ಕನ್ನಡಪ್ರಭ ವಾರ್ತೆ ಅರಸೀಕೆರೆ
ವಿದ್ಯಾರ್ಥಿ ದಶೆ ವ್ಯಕ್ತಿತ್ವ ನಿರ್ಮಾಣದ ಅಡಿಪಾಯವಾಗಿದ್ದು, ಈ ಅವಧಿಯಲ್ಲಿ ತೆಗೆದುಕೊಳ್ಳುವ ನಿರ್ಧಾರಗಳೇ ಭವಿಷ್ಯದ ದಿಕ್ಕನ್ನು ನಿರ್ಧರಿಸುತ್ತವೆ. ತಂಬಾಕು, ಮದ್ಯಪಾನ ಸೇರಿದಂತೆ ಯಾವುದೇ ದುಶ್ಚಟಗಳಿಗೆ ಬಲಿಯಾಗದೇ ಶಿಕ್ಷಣದ ಕಡೆ ಗಮನ ಹರಿಸಿದರೆ ಮಾತ್ರ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ನಗರ ಪೊಲೀಸ್ ನಿರೀಕ್ಷಕ ಕೃಷ್ಣಕುಮಾರ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ನಗರದ ಬಸವರಾಜೇಂದ್ರ ಪ್ರೌಢಶಾಲೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನದ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ವಿದ್ಯಾರ್ಥಿಗಳೊಂದಿಗೆ ಮುಕ್ತ ಸಂವಾದ ನಡೆಸಿದರು. ಮೊಬೈಲ್ ಬಳಕೆ, ಸಾಮಾಜಿಕ ಜಾಲತಾಣಗಳ ಸಂಪರ್ಕ ಹಾಗೂ ಅಪರಿಚಿತರೊಂದಿಗೆ ಚಾಟ್ ಮಾಡುವ ಸಂದರ್ಭಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿದರು. ವಿಶೇಷವಾಗಿ ವಿದ್ಯಾರ್ಥಿನಿಯರು ಆನ್‌ಲೈನ್ ವಂಚನೆ ಮತ್ತು ದುರ್ಬಳಕೆಯ ಬಗ್ಗೆ ಜಾಗೃತರಾಗಿರಬೇಕು ಎಂದು ಕಿವಿಮಾತು ಹೇಳಿದರು. ತಂಬಾಕು ಉತ್ಪನ್ನಗಳಾದ ಗುಟ್ಕಾ, ಜರ್ದಾ ಹಾಗೂ ಸಿಗರೇಟ್‌ಗಳ ಬಳಕೆ ಆರೋಗ್ಯಕ್ಕೆ ಮಾರಕವಾಗಿದ್ದು, ಕ್ಯಾನ್ಸರ್ ಸೇರಿದಂತೆ ಗಂಭೀರ ಕಾಯಿಲೆಗಳಿಗೆ ಕಾರಣವಾಗುತ್ತದೆ. ಒಂದು ದುಶ್ಚಟ ಮತ್ತೊಂದು ದುಶ್ಚಟಕ್ಕೆ ದಾರಿ ಮಾಡಿಕೊಡುವ ಸಾಧ್ಯತೆ ಇರುವುದರಿಂದ ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು ಸಕಾರಾತ್ಮಕ ವಾತಾವರಣದಲ್ಲಿ ಬೆಳೆಯಬೇಕು ಎಂದು ತಿಳಿಸಿದರು.ಅಪ್ರಾಪ್ತ ವಯಸ್ಸಿನಲ್ಲಿ ವಾಹನ ಚಾಲನೆ ಕಾನೂನುಬಾಹಿರವಾಗಿದ್ದು, ಅಂಥವರಿಗೆ ವಾಹನ ನೀಡುವ ಪೋಷಕರ ವಿರುದ್ಧವೂ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಸಿದರು. ಶಿಕ್ಷಣದ ಮೂಲಕವೇ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಾಧ್ಯವಾಗಿದ್ದು, ತಾವು ಸಹ ಬಾಲ್ಯದಲ್ಲೇ ದೊಡ್ಡ ಕನಸು ಕಂಡು ನಿರಂತರ ಪರಿಶ್ರಮದ ಮೂಲಕ ಪೊಲೀಸ್ ಅಧಿಕಾರಿಯಾಗಿದ್ದೇನೆ ಎಂದು ತಮ್ಮ ಅನುಭವ ಹಂಚಿಕೊಂಡರು. ಯಾವುದೇ ಅಕ್ರಮ ಚಟುವಟಿಕೆಗಳಿಂದ ದೂರವಿದ್ದು, ಸಮಾಜದಲ್ಲಿ ಜಾಗೃತಿ ಮೂಡಿಸುವ ಜವಾಬ್ದಾರಿಯನ್ನು ವಿದ್ಯಾರ್ಥಿಗಳು ವಹಿಸಿಕೊಳ್ಳಬೇಕು. ತುರ್ತು ಸಂದರ್ಭಗಳಲ್ಲಿ ಪೊಲೀಸ್ ನೆರವಿಗಾಗಿ 112 ಸಹಾಯವಾಣಿಗೆ ಕರೆ ಮಾಡಬಹುದು ಎಂದು ಮಾಹಿತಿ ನೀಡಿದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಅಕ್ಷತಾ ರೈ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಶಿಕ್ಷಣ, ಆರೋಗ್ಯ, ಪರಿಸರ ಸಂರಕ್ಷಣೆ, ದೇವಾಲಯಗಳ ಜೀರ್ಣೋದ್ಧಾರ, ಕೆರೆ ಅಭಿವೃದ್ಧಿ, ವಸತಿ ಸೌಲಭ್ಯ ಹಾಗೂ ವಿವಿಧ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ ಎಂದರು.ಜಿಲ್ಲಾ ಜನಜಾಗೃತಿ ಸಮಿತಿ ಸದಸ್ಯ ಎಚ್. ಡಿ. ಸೀತಾರಾಮ್ ಮಾತನಾಡಿ, ಮಹಿಳಾ ಸ್ವಸಹಾಯ ಸಂಘಗಳ ಮೂಲಕ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಯೋಜನೆ ಮಹತ್ವದ ಕೊಡುಗೆ ನೀಡುತ್ತಿದ್ದು, ಸ್ವಉದ್ಯೋಗ ಹಾಗೂ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡುತ್ತಿದೆ ಎಂದು ಹೇಳಿದರು. ಶಾಲೆಯ ಮುಖ್ಯಶಿಕ್ಷಕ ದಯಾನಂದ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾಲೆಗೆ ಅಗತ್ಯ ಪೀಠೋಪಕರಣಗಳು ಹಾಗೂ ಶಿಕ್ಷಕರ ನೆರವು ದೊರೆತಿದೆ. ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿಯೂ ಶಿಕ್ಷಕರ ಅಗತ್ಯವಿದ್ದು ಸಹಕಾರ ಮುಂದುವರಿಸಬೇಕು ಎಂದು ಮನವಿ ಮಾಡಿದರು.ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಮೇಲ್ವಿಚಾರಕಿ ಹರಿಣಾಕ್ಷಿ ಉಪಸ್ಥಿತರಿದ್ದರು.ತಂಬಾಕು ವ್ಯಸನದಿಂದ ದೂರವಿದ್ದು ಗುರಿಯತ್ತ ಸಾಗಿರಿ
ವಿದ್ಯಾರ್ಥಿನಿಯರು ಆನ್‌ಲೈನ್ ವಂಚನೆ ಮತ್ತು ದುರ್ಬಳಕೆಯ ಬಗ್ಗೆ ಜಾಗೃತರಾಗಿರಬೇಕು ಎಂದು ಕಿವಿಮಾತು ಹೇಳಿದರು. ತಂಬಾಕು ಉತ್ಪನ್ನಗಳಾದ ಗುಟ್ಕಾ, ಜರ್ದಾ ಹಾಗೂ ಸಿಗರೇಟ್‌ಗಳ ಬಳಕೆ ಆರೋಗ್ಯಕ್ಕೆ ಮಾರಕವಾಗಿದ್ದು, ಕ್ಯಾನ್ಸರ್ ಸೇರಿದಂತೆ ಗಂಭೀರ ಕಾಯಿಲೆಗಳಿಗೆ ಕಾರಣವಾಗುತ್ತದೆ. ಒಂದು ದುಶ್ಚಟ ಮತ್ತೊಂದು ದುಶ್ಚಟಕ್ಕೆ ದಾರಿ ಮಾಡಿಕೊಡುವ ಸಾಧ್ಯತೆ ಇರುವುದರಿಂದ ಉತ್ತಮ ಸ್ನೇಹಿತರನ್ನು ಆಯ್ಕೆ ಮಾಡಿಕೊಂಡು ಸಕಾರಾತ್ಮಕ ವಾತಾವರಣದಲ್ಲಿ ಬೆಳೆಯಬೇಕು ಎಂದು ತಿಳಿಸಿದರು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.