ಸಾರಾಂಶ
ಬೆಂಗಳೂರು : ಮುಡಾ ಹಗರಣ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ, ಸಿಎಂ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರನ್ನು ಅವಮಾನಿಸಿದ ಕಾಂಗ್ರೆಸ್ ಕ್ರಮ ಖಂಡಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದರು.
ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗಳು ನಡೆದವು. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ವಿರಮಿಸುವುದಿಲ್ಲ ಎಂದು ಶಪಥಗೈದರು. ಸಿದ್ದರಾಮಯ್ಯಗೆ ತಾಕತ್ತಿದ್ದರೆ ಮುಡಾ ಸೇರಿ ಎಲ್ಲಾ ಹಗರಣಗಳ ತನಿಖೆಯನ್ನು ಸಿಬಿಐಗೆ ಕೊಡಲಿ ಎಂದು ಒತ್ತಾಯಿಸಿದರು.
ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಪರಿಷತ್ ನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಪರಿಷತ್ ಸದಸ್ಯ ಎನ್.ರವಿಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಮುಡಾ ಹಗರಣ ವಿಚಾರವಾಗಿ ದಾಖಲೆಗಳನ್ನು ವೈಟ್ನರ್ ಹಚ್ಚಿ ತಿದ್ದಿಲ್ಲ ಎನ್ನುವುದಾದರೆ ಸಿದ್ದರಾಮಯ್ಯ ಧರ್ಮಸ್ಥಳಕ್ಕೆ ಬಂದು ಈ ಬಗ್ಗೆ ಪ್ರಮಾಣ ಮಾಡಲಿ ಎಂದು ಎನ್.ರವಿಕುಮಾರ್ ಸವಾಲು ಹಾಕಿದರು.ಮಂಡ್ಯದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ತುಮಕೂರಿನಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ದಾವಣಗೆರೆಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ, ಚಿತ್ರದುರ್ಗದಲ್ಲಿ ಸಂಸದ ಗೋವಿಂದ ಕಾರಜೋಳ, ಬಳ್ಳಾರಿಯಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು, ಚಿಕ್ಕಮಗಳೂರಿನಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಧಾರವಾಡದಲ್ಲಿ ವಿಧಾನಸಭೆ ಪ್ರತಿಪಕ್ಷ ಉಪನಾಯಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಲಾಯಿತು.
ಮಂಡ್ಯದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಆರ್.ಅಶೋಕ್, ಬಾಂಗ್ಲಾ ರೀತಿ ದಾಳಿ ಮಾಡುವುದಕ್ಕೆ ಇದು ಬಾಂಗ್ಲಾನೂ ಅಲ್ಲ, ಪಾಕಿಸ್ತಾನವೂ ಅಲ್ಲ, ಗಂಡು ಮೆಟ್ಟಿನ ನೆಲ, ಭಾರತವಿದು ಎಂದು ಐವನ್ ಡಿಸೋಜ ವಿರುದ್ಧ ಕಿಡಿ ಕಾರಿದರು. ಡಿಸೋಜಾರದು ದೇಶದ್ರೋಹದ ಹೇಳಿಕೆಯಾಗಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಮೈಸೂರಿನ ಗಾಂಧಿ ಚೌಕದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ, ಯಡಿಯೂರಪ್ಪ ಸಿಎಂ ಆಗಿದ್ದಾಗ ಅಂದಿನ ರಾಜ್ಯಪಾಲರು ಪುಢಾರಿ ರೀತಿ ಹೇಳಿಕೆ ಕೊಡುತ್ತಿದ್ದರು. ರಾಜಭವನ ಕಾಂಗ್ರೆಸ್ ಪಕ್ಷದ ಕಚೇರಿಯಾಗಿತ್ತು ಎಂದು ವಾಗ್ದಾಳಿ ನಡೆಸಿದರು. ರಾಮನಗರದ ಐಜೂರು ವೃತ್ತದಲ್ಲಿ ಪ್ರತಿಭಟನಾಕಾರರು ಹಳೆ ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು, ಆಕ್ರೋಶ ವ್ಯಕ್ತಪಡಿಸಿದರು. ತುಮಕೂರಿನ ಬಿಜಿಎಸ್ ವೃತ್ತದಲ್ಲಿ ಮಾಜಿ ಸಿಎಂ ಸದಾನಂದ ಗೌಡರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು, ಮಾನವ ಸರಪಳಿ ನಿರ್ಮಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ, ಶಿವಮೊಗ್ಗ, ಮಂಗಳೂರು, ಮಡಿಕೇರಿ, ರಾಯಚೂರು, ಕಲಬುರಗಿ, ಯಾದಗಿರಿ ಸೇರಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಪ್ರತಿಭಟನೆಗಳು ನಡೆದ ಬಗ್ಗೆ ವರದಿಯಾಗಿದೆ.