ಕನ್ನಡಪ್ರಭ ವಾರ್ತೆ ಬೆಂಗಳೂರು
ಕರ್ನಾಟಕವು ತಂತ್ರಜ್ಞಾನ, ಡಿಜಿಟಲ್ ಪರಿಸರ ಅಭಿವೃದ್ಧಿಯಲ್ಲಿ ಗಮನಾರ್ಹ ಕೊಡುಗೆ ನೀಡಿದೆ. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಏರೋಸ್ಪೇಸ್ ಮತ್ತಿತರ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಮೆಚ್ಚುಗೆ ವ್ಯಕ್ತಪಡಿಸಿದರು.ಹೆಬ್ಬಾಳದ ಜಿಕೆವಿಕೆಯಲ್ಲಿ ವಿಎಪಿಎಸ್ ಟೆಕ್ನೋಸಾಫ್ಟ್ ಕಂಪನಿಯ ರಜತ ಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ರಾಜ್ಯವು ತಂತ್ರಜ್ಞಾನ ಮತ್ತು ಡಿಜಿಟಲ್ ಪರಿಸರ ವ್ಯವಸ್ಥೆಯ ಅಭಿವೃದ್ಧಿಯಲ್ಲಿ ಗಮನಾರ್ಹ ಕೊಡುಗೆಯನ್ನು ನೀಡಿದೆ. ಅಷ್ಟೇ ಅಲ್ಲ, ಮಾಹಿತಿ ತಂತ್ರಜ್ಞಾನ, ಸಕ್ರಿಯ ಸೇವೆಗಳು, ಎಲೆಕ್ಟ್ರಾನಿಕ್ಸ್, ಯಂತ್ರೋಪಕರಣ, ಏರೋಸ್ಪೇಸ್, ಜೈವಿಕ ತಂತ್ರಜ್ಞಾನದಂತಹ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದೆ ಎಂದು ಬಣ್ಣಿಸಿದರು.
2030 ರ ವೇಳೆಗೆ ಅಭಿವೃದ್ಧಿ ಹೊಂದಿದ, ಜಾಗೃತ ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸಲು ನಾವೆಲ್ಲರೂ ಒಟ್ಟಾಗಿ ಮುಂದುವರಿಯೋಣ. ದೇಶದ ಅಭಿವೃದ್ಧಿಗೆ ಕೈಜೋಡಿಸೋಣ. ಭಾರತದ ಕೀರ್ತಿಯನ್ನು ವಿಶ್ವಾದ್ಯಂತ ಪಸರಿಸೋಣ. ವಿಎಪಿಎಸ್ ಕಂಪೆನಿಯು ಕಠಿಣ ಪರಿಶ್ರಮದಿಂದ ಗುಣಮಟ್ಟದ ಸೇವೆ ನೀಡುತ್ತಿದ್ದು ಯಶಸ್ವಿ 25 ವರ್ಷಗಳನ್ನು ಪೂರೈಸಿದೆ. ರಾಷ್ಟ್ರ ನಿರ್ಮಾಣಕ್ಕೆ ತನ್ನದೇ ಆದ ಕೊಡುಗೆ ನೀಡಿದೆ ಎಂದು ಪ್ರಶಂಸಿಸಿದರು.ಸಹಕಾರ ಮನೋಭಾವ ಇರಲಿ:
ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ವಿಜ್ಞಾನ, ಗಣಿತ ಕ್ಷೇತ್ರದಲ್ಲಿ ಭಾರತದ ಕೊಡುಗೆ ಅನನ್ಯವಾಗಿದೆ. ಪ್ರತಿಯೊಬ್ಬ ಭಾರತೀಯನೂ ಸ್ವಯಂ ಅಭಿವೃದ್ಧಿ ಹೊಂದುವ ಮೂಲಕ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕು. ಆ ಮೂಲಕ ದೇಶದ ಅಭಿವೃದ್ಧಿಗೂ ಕಾಣಿಕೆ ನೀಡಬೇಕು. ಉತ್ಕೃಷ್ಟ ಗುಣಗಳ ಮೂಲಕ ಎಲ್ಲರೂ ಸಹಕಾರ ಮನೋಭಾವದಿಂದ ಜೀವನ ನಡೆಸಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಬ್ರಿಗೇಡಿಯರ್ ಕಾರಿಯಪ್ಪ, ರಾಜ್ಯಸಭೆ ಮಾಜಿ ಸದಸ್ಯ ಪ್ರಭಾಕರ ಕೋರೆ, ಸಮಾಜ ಸೇವಕ ತಿಪ್ಪೇಸ್ವಾಮಿ, ಚಿತ್ರ ನಿರ್ದೇಶಕ ಓಂ ಸಾಯಿ ಪ್ರಕಾಶ್ ಮತ್ತಿತರರಿಗೆ ‘ವಿದ್ಯಾವರೇಣ್ಯ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ಮಾಜಿ ಪ್ರಧಾನಿ ದಿ.ಲಾಲ್‌ಬಹದ್ದೂರ್ ಶಾಸ್ತ್ರಿ ಅವರ ಪುತ್ರ ಸುನಿಲ್ ಶಾಸ್ತ್ರಿ, ವಿಎಪಿಎಸ್ ವ್ಯವಸ್ಥಾಪಕ ನಿರ್ದೇಶಕ ಸಿದ್ದೇಶ್ ಕುಮಾರ್, ರಜತ ಮಹೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಮಂಜುನಾಥ ಪ್ರಸಾದ್ ಮತ್ತಿತರರು ಹಾಜರಿದ್ದರು.ಹೆಬ್ಬಾಳದ ಜಿಕೆವಿಕೆಯಲ್ಲಿ ಆಯೋಜಿಸಿದ್ದ ವಿಎಪಿಎಸ್ ಟೆಕ್ನೋಸಾಫ್ಟ್ ಕಂಪೆನಿಯ ರಜತ ಮಹೋತ್ಸವ ಸಮಾರಂಭದಲ್ಲಿ ಬ್ರಿಗೇಡಿಯರ್ ಕಾರಿಯಪ್ಪ, ರಾಜ್ಯಸಭೆ ಮಾಜಿ ಸದಸ್ಯ ಪ್ರಭಾಕರ ಕೋರೆ, ಚಿತ್ರ ನಿರ್ದೇಶಕ ಓಂ ಸಾಯಿ ಪ್ರಕಾಶ್ ಮತ್ತಿತರರಿಗೆ ‘ವಿದ್ಯಾವರೇಣ್ಯ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್, ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ವಿಎಪಿಎಸ್ ವ್ಯವಸ್ಥಾಪಕ ನಿರ್ದೇಶಕ ಸಿದ್ದೇಶ್ ಕುಮಾರ್, ರಜತ ಮಹೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಮಂಜುನಾಥ ಪ್ರಸಾದ್ ಇದ್ದರು.