ಇಂದು, ನಾಳೆ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ

| Published : Feb 03 2024, 01:49 AM IST

ಸಾರಾಂಶ

ದಾವಣಗೆರೆಯಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಪತ್ರಕರ್ತರ ಸಮ್ಮೇಳನ ನಡೆಯಲಿದ್ದು, ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.

ದಾವಣಗೆರೆ: ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ 38ನೇ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ಫೆ.3 ಮತ್ತು 4ರಂದು ನಡೆಯಲಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ, ಹೊರ ರಾಜ್ಯಗಳು, ವಿದೇಶದಿಂದಲೂ ಸುಮಾರು 4500ಕ್ಕೂ ಹೆಚ್ಚು ಪತ್ರಕರ್ತರು ಭಾಗವಹಿಸಲಿದ್ದಾರೆ. ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮಳೇನ ಉದ್ಘಾಟಿಸಲಿದ್ದು, ಭಾನುವಾರ ವಾರ್ಷಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.31 ವರ್ಷಗಳ ನಂತರ ಇಲ್ಲಿ ನಡೆಯುವ ಪತ್ರಕರ್ತರ ಹಬ್ಬಕ್ಕಾಗಿ ಹಿರಿ-ಕಿರಿಯ ಪತ್ರಕರ್ತರು, ಕುಟುಂಬ ಸದಸ್ಯರು ಸಹ ಇದೀಗ ಇದಿರು ನೋಡುತ್ತಿದ್ದಾರೆ. ಸಂಘದ ರಾಜ್ಯ ಘಟಕ, ಜಿಲ್ಲಾ ಘಟಕ ಹಾಗೂ ದಾವಣಗೆರೆ ವರದಿಗಾರರ ಕೂಟದ ಸಹಯೋಗದಲ್ಲಿ ಸಮ್ಮೇಳನ ಆಯೋಜನೆಗೊಂಡಿದೆ. ದಾವಣಗೆರೆ ಜಿಲ್ಲೆಯಾದ 25 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಸಮ್ಮೇಳನ ನಡೆಯುತ್ತಿರುವುದು ಗಮನಾರ್ಹ.

ಬೆಳಗ್ಗೆ 10.30ಕ್ಕೆ ಸಿಎಂ ಸಿದ್ದರಾಮಯ್ಯ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಶಾಸಕ ಡಾ.ಶಾಮನೂರು ಶಿವಶಂಕರಪ್ಪ, ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆಯಲ್ಲಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಲಿದ್ದಾರೆ. ಕೃಷಿ ಸಚಿವ ಎನ್.ಚಲುವರಾಯ ಸ್ವಾಮಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದು, ಜಿಲ್ಲೆಯ ಶಾಸಕರು, ಜನ ಪ್ರತಿನಿಧಿಗಳು, ಅಧಿಕಾರಿಗಳು, ವಿವಿಧ ಜಿಲ್ಲೆಗಳ ಸುಮಾರು 4500 ಪತ್ರಕರ್ತರು ಭಾಗವಹಿಸುವರು.