ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಪುಸ್ತಕಕ್ಕಿಂತ ಮೊಬೈಲ್‌ಗೆ ಹೆಚ್ಚು ಸಮಯ ಮೀಸಲಿಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಸಣ್ಣ ಮಕ್ಕಳಿಗೆ ಊಟ ಮಾಡಿಸುವಾಗಲೇ ಮೊಬೈಲ್ ತೋರಿಸುವ ಪ್ರವೃತ್ತಿ ಹೆಚ್ಚಾಗಿದ್ದು, ಇದು ಬಾಲ್ಯದಿಂದಲೇ ಮೊಬೈಲ್ ವ್ಯಸನಕ್ಕೆ ಕಾರಣವಾಗುತ್ತಿದೆ. ಇದರಿಂದ ಆರೋಗ್ಯ, ಶಿಕ್ಷಣ ಹಾಗೂ ವ್ಯಕ್ತಿತ್ವದ ಮೇಲೆ ದುಷ್ಪರಿಣಾಮಗಳು ಉಂಟಾಗುತ್ತಿವೆ ಎಂದು ಹೇಳಿದರು. ಪ್ರತಿವರ್ಷ ಜುಲೈ 30ರಂದು ಮಾನವ ಕಳ್ಳಸಾಗಣೆ ವಿರೋಧಿ ದಿನದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಇದ್ದರೆ ಅಪರಾಧಗಳಿಂದ ದೂರವಿರಲು ಸಾಧ್ಯವಾಗುತ್ತದೆ. ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಹೊಣೆಗಾರಿಕೆ ಪೋಷಕರು, ಶಿಕ್ಷಕರು ಹಾಗೂ ಪೊಲೀಸ್ ಇಲಾಖೆಯ ಮೇಲಿದೆ ಎಂದು ತಿಳಿಸಿದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ವಿದ್ಯಾರ್ಥಿಗಳ ಭವಿಷ್ಯ ರೂಪುಗೊಳ್ಳುವ ಅಮೂಲ್ಯ ಹಂತವೇ ವಿದ್ಯಾರ್ಥಿ ಜೀವನ. ಈ ಸಮಯದಲ್ಲಿ ಮೊಬೈಲ್ ವ್ಯಸನಕ್ಕೆ ಒಳಗಾಗದೆ ಶಿಕ್ಷಣ, ಶಿಸ್ತು ಹಾಗೂ ಕಾನೂನಿನ ಅರಿವಿನೊಂದಿಗೆ ಉತ್ತಮ ನಾಗರಿಕರಾಗಿ ಬೆಳೆಯಬೇಕು ಎಂದು ನಗರದ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶ ಕಿರಣ್ ಕುಮಾರ್ ಡಿ. ವಡಿಗೇರ ಕರೆ ನೀಡಿದರು.ನಗರದ ತರಳಬಾಳು ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ, ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಮಾನವ ಕಳ್ಳಸಾಗಣೆ ವಿರೋಧಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಪುಸ್ತಕಕ್ಕಿಂತ ಮೊಬೈಲ್‌ಗೆ ಹೆಚ್ಚು ಸಮಯ ಮೀಸಲಿಡುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಸಣ್ಣ ಮಕ್ಕಳಿಗೆ ಊಟ ಮಾಡಿಸುವಾಗಲೇ ಮೊಬೈಲ್ ತೋರಿಸುವ ಪ್ರವೃತ್ತಿ ಹೆಚ್ಚಾಗಿದ್ದು, ಇದು ಬಾಲ್ಯದಿಂದಲೇ ಮೊಬೈಲ್ ವ್ಯಸನಕ್ಕೆ ಕಾರಣವಾಗುತ್ತಿದೆ. ಇದರಿಂದ ಆರೋಗ್ಯ, ಶಿಕ್ಷಣ ಹಾಗೂ ವ್ಯಕ್ತಿತ್ವದ ಮೇಲೆ ದುಷ್ಪರಿಣಾಮಗಳು ಉಂಟಾಗುತ್ತಿವೆ ಎಂದು ಹೇಳಿದರು. ಪ್ರತಿವರ್ಷ ಜುಲೈ 30ರಂದು ಮಾನವ ಕಳ್ಳಸಾಗಣೆ ವಿರೋಧಿ ದಿನದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ಇದ್ದರೆ ಅಪರಾಧಗಳಿಂದ ದೂರವಿರಲು ಸಾಧ್ಯವಾಗುತ್ತದೆ. ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಹೊಣೆಗಾರಿಕೆ ಪೋಷಕರು, ಶಿಕ್ಷಕರು ಹಾಗೂ ಪೊಲೀಸ್ ಇಲಾಖೆಯ ಮೇಲಿದೆ ಎಂದು ತಿಳಿಸಿದರು.ನಗರ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಕೃಷ್ಣಕುಮಾರ್ ಮಾತನಾಡಿ, ಶಿಕ್ಷಕರು ಜ್ಞಾನದ ಭಂಡಾರವಾಗಿದ್ದು, ವಿದ್ಯಾರ್ಥಿಗಳು ಉತ್ತಮ ಹವ್ಯಾಸಗಳನ್ನು ಬೆಳೆಸಿಕೊಂಡು ಗುರಿಯತ್ತ ಸಾಗಿದರೆ ಯಶಸ್ಸು ಸಾಧಿಸಲು ಸಾಧ್ಯ ಎಂದರು. ಶಿಶು ಅಭಿವೃದ್ಧಿ ಇಲಾಖೆಯ ಅಧಿಕಾರಿ ಯೋಗೇಶ್ ಮಾತನಾಡಿ, ಬಾಲ್ಯವಿವಾಹವು ಕಾನೂನುಬಾಹಿರ ಅಪರಾಧವಾಗಿದ್ದು, ಇಂತಹ ಪ್ರಕರಣಗಳು ಕಂಡುಬಂದರೆ ಕೂಡಲೇ ಪೊಲೀಸ್ ಇಲಾಖೆ ಅಥವಾ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಬೇಕು. ಇದರಿಂದ ಒಂದು ಮಗುವಿನ ಭವಿಷ್ಯವನ್ನು ರಕ್ಷಿಸಿದಂತಾಗುತ್ತದೆ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಸುನಿಲ್ ಡಿ.ವಿ. ಮಾತನಾಡಿ, ಅಪ್ರಾಪ್ತ ವಯಸ್ಸಿನಲ್ಲಿ ವಾಹನ ಚಾಲನೆ ಮಾಡುವುದು ಕಾನೂನುಬಾಹಿರ. ವಿದ್ಯಾರ್ಥಿಗಳು ಮೊಬೈಲ್ ಬಳಕೆಯನ್ನು ನಿಯಂತ್ರಿಸಿ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದರೆ ಕುಟುಂಬ, ಶಿಕ್ಷಣ ಸಂಸ್ಥೆ ಹಾಗೂ ಸಮಾಜಕ್ಕೆ ಕೀರ್ತಿ ತರುವ ಅವಕಾಶ ದೊರೆಯುತ್ತದೆ ಎಂದರು. ಕಾರ್ಯಕ್ರಮದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕ ಶಶಾಂಕ್ ಹಾಗೂ ವಕೀಲ ಆರ್. ವಿಜಯ್ ಕುಮಾರ್ ಮಾನವ ಕಳ್ಳಸಾಗಣೆ ಮತ್ತು ಕಾನೂನು ಜಾಗೃತಿಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಮಹಾಲಿಂಗಸ್ವಾಮಿ, ಗಂಗಾಧರ್, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.