ್ಲೆಯ ಜನರು ಆಗಮಿಸಲು ಅಂದಾಜು 2000 ಬಸ್‌ಗಳ ವ್ಯವಸ್ಥೆ ಕಲ್ಪಿಸಬೇಕು. ಬಿಸಿಲಿನ ತಾಪಮಾನವನ್ನು ನೀಗಿಸಲು ಜನರಿಗೆ ನೆರಳಿನ ವ್ಯವಸ್ಥೆ, ಶೌಚಾಲಯ, ಶುದ್ಧ ಕುಡಿಯುವ ನೀರು, ನಂದಿನಿ ಮಜ್ಜಿಗೆ, ಊಟದ ವ್ಯವಸ್ಥೆ ಕಲ್ಪಿಸಬೇಕು. ಮುಖ್ಯವಾಗಿ ಟ್ರಾಫಿಕ್ ಜಾಮ್ ಆಗದಂತೆ ಪೊಲೀಸ್ ಇಲಾಖೆ ನಿಗಾ ವಹಿಸಬೇಕು. ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದರು.ಈ ಸಮಾವೇಶದಲ್ಲಿ ಕಂದಾಯ ಗ್ರಾಮಗಳ 1 ಲಕ್ಷ ಜನರಿಗೆ ಹಕ್ಕುಪತ್ರ ವಿತರಣೆ ಮಾಡುವ ಗುರಿ ಹೊಂದಲಾಗಿದೆ. ವಿಜಯನಗರ ಜಿಲ್ಲೆಯಲ್ಲೇ 20 ಸಾವಿರ ಜನರಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದರು.
ಸಭೆಯಲ್ಲಿ ಸಂಸದ ಈ. ತುಕಾರಾಂ, ಶಾಸಕರಾದ ಎಚ್.ಆರ್. ಗವಿಯಪ್ಪ, ಲತಾ ಮಲ್ಲಿಕಾರ್ಜುನ, ನಾರಾ ಭರತ್ ರೆಡ್ಡಿ, ಜೆ.ಎನ್. ಗಣೇಶ್, ಡಾ. ಎನ್.ಟಿ. ಶ್ರೀನಿವಾಸ್, ಅನ್ನಪೂರ್ಣಾ ತುಕಾರಾಂ, ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ, ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ, ವಿಜಯನಗರ ಜಿಲ್ಲಾಧ್ಯಕ್ಷ ಸಿರಾಜ್ ಶೇಖ್, ಬಳ್ಳಾರಿ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ, ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಕುರಿ ಶಿವಮೂರ್ತಿ, ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ, ಜಿಪಂ ಸಿಇಒ ಅಕ್ರಂ ಶಾ, ಎಸ್ಪಿ ಬಿ.ಎಲ್. ಶ್ರೀಹರಿಬಾಬು, ಅಪರ ಜಿಲ್ಲಾಧಿಕಾರಿ ಇ. ಬಾಲಕೃಷ್ಣಪ್ಪ, ಸಹಾಯಕ ಆಯುಕ್ತ ವಿವೇಕಾನಂದ, ತಹಸೀಲ್ದಾರ್ ಎಂ. ಶ್ರುತಿ ಮತ್ತಿತರರಿದ್ದರು.