ಜುಲೈನಿಂದ ವಿಬಿಜಿ ರಾಮ್ ಜಿ ಆರಂಭಗೊಂಡಿದ್ದು, ಈವರೆಗೆ 1.89 ಕೋಟಿ ಮಾನವ ದಿನ ಸೃಜನೆಯಾಗಿದ್ದು, ದೇಶದಲ್ಲೇ ಕರ್ನಾಟಕ 6ನೇ ಸ್ಥಾನದಲ್ಲಿದೆ. ನಿತ್ಯ 2.5 ಲಕ್ಷ ಗ್ರಾಮೀಣ ಜನರು ವಿಬಿಜಿ ರಾಮ್ ಜಿಯಡಿ ಕೆಲಸ ಮಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು:
ಜುಲೈನಿಂದ ವಿಬಿಜಿ ರಾಮ್ ಜಿ ಆರಂಭಗೊಂಡಿದ್ದು, ಈವರೆಗೆ 1.89 ಕೋಟಿ ಮಾನವ ದಿನ ಸೃಜನೆಯಾಗಿದ್ದು, ದೇಶದಲ್ಲೇ ಕರ್ನಾಟಕ 6ನೇ ಸ್ಥಾನದಲ್ಲಿದೆ. ನಿತ್ಯ 2.5 ಲಕ್ಷ ಗ್ರಾಮೀಣ ಜನರು ವಿಬಿಜಿ ರಾಮ್ ಜಿಯಡಿ ಕೆಲಸ ಮಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಗಾದಿಂದ ವಿಬಿಜಿ ರಾಮ್ ಜಿ ಎಂದು ಬದಲಾವಣೆ ವೇಳೆ ಕೇಂದ್ರ ಮತ್ತು ರಾಜ್ಯದ ಅನುಪಾತವನ್ನು ತಿದ್ದುಪಡಿ ಮಾಡಲಾಗಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಹೆಚ್ಚುವರಿ ಹೊರೆಯಾಗಿದೆ. ಆದರೂ ರಾಜ್ಯ ಸರ್ಕಾರ 3,800 ಕೋಟಿ ರು. ಮೊತ್ತದ ಕಾಮಗಾರಿ ಕೈಗೊಳ್ಳುವುದಕ್ಕೆ ತಾಂತ್ರಿಕ ಅನುಮೋದನೆ ನೀಡಿದೆ. ಕೇಂದ್ರ ಸರ್ಕಾರ 5,760 ಕೋಟಿ ರು.ಮೊತ್ತಕ್ಕೆ ಅನುಮೋದನೆ ನೀಡಿದೆ. ಈ ಪೈಕಿ ಈಗಾಗಲೇ ಕೇಂದ್ರದಿಂದ 1,700 ಕೋಟಿ ರು., ರಾಜ್ಯ ಸರ್ಕಾರದಿಂದ 1,200 ಕೋಟಿ ರು. ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು.
ಇದರಡಿ ಶಾಲಾ ಕಟ್ಟಡ, ತಡೆಗೋಡೆ, ಅಂತರ್ಜಲ ವೃದ್ಧಿ ಸೇರಿದಂತೆ 372 ವಿವಿಧ ಕಾಮಗಾರಿ ಕೈಗೊಳ್ಳುವುದಕ್ಕೆ ಅವಕಾಶವಿದೆ. ರಾಜ್ಯದ ಜನರು ಇದರ ಲಾಭ ಪಡೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಹೆಲ್ಪ್‌ಲೈನ್ ಆರಂಭ:ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ರಾಜ್ಯ ಹಾಗೂ ಜಿಲ್ಲಾಮಟ್ಟದಲ್ಲಿ ಹೆಲ್ಪ್‌ಲೈನ್ ಮಾಡಲಾಗಿದ್ದು, ಸಮಸ್ಯೆ ತಿಳಿದ 24 ಗಂಟೆಯಲ್ಲಿ ಗ್ರಾಮಕ್ಕೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುವುದು. ಬೆಂಗಳೂರಲ್ಲಿರುವವರು 1912, ಇತರೆ ನಗರಗಳು ಹಾಗೂ ಗ್ರಾಮೀಣ ಭಾಗಗಳ ಜನ 1902 ಸಂಖ್ಯೆಗೆ ಕರೆ ಮಾಡಬಹುದು. ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ರಾಜ್ಯದ 859 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಖಾಸಗಿ ಕೊಳವೆ ಬಾವಿಗಳು ಮತ್ತು ಟ್ಯಾಂಕರ್‌ಗಳನ್ನು ಬಾಡಿಗೆಗೆ ಪಡೆದು ಟ್ಯಾಂಕರ್ ಮೂಲಕ ನೀರು ಪೂರೈಸಲು ಕ್ರಮ ವಹಿಸಲಾಗಿದೆ ಎಂದರು.ಈ ಹಿಂದೆ ಸಿದ್ದರಾಮಯ್ಯನವರು ಸಿಎಂ ಆಗಿದ್ದಾಗ ಗ್ರಾಮೀಣ ಕುಡಿಯುವ ನೀರಿಗೆ 117 ಕೋಟಿ ರು.ಬಿಡುಗಡೆ ಮಾಡಿದ್ದರು. ಈಗ ಸಿಎಂ ಡಿ.ಕೆ.ಶಿವಕುಮಾರ್ ಅವರು ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಿಗೆ 189 ಕೋಟಿ ರು.ಗಳನ್ನು ಬಿಡುಗಡೆ ಮಾಡಿದ್ದಾರೆ. ಜತೆಗೆ, ಬರ ಘೋಷಣೆಯಿಂದ ಜಿಲ್ಲಾಧಿಕಾರಿ ಖಾತೆಯಲ್ಲಿ ಎಸ್‌ಡಿಆರ್‌ಎಫ್ ಹಣ ಸಹ ಇದೆ. ಕುಡಿಯುವ ನೀರು ಪೂರೈಕೆಗೆ ಹಣದ ಕೊರತೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಜಲಜೀವನ್ ಮಿಷನ್ ಅಡಿಯಲ್ಲಿ ಹಲವಾರು ಕಾಮಗಾರಿ ಅಪೂರ್ಣವಾಗಿರುವ ಹಾಗೂ ಕಳಪೆ ಕಾಮಗಾರಿ ಆಗಿರುವ ಬಗ್ಗೆ 3ನೇ ವ್ಯಕ್ತಿಯಿಂದ ತಪಾಸಣೆ ಮಾಡಿಸಿ, ಅಸಮರ್ಪಕತೆ ಕಂಡು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದೂ ಸಚಿವರು ತಿಳಿಸಿದರು.ಕೇಂದ್ರ ಹಣ ಕೊಡದಿದ್ರೆ ಕೋರ್ಟ್‌ಗೆ:ಕೇಂದ್ರ ಸರ್ಕಾರ ರಾಜ್ಯಕ್ಕೆ ಬಾಕಿ ಉಳಿಸಿಕೊಂಡಿರುವ 15ನೇ ಹಣಕಾಸು ಆಯೋಗದ 2186.02 ಕೋಟಿ ರು.ಅನುದಾನವನ್ನು ಬಿಡುಗಡೆ ಮಾಡುವಂತೆ ಮತ್ತೊಮ್ಮೆ ಮನವಿ ಮಾಡಲಾಗುವುದು. ಇದಕ್ಕೂ ಸ್ಪಂದಿಸದಿದ್ದರೆ ಸುಪ್ರೀಂಕೋರ್ಟ್ ಮೊರೆ ಹೋಗಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಮಾರ್ಚ್‌ವರೆಗೆ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಚುನಾಯಿತ ಪ್ರತಿನಿಧಿಗಳಿದ್ದರು. ಆದರೆ, ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರವು 15ನೇ ಹಣಕಾಸು ಆಯೋಗದಡಿ ರಾಜ್ಯಕ್ಕೆ ನೀಡಬೇಕಿದ್ದ ₹2,186.02 ಕೋಟಿ ಅನುದಾನವನ್ನು ಬಿಡುಗಡೆ ಮಾಡಿಲ್ಲ ಎಂದು ಅವರು ಆರೋಪಿಸಿದರು.ರಾಜ್ಯ ಸರ್ಕಾರ ಎನ್‌ಐಸಿ ತಂತ್ರಾಂಶ ಹಾಗೂ ಕೇಂದ್ರ ಸರ್ಕಾರ ‘ಗ್ರಾಮಸ್ವರಾಜ್’ ತಂತ್ರಾಂಶ ಬಳಸುತ್ತಿದೆ. ಗ್ರಾಮ ಪಂಚಾಯಿತಿಗಳಲ್ಲಿ ನಡೆದಿರುವ ವೆಚ್ಚದ ಮಾಹಿತಿಯು ಕೇಂದ್ರದ ತಂತ್ರಾಂಶದಲ್ಲಿ ಕಾಣಿಸುತ್ತಿಲ್ಲ ಎಂಬ ನೆಪ ನೀಡಿ ಅನುದಾನ ತಡೆಹಿಡಿಯಲಾಗಿದೆ. ಇದು ಉದ್ದೇಶಪೂರ್ವಕವಾಗಿ ರಾಜ್ಯದ ಮೇಲಿನ ಮಲತಾಯಿ ಧೋರಣೆ ಎಂದು ಸಚಿವರು ಆರೋಪಿಸಿದರು.ಈ ಸಂಬಂಧ ಈಗಾಗಲೇ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹಾಗೂ ಕೇಂದ್ರ ಸಚಿವ ಲಲನ್ ಸಿಂಗ್ ಅವರನ್ನು ಭೇಟಿ ಮಾಡಿ ರಾಜ್ಯದ ಪಾಲಿನ ಅನುದಾನ ಬಿಡುಗಡೆಗೆ ಮನವಿ ಮಾಡಲಾಗಿದೆ. ಮತ್ತೊಮ್ಮೆ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು. ಆದರೂ ಸ್ಪಂದಿಸದಿದ್ದರೆ ರಾಜ್ಯದ ಹಕ್ಕಿನ ಅನುದಾನಕ್ಕಾಗಿ ಸುಪ್ರೀಂಕೋರ್ಟ್ ಮೊರೆ ಹೋಗಲಾಗುವುದು ಎಂದು ಈಶ್ವರ ಖಂಡ್ರೆ ಹೇಳಿದರು.15ನೇ ಹಣಕಾಸು ಆಯೋಗದಡಿ ಗ್ರಾಮ ಪಂಚಾಯಿತಿಗಳಿಗೆ ಶೇ.85, ತಾಲೂಕು ಪಂಚಾಯಿತಿಗಳಿಗೆ ಶೇ.10 ಹಾಗೂ ಜಿಲ್ಲಾ ಪಂಚಾಯಿತಿಗಳಿಗೆ ಶೇ.5ರಷ್ಟು ಅನುದಾನ ನೀಡಬೇಕಿದೆ. ಜಿಪಂ ಹಾಗೂ ತಾಪಂಗಳ ಪಾಲನ್ನು ಹೊರತುಪಡಿಸಿ ಗ್ರಾಮ ಪಂಚಾಯಿತಿಗಳಿಗೆ ಬರಬೇಕಿರುವ 2,186.02 ಕೋಟಿ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಬೇಕಿದೆ ಎಂದು ಅವರು ತಿಳಿಸಿದರು.16ನೇ ಹಣಕಾಸು ಆಯೋಗದ ವರದಿಯಲ್ಲಿ ಜಿಪಂ ಹಾಗೂ ತಾಪಂಗಳಿಗೆ ತಲಾ ಶೇ.10 ಮತ್ತು ಗ್ರಾಮ ಪಂಚಾಯಿತಿಗಳಿಗೆ ಶೇ.80ರಷ್ಟು ಅನುದಾನ ನಿಗದಿಪಡಿಸಲಾಗಿದೆ. ಚುನಾವಣೆ ನಡೆಯದಿರುವ ಸ್ಥಳೀಯ ಸಂಸ್ಥೆಗಳಿಗೆ ಅನುದಾನ ನೀಡುವುದಿಲ್ಲ ಎಂದು ವರದಿಯಲ್ಲಿ ಸ್ಪಷ್ಟಪಡಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.ಜ.15ರೊಳಗೆ ತಾಪಂ, ಜಿಪಂ ಚುನಾವಣೆ:
ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಂಡಿದ್ದು, ಜನವರಿ 15ರ ಒಳಗೆ ಖಂಡಿತವಾಗಿ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ.ಖಂಡ್ರೆ ಭರವಸೆ ನೀಡಿದ್ದಾರೆ.ಚಿಕ್ಕಮಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲ ಹಂತದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳು ನಡೆಯಲಿವೆ. ನಂತರ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲಾಗುವುದು. ಈ ಕುರಿತು ಸಂಪುಟ ಸಭೆಯಲ್ಲಿಯೂ ಮುಖ್ಯಮಂತ್ರಿ ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದರು.ಪ್ರಾಥಮಿಕ ಕರಡು ಅಧಿಸೂಚನೆ ಪ್ರಕಟಣೆ ಬಳಿಕ ಆಕ್ಷೇಪಣೆ ಸಲ್ಲಿಸಲು 10 ದಿನಗಳ ಕಾಲಾವಕಾಶ ನೀಡಲಾಗುವುದು. ಆಕ್ಷೇಪಣೆಗಳ ಪರಿಶೀಲನೆ ನಂತರ ರಾಜ್ಯ ಚುನಾವಣಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಚುನಾವಣೆ ನಡೆಸುವ ಜವಾಬ್ದಾರಿ ರಾಜ್ಯ ಚುನಾವಣಾ ಆಯೋಗದ್ದಾಗಿದೆ. ಪ್ರಸ್ತುತ ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆ ನಡೆಯುತ್ತಿದೆ. ಕೇಂದ್ರ ಚುನಾವಣಾ ಆಯೋಗ ಅಂತಿಮ ಮತದಾರರ ಪಟ್ಟಿ ನೀಡುವಲ್ಲಿ ವಿಳಂಬವಾದರೆ, ಚುನಾವಣೆಗಳು ಜನವರಿಯಲ್ಲಿ ನಡೆಯುವ ಸಾಧ್ಯತೆ ಇದೆ ಎಂದರು.