ಸಾರಾಂಶ
ವಿವಿಧ ಜಿಲ್ಲೆಗಳಿಂದ 3500ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗಿ । ಪೂರ್ವಭಾವಿ ಸಭೆ
ಕನ್ನಡಪ್ರಭ ವಾರ್ತೆ ಮಣಿಪಾಲರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟಗಳು ಮುಂದಿನ ಜ.16ರಿಂದ 23ರ ವರೆಗೆ ಉಡುಪಿಯಲ್ಲಿ ನಡೆಯಲಿದ್ದು, ಇದರಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ 3500ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದರು.ಅವರು ಮಂಗಳವಾರ ಇಲ್ಲಿನ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಜ್ಯ ಒಲಿಂಪಿಕ್ಸ್ ಗೇಮ್ಸ್ ಸಂಘಟಿಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.8 ದಿನಗಳ ಕಾಲ ನಡೆಯುವ ಈ ರಾಜ್ಯ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ 13ಕ್ಕೂ ಹೆಚ್ಚು ಕ್ರೀಡೆಗಳು ನಡೆಯಲಿದೆ. ಉಡುಪಿ ಜಿಲ್ಲಾ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಮತ್ತು ಮಣಿಪಾಲ ಮಾಹೆ ವಿವಿ ಕ್ರೀಡಾಂಗಣದಲ್ಲಿ ಕ್ರೀಡೆಗಳನ್ನು ಆಯೋಜಿಸಲಾಗುತ್ತದೆ. ಉದ್ಘಾಟನೆಗೆ ಮುಖ್ಯ ಮಂತ್ರಿಗಳು ಸೇರಿದಂತೆ ಇತರ ಸಚಿವರು ಹಾಗೂ ಗಣ್ಯರು ಆಗಮಿಸಲಿದ್ದಾರೆ ಎಂದರು.ಕ್ರೀಡಾಪಟುಗಳಿಗೆ, ಅಧಿಕಾರಿಗಳಿಗೆ ಹಾಗೂ ತೀರ್ಪುಗಾರಿಗೆ ತಂಗಲು ವಸತಿ ಸೌಕರ್ಯಗಳನ್ನು, ಊಟೋಪಚಾರ ಇತ್ಯಾದಿ ಎಲ್ಲ ಮೂಲಸೌಕರ್ಯಗಳನ್ನು ಜಿಲ್ಲಾಡಳಿತ ವತಿಯಿಂದ ಒದಗಿಸಲಾಗುವುದು ಎಂದು ತಿಳಿಸಿದರು.ಮಾಹೆಯ ವಿ.ವಿ ಕ್ರೀಡಾಂಗಣದಲ್ಲಿ ಲಾನ್ ಟೆನ್ನಿಸ್, ಟೇಬಲ್ ಟೆನ್ನಿಸ್, ಬ್ಯಾಡ್ಮಿಂಟನ್, ಹಾಕಿ, ಕ್ರೀಡೆಗಳು ನಡೆಯಲಿದೆ. ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಬ್ಯಾಸ್ಕೆಟ್ ಬಾಲ್, ಕಬಡ್ಡಿ, ಟೇಕ್ವಾಂಡೊ, ವಾಲಿಬಾಲ್ ಮತ್ತಿತರ ಕ್ರೀಡೆಗಳು ನಡೆಯಲಿವೆ. ಕ್ರೀಡೆಗಳಿಗೆ ಅನುಗುಣವಾಗಿ ಮೈದಾನವನ್ನು ವ್ಯವಸ್ಥಿತವಾಗಿ ಸಜ್ಜುಗೊಳಿಸಿ, ಕ್ರೀಡಾಪಟುಗಳಿಗೆ ಯಾವುದೇ ಕೊರತೆ ಆಗದಂತೆ ಯಶಸ್ವಿಯಾಗಿ ನಡೆಸಲು ಉಪಸಮಿತಿಗಳನ್ನು, ಸ್ವಯಂಸೇವಕರನ್ನು ನಿಯೋಜಿಸಿ ಶಿಸ್ತು ಬದ್ಧವಾಗಿ ಕ್ರೀಡಾಕೂಟಗಳನ್ನು ನಡೆಸಲಾಗುತ್ತದೆ ಎಂದರು.ಕ್ರೀಡಾಪಟುಗಳನ್ನು ವಸತಿ ನಿಲಯಗಳಲ್ಲಿ, ವಸತಿಗೃಹಗಳಲ್ಲಿ ತಂಗುವ ವ್ಯವಸ್ಥೆ ಮಾಡಿ, ಅಲ್ಲಿಂದ ಅವರಿಗೆ ಕ್ರೀಡಾ ಸ್ಥಳಕ್ಕೆ ತೆರಳಲು ವಾಹನದ ವ್ಯವಸ್ಥೆ ಮಾಡಲಾಗುತ್ತೆದ ಎಂದು ಜಿಲ್ಲಾಧಿಕಾರಿ ಹೇಳಿದರು.ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಜಿ.ಪಂ. ಮುಖ್ಯ ಯೋಜನಾಧಿಕಾರಿ ಉದಯ್ ಕುಮಾರ್ ಶೆಟ್ಟಿ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ವಿ. ನಾಯಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ಡಿಡಿಪಿಐ ಗಣಪತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಐ.ಪಿ ಗಡಾದ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ. ಹಾಗೂ ಮತ್ತಿತರರು ಉಪಸ್ಥಿತರಿದ್ದರು.