ರಾಜ್ಯಾದ್ಯಂತ ‘ಹರ್‌ ಘರ್‌ ತಿರಂಗಾ’ ಯಾತ್ರೆ: ವಿಜಯೇಂದ್ರ

| Published : Aug 14 2024, 12:53 AM IST

ಸಾರಾಂಶ

ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ರಾಜ್ಯದಲ್ಲಿಯೂ ಹಲವು ಅರ್ಥ ಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಸೂಚನೆ ಮೇರೆಗೆ ರಾಜ್ಯದಲ್ಲಿಯೂ ಹಲವು ಅರ್ಥ ಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಮಂಗಳವಾರ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ 44ನೇ ಬೂತ್‌ನಲ್ಲಿ ಹರ್ ಘರ್‌ ತಿರಂಗಾ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಆ.15ರಂದು ಸ್ವಾತಂತ್ರ್ಯ ದಿನಾಚರಣೆ ಎದುರು ನೋಡುತ್ತಿದ್ದೇವೆ. ಯುವ ಪೀಳಿಗೆಗೆ ಸ್ವಾತಂತ್ರ್ಯ ಸಂಗ್ರಾಮ ನೆನಪು ಮಾಡಿಕೊಡುವುದು, ತ್ಯಾಗ-ಬಲಿದಾನಗಳ ಬಗ್ಗೆ ಚರ್ಚೆ, ದೇಶದ ಯುವಕರಲ್ಲಿ ದೇಶ ಭಕ್ತಿ ಮೂಡಿಸುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಇದರ ಭಾಗವಾಗಿ ಪ್ರತಿ ಮನೆ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಿಸುವ ‘ಹರ್‌ ಘರ್‌ ತಿರಂಗಾ’ ಯಾತ್ರೆಗೆ ಚಾಲನೆ ನೀಡಲಾಗಿದೆ ಎಂದರು.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಬೂತ್‌ 44ರಲ್ಲಿ ಸಂಸದ ಪಿ.ಸಿ.ಮೋಹನ್‌, ಬೆಂಗಳೂರು ಕೇಂದ್ರ ಬಿಜೆಪಿ ಘಟಕದ ಅಧ್ಯಕ್ಷ ಸಪ್ತಗಿರಿಗೌಡ ಹಾಗೂ ಕಾರ್ಯಕರ್ತರ ನೇತೃತ್ವದಲ್ಲಿ ತ್ರಿವರ್ಣ ಧ್ವಜ ಹಾರಿಸಿದ್ದೇವೆ. ಆ.11ರಿಂದ ಈ ಹರ್‌ ಘರ್‌ ತಿರಂಗಾ ಯಾತ್ರೆ ಆರಂಭಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿರುವ ಬೈಕ್‌ ರಾಲಿಯಲ್ಲಿ ಯುವಕರು ಉತ್ಸಾಹದಿಂದ ಪಾಲ್ಗೊಂಡಿದ್ದಾರೆ ಎಂದು ತಿಳಿಸಿದರು.

ಅಂತೆಯೆ ಸ್ವಾಂತಂತ್ರ್ಯ ಹೋರಾಟಗಾರರ ಪುತ್ಥಳಿಗಳು, ಸ್ಮಾರಕಗಳ ಸ್ವಚ್ಛತೆ ಕಾರ್ಯ ನಡೆಯುತ್ತಿದೆ. ಆ.14ರಂದು ದೇಶದ ವಿಭಜನೆಯ ಕರಾಳ ದಿನದ ನೆನಪಿಗಾಗಿ ದೇಶಾದ್ಯಂತ ಸ್ಮೃತಿ ದಿವಸ್ ಆಚರಿಸಲಾಗುತ್ತಿದೆ. ಸ್ವಾಂತ್ರ್ಯ ಸಂಗ್ರಾಮದ ವೇಳೆ ನಡೆದ ಘಟನೆಗಳ ಬಗ್ಗೆ ಯುವಕ ಪೀಳಿಗೆಗೆ ನೆನಪು ಮಾಡಿಕೊಡುವ ನಿಟ್ಟಿನಲ್ಲಿ ಅನೇಕ ಹಿರಿಯರು ಭಾಷಣ ಮಾಡಲಿದ್ದಾರೆ. ರಾಜ್ಯದಲ್ಲಿಯೂ ಈ ಕಾರ್ಯಕ್ರಮಗಳು ನಡೆಯಲಿದೆ ಎಂದು ಮಾಹಿತಿ ನೀಡಿದರು.