ಕನ್ನಡಪ್ರಭ ವಾರ್ತೆ ಮಳವಳ್ಳಿ

ಯುವಕರಿಗೆ ಉದ್ಯೋಗ ನೀಡುತ್ತೇವೆಂದು ಕೇಂದ್ರ ಸರ್ಕಾರ ಉದ್ಯೋಗವನ್ನು ಕಸಿಯುತ್ತಿರುವುದು ದೇಶಕ್ಕೆ ಮಾರಕವಾಗಿದೆ ಎಂದು ಜನವಾದಿ ಮಹಿಳಾ ಸಂಘಟನೆ ರಾಜ್ಯಾಧ್ಯಕ್ಷೆ ದೇವಿ ತಿಳಿಸಿದರು.

ಪಟ್ಟಣದಲ್ಲಿ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಸಂಯುಕ್ತ ಕಿಸಾನ್ ಮೋರ್ಚಾ ಕರೆಯ ಮೇರೆಗೆ ಹಮ್ಮಿಕೊಂಡಿದ್ದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದಲ್ಲಿ ಭಾಗವಹಿಸಿ ಮಾತನಾಡಿ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಸಂಪತ್ತನ್ನು ಸೃಷ್ಟಿಸುವ ಕಾರ್ಮಿಕರನ್ನು ಸಂಪೂರ್ಣವಾಗಿ ತಮ್ಮ ಹಿಡಿತದಲ್ಲಿಟ್ಟುಕೊಳ್ಳಲು ೨೯ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ೪ ಕಾರ್ಮಿಕ ಸಂಹಿತೆಗಳನ್ನಾಗಿ ಅಂತಿಮ ಪ್ರಕಟಣೆ ಹೊರಡಿಸಿರುವುದು ಖಂಡನೀಯ ಎಂದರು.

ಮಹಾತ್ಮಾಗಾಂಧಿ ನರೇಗಾ ಕಾಯ್ದೆಯನ್ನು ವಿಕಸಿತ್ ಭಾರತ್ ರೋಜ್‌ಗಾರ್ ಮತ್ತು ಅಜೀವಿಕ ಮೀಷನ್ ಕಾಯ್ದೆ ೨೦೨೫ ಎಂದು ಬದಲಾಯಿಸುವುದರ ಮೂಲಕ ತಳಹಂತದ ಸಾಮಾಜಿಕವಾಗಿ, ಆರ್ಥಿಕವಾಗಿ ಹಿಂದುಳಿದ ಕೂಲಿಕಾರರ ಮೇಲಿನ ಗದಾ ಪ್ರಹಾರ ಮತ್ತು ಶ್ರಮಜೀವಿಗಳನ್ನು ಅಣಕಿಸುವಂತಾಗಿದೆ ಎಂದರು.

ನೂರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಕೂಲಿ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ತಾಲೂಕು ಪಂಚಾಯಿತಿಯಿಂದ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗುತ್ತಾ ಮೆರವಣಿಗೆ ಹೊರಟು ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದರು. ಪಟ್ಟಣದ ಅನಂತ್‌ರಾವ್‌ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.


ಪ್ರತಿಭಟನೆಯಲ್ಲಿ ಮುಖಂಡರಾದ ಭರತ್‌ರಾಜ್, ತಿಮ್ಮೇಗೌಡ, ಮಹದೇವಮ್ಮ ಇತರರಿದ್ದರು.