ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಖಾನಾಪುರ ತಾಲೂಕಿನ ಹಲಕರ್ಣಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂದಿರಾ ನಗರದಲ್ಲಿ ಹಕ್ಕಿ-ಪಿಕ್ಕಿ ಸಮುದಾಯದ ಜನರು ವಾಸವಿರುವ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ, ಅಲ್ಲಿನ ಕುಟುಂಬಗಳ ಸ್ಥಿತಿಗತಿ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ಖಾನಾಪುರ ತಾಲೂಕಿನ ಹಲಕರ್ಣಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂದಿರಾ ನಗರದಲ್ಲಿ ಹಕ್ಕಿ-ಪಿಕ್ಕಿ ಸಮುದಾಯದ ಜನರು ವಾಸವಿರುವ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿ, ಅಲ್ಲಿನ ಕುಟುಂಬಗಳ ಸ್ಥಿತಿಗತಿ ಪರಿಶೀಲಿಸಿದರು.

ಸಮುದಾಯದ ಎಲ್ಲ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ದಾಖಲಿಸಿ, ಉತ್ತಮ ಶಿಕ್ಷಣ ಕೊಡಬೇಕು. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ಕ್ರಮವಹಿಸಬೇಕು ಎಂದು ಸ್ಥಳದಲ್ಲಿ ಹಾಜರಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಸೂಚಿಸಿದರು. ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳನ್ನು ಗುರುತಿಸಿ ಶೇ.100ರಷ್ಟು ದಾಖಲಾತಿ ಖಚಿತಪಡಿಸಿಕೊಳ್ಳುವಂತೆ ನಿರ್ದೇಶನ ನೀಡಿದರು.

ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಅವರಲ್ಲಿರುವ ಕೌಶಲ್ಯಗಳನ್ನು ಗುರುತಿಸಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಯೋಜನೆಯಡಿ ಕೌಶಲ್ಯ ತರಬೇತಿ ಹಾಗೂ ಸ್ವಉದ್ಯೋಗದ ಅವಕಾಶಗಳನ್ನು ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸಮುದಾಯದ ಪ್ರತಿಯೊಬ್ಬರಿಗೂ ಆಧಾರ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿ ಒದಗಿಸಲು ಕ್ರಮವಹಿಸುವಂತೆ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದ ಅವರು, ಅಗತ್ಯವಿದ್ದಲ್ಲಿ ಆಧಾರ್ ನೋಂದಣಿ ಸಿಬ್ಬಂದಿಯನ್ನು ಸ್ಥಳಕ್ಕೇ ಕರೆಸಿ ಸೇವೆ ಒದಗಿಸುವಂತೆ ಸೂಚಿಸಿದರು. ಚಿಕ್ಕ ಮಕ್ಕಳನ್ನು ಅಂಗನವಾಡಿಗೆ ದಾಖಲಿಸಿ ಪೌಷ್ಟಿಕ ಆಹಾರ ಹಾಗೂ ಅಗತ್ಯ ಸೇವೆಗಳನ್ನು ಒದಗಿಸಲು ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿಗೆ ನಿರ್ದೇಶನ ನೀಡಿದರು.ಹಕ್ಕಿ-ಪಿಕ್ಕಿ ಸಮುದಾಯದ ಜನರಿಗೆ ಶಾಶ್ವತ ಪರಿಹಾರ ಒದಗಿಸಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಕ್ರಮವಹಿಸಲಾಗುವುದು ಎಂದು ಭರವಸೆ ನೀಡಿದರು.ಜಲಜೀವನ್ ಮಿಷನ್ ಕಾಮಗಾರಿ ಪರಿಶೀಲನೆ: ಬಳಿಕ ಬರಗಾಂವ ಗ್ರಾಮ ಪಂಚಾಯತಿ ವ್ಯಾಪ್ತಿಯ ಭಂಡರಗಾಳಿ ಗ್ರಾಮದಲ್ಲಿ ಜಲಜೀವನ ಮಿಷನ್ ಕಾಮಗಾರಿ ವೀಕ್ಷಿಸಿ ಕಾಮಗಾರಿಯ ಗುಣಮಟ್ಟ ಹಾಗೂ ಪ್ರಗತಿಯನ್ನು ಪರಿಶೀಲಿಸಿದರು. ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಶಾಲೆಯಲ್ಲಿನ ಮೂಲಸೌಕರ್ಯಗಳು ಹಾಗೂ ಶಿಕ್ಷಕರ ಹಾಜರಾತಿಯ ಕುರಿತು ಮಾಹಿತಿ ಪಡೆದರು. ಗ್ರಾಮದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯ ಪ್ರಗತಿ ಪರಿಶೀಲಿಸಿದರು.ನಂತರ ತಾಲೂಕು ಪಂಚಾಯತಿ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ತಾಲೂಕು ಮಟ್ಟದ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ವಿವಿಧ ಇಲಾಖೆಯ ಪ್ರಗತಿ ಪರಿಶೀಲಿಸಿದರು.ಡೆಂಘೀ ನಿಯಂತ್ರಣಕ್ಕಾಗಿ ಗ್ರಾಮಮಟ್ಟದಲ್ಲಿ ವ್ಯಾಪಕ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಹಾಗೂ ಅಗತ್ಯವಿರುವ ಪ್ರದೇಶಗಳಲ್ಲಿ ಮೊಬೈಲ್ ಹೆಲ್ತ್ ಘಟಕಗಳನ್ನು ಸ್ಥಾಪಿಸಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ವ್ಯವಸ್ಥೆ ಕಲ್ಪಿಸಲು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜಗಾರ್ ಆ್ಯಂಡ್‌ ಅಜೀವಿಕಾ ಮಿಷನ್ (ಗ್ರಾಮೀಣ) ಯೋಜನೆಯನ್ನು ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಕೂಲಿಕಾರರಿಗೆ ಕೂಲಿ ಕೆಲಸ ಒದಗಿಸಬೇಕು. ಮಾನವ ದಿನಗಳ ಸೃಜನೆಗೆ ಅಗತ್ಯ ಕ್ರಮವಹಿಸಬೇಕು. ಯೋಜನೆಯ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ನಿರ್ದೇಶನ ನೀಡಿದರು. ಇದೇ ಸಂದರ್ಭದಲ್ಲಿ ಯೋಜನೆಯ ಮಾಹಿತಿ ಒಳಗೊಂಡಿರುವ ಕರಪತ್ರಗಳನ್ನು ಬಿಡುಗಡೆಗೊಳಿಸಿದರು.ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಮೇಶ ಮೇತ್ರಿ, ಪಂಚಾಯತ್‌ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಂದ್ರ ಜಾಧವ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಹತ್ತಿ, ತಾಪಂ ಸಹಾಯಕ ನಿರ್ದೇಶಕರಾದ ವಿಜಯ ಕೋತಿನ, ಶಶಿಧರ ಬಳ್ಳಾರಿ, ಹಲಕರ್ಣಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ರೇಶ್ಮಾ ಪಾನೀವಾಲೆ ಸೇರಿ ವಿವಿಧ ಇಲಾಖೆಯ ತಾಲೂಕಾಮಟ್ಟದ ಅಧಿಕಾರಿಗಳು, ಸಿಬ್ಬಂದಿ, ಹಕ್ಕಿ-ಪಿಕ್ಕಿ ಸಮುದಾಯದ ಮುಖಂಡರು ಹಾಗೂ ತಾಲೂಕಿನ ವಿವಿಧ ದಲಿತ ಸಂಘಟನೆಗಳ ಪದಾಧಿಕಾರಿಗಳು ಹಾಜರಿದ್ದರು.