ಹುಬ್ಬಳ್ಳಿ:
ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಭ್ರಷ್ಟಾಚಾರ ಹಾಗೂ ವಿವಿಧ ಆರೋಪ ಎದುರಿಸುತ್ತಿರುವ ಶಾಸಕರಿಗೆ ಸಚಿವ ಸ್ಥಾನ ನೀಡಲಾಗಿದೆ. ಸಚಿವ ಕೆ. ನಾಗೇಂದ್ರ ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈಬಿಡಬೇಕು. ಇಲ್ಲವಾದರೆ ರಾಜ್ಯಾದ್ಯಂತ ಬಿಜೆಪಿಯಿಂದ ಹೋರಾಟ ನಡೆಸಲಾಗುವುದು ಎಂದು ವಿಪ ಮುಖ್ಯ ಸಚೇತಕ ಎನ್. ರವಿಕುಮಾರ ಎಚ್ಚರಿಕೆ ನೀಡಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಈ ಹಿಂದೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಪ್ರಕರಣದ ತನಿಖೆ ನಡೆಯುತ್ತಿದ್ದು, ಸಿಬಿಐ ತನಿಖೆ ಹಾಗೂ ನ್ಯಾಯಾಲಯದ ಪ್ರಕ್ರಿಯೆಯೂ ಮುಂದುವರಿದಿದೆ. ತನಿಖೆ ಪೂರ್ಣಗೊಂಡು ಆರೋಪ ಮುಕ್ತರಾಗದ ವ್ಯಕ್ತಿಯನ್ನು ಸಚಿವರನ್ನಾಗಿ ಮಾಡಿರುವುದು ಸರ್ಕಾರದ ನಿಲುವಿನ ಬಗ್ಗೆ ಅನುಮಾನ ಹುಟ್ಟಿಸಿದೆ. ಅವರನ್ನು ಸಚಿವ ಸಂಪುಟದಿಂದ ಕೈಬಿಡದಿದ್ದರೆ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು.
ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಸಂತೋಷ್ ಲಾಡ್ ಅವರ ನೇಮಕಾತಿಯ ಬಗ್ಗೆಯೂ ಪ್ರಶ್ನೆ ಎತ್ತಿದ ರವಿಕುಮಾರ, ವಿವಿಧ ಆರೋಪಗಳು ಕೇಳಿ ಬಂದಿರುವವರನ್ನು ಮತ್ತೆ ಸಚಿವರನ್ನಾಗಿ ಮಾಡಿರುವುದು ಸಮಂಜಸವಲ್ಲ. ಚಿಕ್ಕಮಗಳೂರಿನ ಗಾಯತ್ರಿ ಶಾಂತೇಗೌಡ ಅವರ ಹೆಸರು ಸಚಿವರ ಪಟ್ಟಿಯಲ್ಲಿ ಕಾಣಿಸಿಕೊಂಡು ಬಳಿಕ ಕೈಬಿಡಲಾದ ವಿಚಾರವೂ ಹಲವು ಅನುಮಾನಗಳಿಗೆ ಕಾರಣವಾಗಿದೆ. ಸಚಿವರ ಪಟ್ಟಿಯಲ್ಲಿ ಕೊನೆಯ ಕ್ಷಣದಲ್ಲಿ ನಡೆದ ಬದಲಾವಣೆಗಳ ಹಿಂದಿನ ಕಾರಣವನ್ನು ಸರ್ಕಾರ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.ಸಭಾಪತಿ ಹುದ್ದೆ ರಾಜಕೀಯಕರಣ:
ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಬದಲಾಯಿಸುವ ಪ್ರಕ್ರಿಯೆಯ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ರವಿಕುಮಾರ, ಸಂವಿಧಾನಬದ್ಧ ಹುದ್ದೆಗೆ ಸಂಬಂಧಿಸಿದ ನಿರ್ಧಾರವನ್ನು ಎಐಸಿಸಿ ಪತ್ರದ ಮೂಲಕ ಪ್ರಕಟಿಸಿರುವುದು ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿದರು.
ಆಡಿಯೋ ಬಿಡುಗಡೆ:
ಮಾಜಿ ಸಚಿವ ಆರ್.ಬಿ. ತಿಮ್ಮಾಪುರ ಹಾಗೂ ಕಾಂಗ್ರೆಸ್ ಮುಖಂಡರೊಬ್ಬರ ನಡುವಿನ ದೂರವಾಣಿ ಸಂಭಾಷಣೆ ಎನ್ನಲಾದ ಆಡಿಯೋವನ್ನು ಬಿಡುಗಡೆ ಮಾಡಿದ ಅವರು, ಅದರಲ್ಲಿ ಕೇಳಿಬಂದಿರುವ ವಿಷಯಗಳ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.