ಆಲ್ದೂರುಮಲೆನಾಡು ಭಾಗದ ಜನರ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಿ, ಸಾರ್ವಜನಿಕರ ಸಮಸ್ಯೆಯನ್ನು ಹಂತ ಹಂತ ವಾಗಿ ಹಾಗೂ ನಿಯಮಾನುಸಾರ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಭರವಸೆ ನೀಡಿದರು.

ಪ್ರಜಾಸೇವೆ ಆಂದೋಲನದ ಅಂಗವಾಗಿ ಆಲ್ದೂರು ಹೋಬಳಿ ವ್ಯಾಪ್ತಿಯ ಸಾರ್ವಜನಿಕರ ಕುಂದುಕೊರತೆ ಸಭೆ

ಕನ್ನಡಪ್ರಭ ವಾರ್ತೆ, ಆಲ್ದೂರುಮಲೆನಾಡು ಭಾಗದ ಜನರ ಮೂಲಭೂತ ಸೌಕರ್ಯಗಳಿಗೆ ಆದ್ಯತೆ ನೀಡಿ, ಸಾರ್ವಜನಿಕರ ಸಮಸ್ಯೆಯನ್ನು ಹಂತ ಹಂತ ವಾಗಿ ಹಾಗೂ ನಿಯಮಾನುಸಾರ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮೂಡಿಗೆರೆ ಕ್ಷೇತ್ರದ ಶಾಸಕಿ ನಯನಾ ಮೋಟಮ್ಮ ಭರವಸೆ ನೀಡಿದರು.ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಆಶಯದಂತೆ ಹಮ್ಮಿಕೊಂಡಿರುವ ಪ್ರಜಾಸೇವೆ ಆಂದೋಲನದ ಅಂಗವಾಗಿ ಸತ್ತಿಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಚಗೊಂಡನಹಳ್ಳಿ ಕಟ್ಟಡದಲ್ಲಿ ಆಲ್ದೂರು ಹೋಬಳಿ ವ್ಯಾಪ್ತಿಯ ಸಾರ್ವಜನಿಕರ ಕುಂದುಕೊರತೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಅಪ್ಪಟ ಮಲೆನಾಡು ಪ್ರದೇಶವಾದ ಈ ಭಾಗದಲ್ಲಿ ಹಲವು ಮೂಲಭೂತ ಸಮಸ್ಯೆಗಳಿವೆ. ಕುಡಿಯುವ ನೀರು, ರಸ್ತೆ, ವಿದ್ಯುತ್ ಸೇರಿದಂತೆ ಸಾರ್ವಜನಿಕರ ಅಗತ್ಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಜನರು ನೆಮ್ಮದಿಯಿಂದ ಬದುಕಲು ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳ ಸಹಕಾರದೊಂದಿಗೆ ಶಕ್ತಿಮೀರಿ ಶ್ರಮಿಸಲಾಗುವುದು ಎಂದರು.ಚಿಕ್ಕಮಗಳೂರು ತಹಸೀಲ್ದಾರ್ ರೇಷ್ಮಾ ಮಾತನಾಡಿ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಇತರ ಇಲಾಖೆ ಗಳ ಸಮನ್ವಯದೊಂದಿಗೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು. ತಾಪಂ ಕಾರ್ಯನಿರ್ವಹಣಾಧಿಕಾರಿ ತಮ್ಮ ವ್ಯಾಪ್ತಿಯ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದಾಗಿ ತಿಳಿಸಿದರು.ಸತ್ತಿಹಳ್ಳಿ, ಕೆಳಗೂರು, ಆಲ್ದೂರು ಹಾಗೂ ದೊಡ್ಡಮಾಗರವಳ್ಳಿ ಗ್ರಾಪಂ ವ್ಯಾಪ್ತಿಯ ಸಾರ್ವಜನಿಕರಿಂದ ಕುಡಿವ ನೀರು, ಸಿಸಿ ರಸ್ತೆ, ನಿವೇಶನ, ವಿದ್ಯುತ್ ಸಮಸ್ಯೆ, ಗ್ರಾಮಗಳ ಒಳರಸ್ತೆಗಳ ಅಭಿವೃದ್ಧಿ ಹಾಗೂ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ದಾರಿ ಸೇರಿದಂತೆ ಹಲವು ವಿಷಯಗಳ ಕುರಿತು ಅರ್ಜಿಗಳು ಸಲ್ಲಿಕೆಯಾಗಿದ್ದವು.ಸಭೆಯಲ್ಲಿ ಸಲ್ಲಿಕೆಯಾದ ಅರ್ಜಿಗಳ ಪೈಕಿ ಸುಮಾರು 15- 20 ಅರ್ಜಿಗಳನ್ನು ಪರಿಶೀಲಿಸಲಾಯಿತು. 94ಸಿ ಹಕ್ಕುಪತ್ರ ವಿತರಣೆ, ಇತ್ತೀಚೆಗೆ ನಿರ್ಮಿಸಿರುವ ರಸ್ತೆ ಕಾಮಗಾರಿಗಳ ಕಳಪೆ ಗುಣಮಟ್ಟ, ನ್ಯಾಯಬೆಲೆ ಅಂಗಡಿಗಳ ಕೆವೈಸಿ ಸಮಸ್ಯೆ ಸೇರಿದಂತೆ ಹಲವು ವಿಚಾರಗಳು ಚರ್ಚೆಗೆ ಬಂದವು. ಸರ್ವೆ ನಂ.167ರಲ್ಲಿ ಮಂಜೂರಾಗಿರುವ 10 ಎಕರೆ ಜಾಗವನ್ನು ಆಶ್ರಯ ನಿವೇಶನಗಳಿಗೆ ಮೀಸಲಿಟ್ಟು ಫಲಾನುಭವಿಗಳಿಗೆ ಆರು ತಿಂಗಳಿಂದ ಒಂದು ವರ್ಷದೊಳಗೆ ನಿವೇಶನ ಒದಗಿಸುವ ಭರವಸೆ ನೀಡಲಾಯಿತು.ರೈತ ಸಂಘದ ಮುಖಂಡ ತುಳಸೇಗೌಡ ಆಲ್ದೂರು ಪಟ್ಟಣದ ರಸ್ತೆ ಅಗಲೀಕರಣ ಹಾಗೂ ಬಸ್ ನಿಲ್ದಾಣ ನಿರ್ಮಾಣದ ಕುರಿತು ಗಮನ ಸೆಳೆದರು. ಸಿ.ಡಿ.ಶಿವಕುಮಾರ್ ಆಲ್ದೂರು ಗ್ರಾಪಂನ ಭ್ರಷ್ಟಾಚಾರದ ಆರೋಪಗಳ ಕುರಿತು ಪ್ರಸ್ತಾಪಿಸಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಆಲ್ದೂರಿನಿಂದ ಹಾಂದಿವರೆಗಿನ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಶೀಘ್ರ ಕಾಮಗಾರಿ ಆರಂಭಿಸಬೇಕು ಎಂಬ ಒತ್ತಾಯವೂ ಸಭೆಯಲ್ಲಿ ಕೇಳಿಬಂತು.ಲೋಕೋಪಯೋಗಿ ಇಲಾಖೆ ಎಂಜಿನಿಯರ್ ಮಲ್ಲಿಕಾರ್ಜುನ್, ತಾಪಂ ಕಾರ್ಯನಿರ್ವಹಣಾಧಿಕಾರಿ ವಿಜಯಕುಮಾರ್, ಪೊಲೀಸ್ ವೃತ್ತ ನಿರೀಕ್ಷಕ ಪಿ.ಪಿ.ಸೋಮೇಗೌಡ, ಸತ್ತಿಹಳ್ಳಿ ಪಂಚಾಯಿತಿ ಪಿಡಿಒ ಸುರಯ್ಯ ಬಾನು, ಕಂದಾಯ ನಿರೀಕ್ಷಕ ಪ್ರದೀಪ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗ ವಹಿಸಿದ್ದರು. ಅರಣ್ಯ, ಅಬಕಾರಿ, ಕೃಷಿ, ಶಿಕ್ಷಣ, ಕೆಎಸ್‌ಆರ್‌ಟಿಸಿ, ಮೆಸ್ಕಾಂ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಆಹಾರ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.