ಫೆ. 6ರಿಂದ 8ರ ವರೆಗೆ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ

| Published : Jan 25 2024, 02:05 AM IST

ಸಾರಾಂಶ

ಪ್ರಥಮ ಬಾರಿಗೆ ಧಾರವಾಡ ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳನ್ನು ಫೆಬ್ರವರಿ 6 ರಿಂದ 8ರ ವರೆಗೆ ಸಂಘಟಿಸಲಾಗುತ್ತಿದೆ.

ಧಾರವಾಡ: ಶಾಲಾ ಶಿಕ್ಷಣ ಇಲಾಖೆಯ 2023-24ನೇ ಸಾಲಿನ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳನ್ನು ಧಾರವಾಡದಲ್ಲಿ ಆಯೋಜಿಸಲಾಗುತ್ತಿದೆ. ಬರುವ ಫೆಬ್ರವರಿ 6 ರಿಂದ 8ರ ವರೆಗೆ ಸಂಘಟಿಸಲಾಗುತ್ತಿದೆ ಎಂದು ಪ್ರಭಾರ ಜಿಲ್ಲಾಧಿಕಾರಿ, ಜಿಪಂ ಸಿಇಒ ಸ್ವರೂಪಾ ಟಿ.ಕೆ. ತಿಳಿಸಿದರು.

ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಬುಧವಾರ ನಡೆದ ಸ್ಪರ್ಧೆಗಳ ಆಯೋಜನೆ ಕುರಿತ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಪ್ರಥಮ ಬಾರಿಗೆ ಧಾರವಾಡ ಜಿಲ್ಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳನ್ನು ಸಂಘಟಿಸಲಾಗುತ್ತಿದೆ. ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ 13 ಸಮಿತಿಗಳನ್ನು ರಚಿಸಲಾಗಿದೆ. ಪ್ರತಿ ಸಮಿತಿಗೆ ಹಿರಿಯ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಧಿಕಾರಿ, ಸಿಬ್ಬಂದಿ ನೇಮಿಸಿ, ಕಾರ್ಯ ಹಂಚಿಕೆ ಮಾಡಲಾಗಿದೆ. ತಮಗೆ ನೀಡಿದ ಕಾರ್ಯಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಸೂಚಿಸಿದರು.

ಈ ಸ್ಪರ್ಧೆಯಲ್ಲಿ 23 ವೈಯಕ್ತಿಕ ಸ್ಪರ್ಧೆಗಳನ್ನು ಮತ್ತು ಮೂರು ಸಾಮೂಹಿಕ ಸ್ಪರ್ಧೆಗಳನ್ನು ಸಂಘಟಿಸಲಾಗುತ್ತಿದೆ. ಧಾರವಾಡ ಸೇರಿದಂತೆ ರಾಜ್ಯದ ಎಲ್ಲ ಶೈಕ್ಷಣಿಕ ಜಿಲ್ಲೆಗಳಿಂದ ಒಟ್ಟು 1750 ಸ್ಪರ್ಧಾಳುಗಳು ಭಾಗವಹಿಸಲಿದ್ದಾರೆ. ಸ್ಪರ್ಧಾಳುಗಳು, ತೀರ್ಪುಗಾರರು ಮತ್ತು ಆಗಮಿಸುವ ಅಧಿಕಾರಿಗಳಿಗೆ ಅಗತ್ಯವಿರುವ ಉಪಹಾರ, ಊಟ, ವಸತಿ ವ್ಯವಸ್ಥೆಯನ್ನು ಮಾಡಲಾಗಿದೆ. ಸ್ಪರ್ಧೆ ನಡೆಯುವ ಸ್ಥಳಗಳಿಗೆ ಸಾರಿಗೆ ವ್ಯವಸ್ಥೆ, ಇತರ ಜಿಲ್ಲೆಯ ಸ್ಫರ್ಧಾಳುಗಳಿಗೆ ಸರಿಯಾದ ಮಾಹಿತಿ ನೀಡಲು ಮತ್ತು ತಕ್ಷಣದ ಸಂಹವನಕ್ಕಾಗಿ ಹೆಲ್ಪ ಡೆಸ್ಕ್‌ ತೆರೆಯಲಾಗುತ್ತದೆ ಮತ್ತು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುತ್ತದೆ ಎಂದರು.

ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಪ್ರತಿ ಜಿಲ್ಲೆಯಿಂದ 50 ಸ್ಪರ್ಧಾಳುಗಳು, ವಿವಿಧ ಸ್ಪರ್ಧೆಗಳ ತೀರ್ಪುಗಾರರಾಗಿ ಒಟ್ಟು 78 ಕ್ರೀಡಾತಜ್ಞರು ಭಾಗವಹಿಸಲಿದ್ದಾರೆ. ಪ್ರತಿ ಜಿಲ್ಲೆಯಿಂದ ಮಕ್ಕಳೊಂದಿಗೆ ಒಬ್ಬ ನೋಡಲ್ ಅಧಿಕಾರಿ ಹಾಗೂ ಇಬ್ಬರು ಮೇಲ್ವಿಚಾರಕ ಶಿಕ್ಷಕರು ಆಗಮಿಸಲಿದ್ದು, 35 ಶೈಕ್ಷಣಿಕ ಜಿಲ್ಲೆಗಳಿಂದ ಒಟ್ಟು 105 ಶಿಕ್ಷಕರು ಭಾಗವಹಿಸಲಿದ್ದಾರೆ. ಜಿಲ್ಲಾವಾರು ಸ್ಪರ್ಧಾಳುಗಳು ಹಾಗೂ ನೋಡಲ್ ಅಧಿಕಾರಿಗಳ ನೋಂದಣಿಯನ್ನು ಆನ್‌ಲೈನ್ ಮೂಲಕ ಮಾಡಿಕೊಳ್ಳಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ. ಅಂದಾಜು ಸ್ಪರ್ಧೆಗೆ 2೨,274 ಜನರು ಭಾಗವಹಿಸಲಿದ್ದು, ಅಗತ್ಯ ಸಿದ್ದತೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.

ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕಿ ಮಮತಾ ನಾಯಕ್, ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ ಸಿದ್ದನಗೌಡರ ಮಾತನಾಡಿದರು. ಉಪಯೋಜನಾ ಸಮನ್ವಯಾಧಿಕಾರಿ ಎಸ್.ಎಂ.ಹುಡೆದಮನಿ ನಿರೂಪಿಸಿದರು. ಸಭೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು, ಆರೋಗ್ಯ ಇಲಾಖೆಯ ಡಾ.ಮಂಜುನಾಥ ಸೊಪ್ಪಿಮಠ, ನೌಕರರ ಸಂಘದ ಅಧ್ಯಕ್ಷ ಎಸ್.ಎಫ್. ಸಿದ್ದನಗೌಡರ, ಮಂಜುನಾಥ ಯಡಹಳ್ಳಿ, ವಿ.ಎಫ್. ಚುಳಕಿ, ರಾಜಶೇಖರ ಹೊನ್ನಪ್ಪನವರ, ಐಟಿಐ ಕಾಲೇಜ ಪ್ರಾಚಾರ್ಯ ಮಹಾವೀರ ಉಪಾಧ್ಯಾಯ ಮತ್ತಿತರರು ಇದ್ದರು.